ಜ.15ರೊಳಗೆ ಸವಲತ್ತು ವಿತರಣೆಗೆ ಸೂಚನೆ
ಕ.ಪ್ರ.ವಾರ್ತ್ಣೆ ಕೋಲಾರ ಡಿ.22
ವಿಶೇಷ ಘಟಕ ಯೋಜನೆಯಡಿ ಬುಡಕಟ್ಟು ಜನಾಂಗಕ್ಕೆ ಸರ್ಕಾರದಿಂದ ಮಂಜೂರಾಗಿರುವ ಸವಲತ್ತುಗಳನ್ನು ಜ.15 ರೊಳಗೆ ವಿತರಣೆ ಮಾಡಬೇಕೆಂದು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಎನ್. ಶ್ರೀನಿವಾಸಚಾರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರಾಭಿವೃದ್ಧಿ ಯೋಜನೆಯಲ್ಲಿ ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಒಟ್ಟು 67 ಕೋಟಿ ರು.ಖರ್ಚು ಮಾಡಲಾಗಿದೆ. ಆದರೆ ವಾಸ್ತವ್ಯವಾಗಿ ಕಾಮಗಾರಿಗಳು ಸಮರ್ಪಕವಾಗಿ ನಡೆದಿರುವ ಬಗ್ಗೆ ತನಿಖೆ ಮಾಡಬೇಕೆಂದು ಜಿಲ್ಲಾಧಿಕಾರಿಗೆ ಆದೇಶಿಸಿದರು.
ಜಿಲ್ಲೆಯಲ್ಲಿ ಕಾಲುಬಾಯಿ ಜ್ವರದಿಂದ 2,390 ಹಸುಗಳು ಸತ್ತಿದ್ದು ಈವರೆವಿಗೂ 1.50 ಕೋಟಿ ರು.ಗಳು ಬಿಡುಗಡೆಯಾಗಿದ್ದು 650 ಫಲಾನುಭವಿಗಳಿಗೆ ತಲಾ 25 ಸಾವಿರ ಮತ್ತು ಕರುಗಳಿಗೆ ಹತ್ತು ಸಾವಿರ ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಶಿವರಾಂ ಸಭೆಗೆ ತಿಳಿಸಿದಾಗ, ಯಾವುದೇ ಕಾರಣಕ್ಕೂ ಪರಿಹಾರ ವಿತರಣೆಯಲ್ಲಿ ವಿಳಂಬ ಹಾಗೂ ವ್ಯತ್ಯಾಸಗಳು ಆಗದಂತೆ ಎಚ್ಚರವಹಿಸಬೇಕೆಂದು ಶ್ರೀನಿವಾಸಚಾರಿ ತಿಳಿಸಿದರು.
ಡಿ.ಸಿ.ಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶಪ್ಪ ಮಾತನಾಡಿ, ವೈದ್ಯನಾಥನ್ ಶಿಫಾರಸ್ಸಿನಂತೆ ಕೇಂದ್ರದಿಂದ 33 ಕೋಟಿ ರು. ಬರಬೇಕಾಗಿದೆ. ಈಗ ಡಿ.ಸಿ.ಸಿ. ಬ್ಯಾಂಕ್ 4 ಕೋಟಿ ಲಾಭದಲ್ಲಿದೆ. ಈ ವರ್ಷ 16 ಕೋಟಿ ಸಾಲವನ್ನು ರೈತರಿಗೆ ನೀಡಲಾಗಿದೆ ಎಂದು ವಿವರಿಸಿದರು.
43 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು: ಜಿಲ್ಲೆಯ 156 ಗ್ರಾಪಂಗಳಲ್ಲಿ 43 ಗ್ರಾಮಗಳಿಗೆ ಮಾತ್ರ ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ, ಯರಗೋಳ್ ನೀರಾವರಿ ಕಾಮಗಾರಿ ಪ್ರಾರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು.
ಅಂತರಗಂಗೆ ಬೆಟ್ಟದ ಮೇಲೆ 3,500 ಎಕರೆ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿದ್ದು ಮುಂದಿನ ವರ್ಷ ಅಷ್ಟು ಪ್ರದೇಶಕ್ಕೆ ಸಸಿಗಳನ್ನು ಹಾಕಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.
ಸಾಮಾಜಿಕ ಅರಣ್ಯ ಇಲಾಖೆಯಿಂದ 20 ಲಕ್ಷ ಸಸಿ ಅಭಿವೃದ್ಧಿ ಪಡಿಸಲಾಗುವುದು ಎಂದು ಸಾಮಾಜಿಕ ಅರಣ್ಯ ಉಪಸಂರಕ್ಷಣಾಧಿಕಾರಿ ಅಶ್ವಥಯ್ಯ ತಿಳಿಸಿದರು. ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಮುನೇಗೌಡ ಮಾತನಾಡಿ, 2 ಲಕ್ಷ ಶ್ರೀಗಂದ ಸಸಿಗಳು ಸೇರಿದಂತೆ ಒಟ್ಟು 23 ಲಕ್ಷ ಸಸಿಗಳನ್ನು ಬೆಳೆಸಲಾಗುತ್ತಿದೆ ಎಂದು ಹೇಳಿದರು.
ಗ್ರಾಮೀಣ ಅಭಿವೃದ್ಧಿಗೆ 140 ಕೋಟಿ ರು. ಸರ್ಕಾರ ಬಿಡುಗಡೆ ಮಾಡಿದ್ದು ಇನ್ನು ಹಣ ಖರ್ಚು ಮಾಡದೆ ಇರುವುದು ಸರಿಯಲ ಎಂದರು.
ಸಮಾಜ ಕಲ್ಯಾಣ ಇಲಾಖೆಗೆ 7 ಕೋಟಿ ರು. ನೀಡಿದ್ದು ಅದರಲ್ಲಿ 2 ಕೋಟಿ ಮಾತ್ರ ಖರ್ಚು ಮಾಡಲಾಗಿದೆ. ಇನ್ನು 5 ಕೋಟಿ ಬಾಕಿ ಇದ್ದು ವಿಶೇಷ ಘಟಕ ಯೋಜನೆಗಳನ್ನು ತ್ವರಿತವಾಗಿ ಜಾರಿಗೆ ತಂದು ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡಬೇಕೆಂದು ತಿಳಿಸಿದರು. ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆಗೆ 3.10 ಕೋಟಿ ರು.ಗಳ ಅನುದಾನದಲ್ಲಿ 2 ಕೋಟಿ ಮಾತ್ರ ಖರ್ಚು ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶಕುಂತಲ, ಮೀನುಗಾರಿಕೆ ಇಲಾಖೆಯ ನಾಗರಾಜ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಿಕ್ಕಣ್ಣ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ತಮ್ಮ ಇಲಾಖೆಗಳ ಮಾಹಿತಿ ನೀಡಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಂ. ಜುಲ್ಫಿಖಾರ್ ಉಲ್ಲಾ, ಉಪಕಾರ್ಯದರ್ಶಿ ಬದನೂರು ಸಭೆಯಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

