ಎನ್ಎಚ್7 ಭೂ ವಿವಾದ: ರೈತರಿಗೆ ಭರವಸೆ
ಚಿಕ್ಕಬಳ್ಳಾಪುರ: ಬೆಂಗಳೂರಿನ ಕಂದಾಯ ಇಲಾಖೆ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಯಿತು.
ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಎನ್.ಎಚ್.7 ರಸ್ತೆ ಬೈಪಾಸ್ ರಸ್ತೆ ನಿರ್ಮಾಣ ಮತ್ತು ಅಗಲೀಕರಣಕ್ಕಾಗಿ ರೈತರಿಂದ ಸ್ವಾಧೀನಪಡಿಸಿಕೊಂಡಿರುವ ಕೃಷಿ ಭೂಮಿಗೆ ಪರಿಹಾರ ವಿತರಣೆ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಗಂಭೀರವಾಗಿ ಚರ್ಚಿಸಲಾಗಿದ್ದು ಸಕಾರಾತ್ಮಕ ಭರವಸೆ ಸಿಕ್ಕಿದೆ ಎಂದು ರೈತರು ಹರ್ಷ ವ್ಯಕ್ತಪಡಿಸಿದ್ದಾರೆ.
ರೈತರ ಸಮಸ್ಯೆಯನ್ನು ಆಲಿಸುವುದರ ಜತೆಗೆ ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್ ಖುದ್ದು ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತ ಗೌರವ ಗುಪ್ತ್, ರೈತರ ಸಮಸ್ಯೆಯನ್ನು ಬಗೆಹರಿಸಲಾಗುವುದು. ಪ್ರಸ್ತುತ ಸಮಸ್ಯೆಯ ವಾಸ್ತವಾಂಶದ ಬಗ್ಗೆ ಚರ್ಚೆ ನಡೆಸಲಾಗಿದೆ. ಇನ್ನೂ ಒಂದು ವಾರದಲ್ಲಿ ಮತ್ತೊಮ್ಮೆ ಸಭೆಯನ್ನು ನಡೆಸಿ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು ಎಂದು ಹೇಳಲಾಗಿದೆ.
ಸಭೆಯಲ್ಲಿದ್ದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, 2007 ರಲ್ಲಿ ರಾಷ್ಟ್ರೀಯ ಹೆದ್ದಾರಿ 7 ಬೈಪಾಸ್ ರಸ್ತೆ ನಿರ್ಮಾಣ ಮತ್ತು ಅಗಲೀಕರಣಕ್ಕಾಗಿ ರೈತರಿಂದ ಕೋಟ್ಯಂತರ ರು. ಮೌಲ್ಯದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲಾಯಿತು.ಆ ಸಂದರ್ಭದಲ್ಲಿ ಅಲ್ಪ ಪರಿಹಾರ ನೀಡಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೆಲವರು ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. ಅಲ್ಲದೇ ಕಾಮಗಾರಿಗೆ ಅಡ್ಡಿಪಡಿಸಿದ್ದರು.
ಆ ಸಂದರ್ಭದಲ್ಲಿ ಶಾಸಕರಾಗಿದ್ದ ತಾವು, ಜಿಲ್ಲಾಧಿಕಾರಿ (ಹಿಂದಿನ),ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರೈತರಿಗೆ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಾಮಗಾರಿ ಸುಗಮವಾಗಿ ನಡೆಯಿತು.
ಆದರೆ,ಆ ನಂತರ ಅಧಿಕಾರಿಗಳು ತಲೆ ಕೆಡಿಸಿಕೊಳ್ಳದಿರುವುದರಿಂದ ಸಹಜವಾಗಿ ರೈತರು ಕಿಡಿಕಾರುತ್ತಿದ್ದಾರೆ.ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಿಕೊಡಬೇಕೆಂದು ಮನವಿ ಮಾಡಿದಾಗ,ಈ ಹಿಂದಿನ ಜಿಲ್ಲಾಧಿಕಾರಿ ಅಸಮರ್ಪಕ ರೀತಿಯಲ್ಲಿ ನಿರ್ಧಾರ ಮಾಡಿರುವುದು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಏಕಾಏಕಿ ಪರಿಹಾರ ಘೋಷಣೆಯಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಾಗುವುದಿಲ್ಲ.ಪ್ರಮುಖವಾಗಿ ಕಾನೂನು ನಿಯಮವನ್ನು ಪಾಲನೆ ಮಾಡಬೇಕು. ಇನ್ನೂ ಕೂಲಂಕಂವಾಗಿ ಚರ್ಚೆ ನಡೆಸಲಿದ್ದು ಮುಂದಿನ ಒಂದು ವಾರದಲ್ಲಿ ಮತ್ತೊಮ್ಮೆ ಸಭೆಯನ್ನು ನಡೆಸುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಹಿಂದೆಯೆಲ್ಲಾ ರೈತರ ಪರವಾಗಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿರುವುದನ್ನು ಸಮರ್ಪಕ ರೀತಿಯಲ್ಲಿ ಕಾರ್ಯ ರೂಪಕ್ಕೆ ತಾರದಿರದ ಈ ಹಿಂದಿನ ಜಿಲ್ಲಾಧಿಕಾರಿ ಬಗ್ಗೆ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ,ರೈತ ಮುಖಂಡರು ಅಸಮಾಧಾನ ಹೊರ ಹಾಕಿದರು.
ಇದೇ ವೇಳೆ 42 ರೈತರಿಗೆ ಭೂ ಪರಿಹಾರ ವಿತರಣೆಯ ವಿಷಯದಲ್ಲಿ ನ್ಯಾಯಾಲಯದ ಮೆಟ್ಟಿಲೇರಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ದಾವೆ ಹಿಂಪಡೆಯಲಾಗುವುದು. ಸೂಕ್ಷ್ಮ ಪ್ರಕರಣಗಳ ಬಗ್ಗೆ ಆದಷ್ಟು ಬೇಗ ಚರ್ಚೆ ನಡೆಸಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಕಂದಾಯ ಇಲಾಖೆಯ ಹೆಚ್ಚುವರಿ ಆಯುಕ್ತ ಅಪ್ಪಯ್ಯ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸುರೇಂದ್ರ ಸಿಂಗ್, ರೈತ ಮುಖಂಡ ಯಲುಹಳ್ಳಿ ಸೊಣ್ಣೇಗೌಡ, ಭಕ್ತರಹಳ್ಳಿ ಭೈರೇಗೌಡ, ಆನಂದ್, ನಾಗರಾಜ್ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

