ಸಮರ್ಪಕ ವಿದ್ಯುತ್ ಸರಬರಾಜಿಗೆ ಒತ್ತಾಯಿಸಿ ರಸ್ತೆ ತಡೆ
ಕೋಲಾರ: ತಾಲೂಕಿನ ಚಿಟ್ನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮಸ್ಥರು ಸಮರ್ಪಕ ವಿದ್ಯುತ್ ಸರಬರಾಜಿಗೆ ಒತ್ತಾಯಿಸಿ ಕೋಲಾರ-ಚಿಂತಾಮಣಿ ರಸ್ತೆ ಬಂದ್ ಮಾಡಿ ಪ್ರತಿಭಟಿಸಿದರು.
ಚಿಟ್ನಹಳ್ಳಿ, ಗೌಡಹಳ್ಳಿ, ಅಂಕತಟ್ಟಿ, ಮಟ್ನಹಳ್ಳಿ, ತೊಟ್ಲಿ ಮತ್ತಿತರ ಗ್ರಾಮಗಳ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿ ಅಸಮರ್ಪಕ ವಿದ್ಯುತ್ ಸರಬರಾಜಿನಿಂದ ಬೆಳೆಗಳು ಒಣಗುತ್ತಿವೆ ಎಂದು ಆರೋಪಿಸಿದರು.
ಗ್ರಾಮದ ಬಸ್ ನಿಲ್ದಾಣದ ಮುಂದೆ ಸುಮಾರು 1 ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಲಕ್ಷಾಂತರ ರುಪಾಯಿ ಖರ್ಚು ಮಾಡಿ ಕೊಳವೆಬಾವಿ ತೋಡಿಸಿ, ತರಕಾರಿ, ಹಿಪ್ಪುನೇರಳೆ ಹಾಗೂ ಇನ್ನಿತರ ಬೆಳೆಗಳನ್ನು ಬೆಳೆದಿದ್ದೇವೆ. ಆದರೆ, ವಿದ್ಯುತ್ ಕಣ್ಣಾಮುಚ್ಚಾಲೆಯಿಂದಾಗಿ ಬೆಳೆಗಳು ಒಣಗುತ್ತಿವೆ. ಮತ್ತೆ ಸಾಲದ ಸುಳಿಯಲ್ಲಿ ಸಿಲುಕುವ ಪರಿಸ್ಥಿತಿ ಎದುರಾಗಿದೆ ಎಂದು ರೈತರು ದೂರಿದರು.
ಬೆಳಗ್ಗೆ ಮತ್ತು ರಾತ್ರಿ ತಲಾ 3 ಗಂಟೆ ತ್ರಿಫೇಸ್ ಕರೆಂಟ್ ವ್ಯವಸ್ಥೆ ಕಲ್ಪಿಸುವುದಾಗಿ ಬೆಸ್ಕಾಂ ಅಧಿಕಾರಿಗಳು ನೀಡಿದ್ದ ಭರವಸೆ ಹುಸಿಯಾಗಿದೆ. ಹಳ್ಳಿ ಮಕ್ಕಳ ಓದಿಗೆ ತೊಂದರೆಯಾಗಿದೆ. ಸಂಜೆ 6 ರಿಂದ 10 ಹಾಗೂ ಮುಂಜಾನೆ 5 ರಿಂದ 7 ಗಂಟೆಯವರೆಗೂ ಸಿಂಗಲ್ ಫೇಸ್ ಕರೆಂಟ್ ನೀಡುವಂತೆ ಆಗ್ರಹಿಸಿದರು.
ವಿಷಯ ತಿಳಿದು ಸ್ಥಳಕ್ಕೆ ಬಂದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರಮೇಶ್ ಹಾಗೂ ಜೆಇ ವೆಂಕಟರಾಂ, ರೈತರ ತೀವ್ರ ವಿರೋಧ ಎದುರಿಸಬೇಕಾಯಿತು. ದಿನಕ್ಕೆ 5 ಗಂಟೆಯಾದರೂ ತ್ರಿಫೇಸ್ ಕರೆಂಟ್ ನೀಡಿ, ಬೆಳೆ, ಹೈನುಗಾರಿಕೆ ಉಳಿಸಿ ಎಂದು ಒತ್ತಾಯಿಸಿದಾಗ ರೈತರಿಗೆ ತೊಂದರೆ ಆಗದ ರೀತಿಯಲ್ಲಿ ಸಮಸ್ಯೆ ನಿವಾರಣೆ ಮಾಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.
ಪ್ರತಿಭಟನೆಯಲ್ಲಿ ಗೌಡಹಳ್ಳಿಯ ರಾಮಕೃಷ್ಣೇಗೌಡ, ಜನ್ನಘಟ್ಟದ ಕೆ.ಎನ್. ನಾರಾಯಣಸ್ವಾಮಿ, ಚಿಟ್ನಹಳ್ಳಿಯ ಎ.ಎನ್. ರಮೇಶ್, ಸಿ.ವಿ. ದೊಡ್ಡಪ್ಪ, ಡೈರಿ ಕಾರ್ಯದರ್ಶಿ ನಾರಾಯಣಸ್ವಾಮಿ, ಮಟ್ನಹಳ್ಳಿಯ ಮುರಳಿ, ಅಂಕತಟ್ಟಿಯ ಶ್ರೀರಾಮೇಗೌಡ, ಗ್ರಾಪಂ ಸದಸ್ಯ ಬಸವಾಚಾರಿ, ನಾರಾಯಣಸ್ವಾಮಿ, ತೊಟ್ಲಿ ಕೃಷ್ಣಪ್ಪ ಮತ್ತಿತರರು ಇದ್ದರು.
ಮುಂಜಾಗ್ರತಾ ಕ್ರಮವಾಗಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಸುಧಾಕರ್ ಬಂದೋಬಸ್ತ್ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

