ಕೋಲಾರ

ಸಿಇಟಿ ಮೂಲಕವೇ ಸೀಟು, ಶುಲ್ಕ ನಿಗದಿ ಆಗಲಿ

Published On :

ಕ.ಪ್ರ.ವಾರ್ತೆ ,  ಕೋಲಾರ ,  ಡಿ.18
ರಾಜ್ಯ ಸರ್ಕಾರ ಸಿಇಟಿ ಮೂಲಕವೇ ವೃತ್ತಿ ಶಿಕ್ಷಣ ಸೀಟು ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ನಗರದಲ್ಲಿ ಬುಧವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನಿಂದ ಬೃಹತ್ ಪ್ರತಿಭಟನೆ ನಡೆಯಿತು.
ಎಸ್.ಎಫ್.ಐ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಮಾಯಿಸಿ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ(ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ ಕಾಯಿದೆ)ಹೆಸರಿನಲ್ಲಿ ಇಡೀ ವೃತ್ತಿ ಶಿಕ್ಷಣವನ್ನು ಮಾರಾಟದ ಸರಕನ್ನಾಗಿ ಮಾಡಲು ರಾಜ್ಯ ಸರ್ಕಾರ ಸಂಚು ಮಾಡುತ್ತಿದೆ ಎಂದು ಎಬಿವಿಪಿ ಮತ್ತು ಎಸ್.ಎಫ್.ಐ ಮುಖಂಡರು ಆರೋಪಿಸಿದರು.
ಎಬಿವಿಪಿಯಿಂದ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಸಂಘಟನಾ ಸಂಚಾಲಕ ಮುರಳಿ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದು ಬಡ ವಿದ್ಯಾರ್ಥಿಗಳ ವೃತ್ತಿ ಶಿಕ್ಷಣದ ಕನಸನ್ನು ಭಗ್ನಗೊಳಿಸುತ್ತಿರುವ ಸರ್ಕಾರದ ವಿರುದ್ಧ ಇಡೀ ವಿದ್ಯಾರ್ಥಿ ಸಮುದಾಯ ಭುಗಿಲೇಳುವ ಮುಂಚೆ ಸಿಇಟಿ ಮೂಲಕವೇ ವೃತ್ತಿ ಶಿಕ್ಷಣ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿಯ ಕ್ರಮ ಮುಂದುವರೆಸಲು ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು.
ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ಕೆಲ ಅಧಿಕಾರಿಗಳು ಕಾಮೇಡ್‌ಕೆ ಪರವಾಗಿ ಆಸಕ್ತಿ ಹೊಂದಿದ್ದಾರೆ. ಈ ಅಧಿಕಾರಿಗಳಿಗೆ ಬಡ ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ವೃತ್ತಿ ಶಿಕ್ಷಣವನ್ನು ವ್ಯಪಾರಿಕರಣಗೊಳಿಸುವುದೇ ಮುಖ್ಯವಾಗಿದೆ, ಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಂಡರೆ ರಾಜ್ಯಾಧ್ಯಂತ ಉಗ್ರ ಪ್ರತಿಭಟನೆ ನಡೆಯುತ್ತದೆ ಎಂದು ಎಸ್.ಎಫ್.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಸುದೇವರೆಡ್ಡಿ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಹೆಡ್‌ಮುನ್ಶಿ ಕೃಷ್ಣೇಗೌಡರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಬಿವಿಪಿಯ ನಗರ ಕಾರ್ಯದರ್ಶಿ ಹರೀಶ್, ತಾಲೂಕು ಸಂಘಟನಾ ಕಾರ್ಯದರ್ಶಿ ವಿಜಿ, ಮುಖಂಡರಾದ ಪ್ರೇಮ, ಶ್ವೇತ, ಸರಸ್ವತಿ, ಅನಿತಾ, ಅಶ್ವಿನಿ ಹಾಗೂ ಮುರಳಿ ಇದ್ದರು.
ಎಸ್.ಎಫ್.ಐನಿಂದ ನಡೆದ ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಕೆ. ವಾಸುದೇವಾರೆಡ್ಡಿ, ರಾಜ್ಯ ಸಮಿತಿ ಸದಸ್ಯ ಎನ್.ಮಾರ್ಕಂಡಯ್ಯ, ಸಿ. ಅಮರೇಶ್, ತಾಲೂಕು ಅಧ್ಯಕ್ಷ ಮೊಹಮದ್ ಮಸ್ತಾಫ್, ಕಾರ್ಯದರ್ಶಿ ಪುನೀತ್, ಸದಸ್ಯರಾದ ಮನ್ಸೂರ್‌ಪಾಷ, ರಾಜಶೇಖರ್, ಮಲ್ಲಿಕಾರ್ಜುನ, ಕೃಷ್ಣಮೂರ್ತಿ, ಮುನಿಸ್ವಾಮಿಗೌಡ, ಅರವಿಂದಪ್ರಸಾದ್, ಅರುಣ್‌ಕುಮಾರ್, ಅಮರ್‌ನಾಥ್, ಕಾರ್ತೀಕ್, ಮನೋಜ್, ಸುರೇಶ್, ಕುಮಾರ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.