ಸುಳ್ಳು ಪ್ರಮಾಣ ಪತ್ರ ನೀಡಿ ಮೀಸಲಾತಿ ಕಬಳಿಕೆ
ಕೋಲಾರ: ಹಿಂದುಳಿದ ಪ್ರವರ್ಗ 1 ಹಾಗೂ 2ಎ ದಲ್ಲಿ ಮೇಲ್ವರ್ಗದ ಜನಾಂಗದವರು ಸುಮಾರು 65 ಸಾವಿರಕ್ಕೂ ಹೆಚ್ಚು ಮೀಸಲಾತಿಯನ್ನು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ದುರುಪಯೋಗ ಮಾಡಿಕೊಂಡಿದ್ದು ಕೂಡಲೇ ಸರ್ಕಾರ ಇದನ್ನು ರದ್ದುಪಡಿಸಬೇಕೆಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಉಪಾಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಲವು ಮೇಲ್ವರ್ಗದ ಜಾತಿಯ ಸಂಘಟನೆಗಳು ತಮ್ಮನ್ನು ಪ್ರವರ್ಗ 2ಎ ಗೆ ಸೇರಿಸಬೇಕೆಂದು ಸಭೆ ಸಮಾರಂಭಗಳನ್ನು ನಡೆಸಿ ಸರ್ಕಾರವನ್ನು ಒತ್ತಾಯಿಸುತ್ತಿವೆ. ಒಂದು ವೇಳೆ ಸರ್ಕಾರ ಮೇಲ್ವರ್ಗದ ಒತ್ತಾಯಕ್ಕೆ ಮಣಿದರೆ ಒಕ್ಕೂಟ ತೀವ್ರವಾಗಿ ವಿರೋಧಿಸುತ್ತದೆ ಎಂದು ಎಚ್ಚರಿಕೆ ನೀಡಿದರು. ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಹಿಂದುಳಿದ ಪ್ರವರ್ಗ 1 ಹಾಗೂ 2ಎ ಮೀಸಲಾತಿಯನ್ನು ಮೇಲ್ವರ್ಗದವರು ಕಬಳಿಕೆ ಮಾಡಿದ್ದಾರೆಂದು ಆರೋಪಿಸಿದ ಅವರು, ಸರ್ಕಾರ ವೈಜ್ಞಾನಿಕವಾಗಿ ಸಮೀಕ್ಷೆ ಮಾಡದೆ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸು ಇಲ್ಲದೆ ಮೇಲ್ವರ್ಗದವರನ್ನು ಪ್ರವರ್ಗ 2ಎಗೆ ಸೇರಿಸುವುದು ಸರಿಯಲ್ಲವೆಂದರು.
2014ರ ಏಪ್ರಿಲ್ನಲ್ಲಿ ನಡೆಸಲು ಉದ್ದೇಶಿಸಿರುವ ಜನಗಣತಿಯಲ್ಲಿ ಹಿಂದುಳಿದ ಜಾತಿಗಳನ್ನು ಸರಿಯಾಗಿ ಗುರುತಿಸಿ ನ್ಯಾಯ ದೊರಕಿಸಿಕೊಡಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಬೇಕು, ಹಿಂದುಳಿದ ಜಾತಿಗೆ ಸೇರಿದ ವಿದ್ಯಾರ್ಥಿ ನಿಲಯಗಳ ನಿರ್ವಹಣೆಗಾಗಿ ಸರ್ಕಾರ ನೀಡುತ್ತಿರುವ 5 ಲಕ್ಷ ರು.ಅನುದಾನ ರಾಜ್ಯದ ಎಲ್ಲಾ ಹಿಂದುಳಿದ ಜಾತಿಗಳ ಅನುದಾನ ರಹಿತ ವಿದ್ಯಾರ್ಥಿ ನಿಲಯಗಳಿಗೆ ವಿಸ್ತರಣೆ ಮಾಡಬೇಕೆಂದು ಜ.12 ರಂದು ನಡೆಯುವ ಜನಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುತ್ತದೆ ಎಂದರು.
ಹಿಂದುಳಿದ ಜಾತಿಯ ಮಹಿಳೆಯರಿಗೆ ವಿಧಾನಸಭೆ ಮತ್ತು ಲೋಕಸಭೆಗೆ ಸ್ಪರ್ಧಿಸಲು ಶೇ.33ರ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡಬೇಕು, ನಿಗಮ-ಮಂಡಳಿಗಳಿಗೆ ನೇಮಕಾತಿ ಮಾಡಬೇಕೆಂದು ಅವರು ಆಗ್ರಹಿಸಿದರು.
ಸಹಕಾರ ಕ್ಷೇತ್ರದಲ್ಲೂ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಲು ಮೀಸಲಾತಿ ಜಾರಿಗೆ ತರಬೇಕೆಂದು ಹೇಳಿದ ಅವರು, ಬೆಂಗಳೂರಿನಲ್ಲಿ ನಡೆಯಲಿರುವ ಹಿಂದುಳಿದ ಜಾತಿಗಳ ದಶಮಾನೋತ್ಸವ ಹಾಗೂ ಜನ ಜಾಗೃತಿ ಕಾರ್ಯಕ್ರಮದಲ್ಲಿ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಳಿದ ಜಾತಿಗಳ ಜನರು ಭಾಗವಹಿಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಬೇಕೆಂದು ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

