ಕೋಲಾರ

ಶಿಕ್ಷಣ ಸಚಿವರ ಪ್ರತಿಕೃತಿ ದಹನ

Published On :

ಕ.ಪ್ರ.ವಾರ್ತೆ ,  ಕೋಲಾರ ,  ಡಿ.20
ರಾಜ್ಯ ಸರ್ಕಾರ ಸಿಇಟಿ ಮೂಲಕವೇ ವೃತ್ತಿ ಶಿಕ್ಷಣ ಸೀಟು ಹಂಚಿಕೆ ಮಾಡಬೇಕು ಹಾಗೂ ಶುಲ್ಕವನ್ನು ಸಹ ನಿಗದಿ ಪಡಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಬುಧವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನಿಂದ (ಎಬಿವಿಪಿ) ರಸ್ತೆ ತಡೆ ಮಾಡಿ ವೈದ್ಯಕೀಯ ಶಿಕ್ಷಣ ಸಚಿವರ ಪ್ರತಿಕೃತಿ ದಹನ ಮಾಡಲಾಯಿತು.
ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕಾರಿ ಬಸ್ ನಿಲ್ದಾಣ ಬಳಿ ಜಮಾಯಿಸಿ ಕೆಲ ನಿಮಿಷ ರಸ್ತೆ ತಡೆ ಮಾಡಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರಲ್ಲದೆ ವೈದ್ಯಕೀಯ ಶಿಕ್ಷಣ ಸಚಿವರ ಪ್ರತಿಕೃತಿ ಸುಟ್ಟು ವೃತ್ತಿ ಶಿಕ್ಷಣದ ನೀತಿಯನ್ನು ಖಂಡಿಸಿದರು.
ರಸ್ತೆ ತಡೆ ಮಾಡದಂತೆ ಹಾಗೂ ಪ್ರತಿಕೃತಿ ದಹನ ಮಾಡದಂತೆ ಪೊಲೀಸರು ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರು ಪರದಾಡಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಸಂಘಟನಾ ಸಂಚಾಲಕ ಮುರಳಿ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಮರ್ಜಿಗೆ ಒಳಗಾಗಿ ವೈದ್ಯಕೀಯ ಶಿಕ್ಷಣ ಸಚಿವರು ಸಿಇಟಿ ರದ್ದು ಮಾಡಿ ಕಾಮೇಡ್ ಕೆ ಅನುಷ್ಠಾನಕ್ಕೆ ಮುಂದಾಗಿದ್ದಾರೆಂದು ಆರೋಪಿಸಿದರು.
ಸಿಇಟಿ ಮೂಲಕವೇ ವೃತ್ತಿ ಶಿಕ್ಷಣ ಸೀಟು ಹಂಚಿಕೆ ಆಗಬೇಕು, ಶುಲ್ಕ ಯಾವುದೇ ಕಾರಣಕ್ಕೂ ಹೆಚ್ಚಳ ಮಾಡಬಾರದು, ಒಂದು ವೇಳೆ ವಿದ್ಯಾರ್ಥಿಗಳ ಹೋರಾಟ ಲಘುವಾಗಿ ಪರಿಗಣಿಸಿದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಎಬಿವಿಪಿಯ ನಗರ ಕಾರ್ಯದರ್ಶಿ ಹರೀಶ್, ತಾಲೂಕು ಸಂಘಟನಾ ಕಾರ್ಯದರ್ಶಿ ವಿಜಿ, ಮುಖಂಡರಾದ ಮುರಳಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.