ಕೋಲಾರ

ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಆಗ್ರಹಿಸಿ ಪ್ರತಿಭಟನೆ

Published On :

ಬಾಗೇಪಲ್ಲಿ: ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ತರಗತಿ ಬಹಿಷ್ಕರಿಸಿ ಕಾಲೇಜ್ ಮುಂಭಾಗದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೀದಿಗಿಳಿದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 23 ಉಪನ್ಯಾಸಕ ಹುದ್ದೆಗಳಿವೆ. ಆದರೆ ಹಾಲಿ ಅತಿಥಿ ಹಾಗೂ ಕಾಯಂ 13 ಉಪನ್ಯಾಸಕರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದು ಉಳಿದ 10 ಉಪನ್ಯಾಸಕ ಹುದ್ದೆಗಳು ಖಾಲಿಯಿವೆ. ಈ ಕಾಲೇಜಿನಲ್ಲಿ ವಿಜ್ಞಾನ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಒಟ್ಟು 450 ವಿದ್ಯಾರ್ಥಿಗಳಿದ್ದು ಈ ಎಲ್ಲಾ ವಿದ್ಯಾರ್ಥಿಗಳಿಗೂ ಪಾಠ ಪ್ರವಚನ, ಪ್ರಯೋಗಾಲಯ, ಕಚೇರಿ, ಇನ್ನಿತರ ಎಲ್ಲಾ ಕಾರ್ಯಗಳಿಗಾಗಿ 14 ಕೊಠಡಿಗಳ ಅಗತ್ಯವಿದೆ. ಆದರೆ ಕೇವಲ 5 ಕೊಠಡಿಗಳು ಮಾತ್ರ ಇರುವುದರಿಂದ ತುಂಬಾ ತೊಂದರೆಯಾಗುತ್ತಿದೆ. ಇದೇ ರೀತಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಹಾಗೂ ಶೌಚಾಲಯ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಇದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದರು.
ಈ ಸಂಬಂಧ ಕಾಲೇಜಿನ ಪ್ರಾಂಶುಪಾಲರನ್ನು ಕೇಳಿದರೆ ಮೂಲ ಸೌಲಭ್ಯಗಳಿಗಾಗಿ ಯಾವುದೇ ಕ್ರಮಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹಾರಿಕೆ ಉತ್ತರ ನೀಡುತ್ತಾ ಬೇಜವಾಬ್ದಾರಿಯಾಗಿ ವರ್ತಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ತಕ್ಷಣ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವುದು ಸೇರಿದಂತೆ ಕಾಲೇಜಿನಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನನುಕೂಲಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು. ಎಸ್ಎಫ್ಐ ಅಧ್ಯಕ್ಷ ರಾಜಶೇಖರ್, ಉಪಾಧ್ಯಕ್ಷ ರಾಘವೇಂದ್ರ ನರಸಿಂಹಮೂರ್ತಿ, ಮಹೇಂದ್ರ, ಶ್ರೀನಿವಾಸ್, ನಂದೀಶರೆಡ್ಡಿ, ಶ್ರೀನಾಥ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.