ಶಿಶು ವಿಹಾರ ಕೇಂದ್ರ ಮುಚ್ಚದಂತೆ ಆಗ್ರಹಿಸಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ಒಂದು ಕಡೆ ನಗರದ ಎಪಿಎಂಸಿ ಯಾರ್ಡಿನ ಆವರಣದಲ್ಲಿ ಸಮಾಜ ಕಲ್ಯಾಣ ಮತ್ತು ಬಂದೀಖಾನೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಎ.ನಾರಾಯಣಸ್ವಾಮಿ ವಿದ್ಯಾರ್ಥಿನಿಲಯಗಳಿಗೆ ಗಣಕೀಕೃತ ವ್ಯವಸ್ಥೆಯ ಮೂಲಕ ಆಹಾರ ಪದಾರ್ಥಗಳ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರೆ, ಮತ್ತೊಂದೆಡೆ ವೇದಿಕೆಯ ಬಳಿ ಪ್ರತಿಭಟನೆ ನಡೆಯಿತು.
ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿ ತಾಲೂಕಿನ ಶಿಶುವಿಹಾರ ಕೇಂದ್ರ ಮುಚ್ಚಲಾಗುತ್ತಿದೆ ಎಂದು ಆರೋಪಿಸಿ ದಲಿತ ಮುಖಂಡರು ಚಿಣ್ಣರೊಂದಿಗೆ ಆಗಮಿಸಿ ಪ್ರತಿಭಟನೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ಧೋರಣೆಯಿಂದ ಹಿಂದೆ ಸರಿದು ಶಿಶುವಿಹಾರ ಕೇಂದ್ರಗಳು ಎಂದಿನಂತೆ ಕಾರ್ಯ ನಿರ್ವಹಿಸುವಂತಾಗಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿ.ರಾಜಾಕಾಂತ್ ಮತ್ತು ಮುಖಂಡರು ಭಿತ್ತಿ ಫಲಕ ಹಿಡಿದು ಧಿಕ್ಕಾರ ಕೂಗುತ್ತ ವೇದಿಕೆಯ ಬಳಿಗೆ ಬರುತ್ತಿದ್ದಂತೆ ಪೊಲೀಸರು ತಡೆದರು. ಸಚಿವರಿಗೆ ತಮ್ಮ ಮನವಿ ಸಲ್ಲಿಸಬೇಕೆನ್ನುತ್ತಿದ್ದ ಪ್ರತಿಭಟನಾಕಾರರನ್ನು ವೇದಿಕೆಯ ಬಳಿಗೆ ಹೋಗಲು ಬಿಡಲಿಲ್ಲ. ಇದರಿಂದ ಪರಸ್ಪರ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿಯನ್ನರಿತ ಜಿಲ್ಲಾ ರಕ್ಷಣಾಧಿಕಾರಿ ಸ್ಥಳಕ್ಕೆ ಬಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದರು. ನಂತರ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಂದು ಸಚಿವ ಎ.ನಾರಾಯಣಸ್ವಾಮಿ ಪ್ರತಿಭಟನಾನಿರತರ ಮನವಿ ಆಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ. ರಾಜಾಕಾಂತ್, ಚಿಕ್ಕಬಳ್ಳಾಪುರ ತಾಲೂಕಿನ ಬಾಪೂಜಿ ನಗರ ಮತ್ತು ಚಾಮರಾಜಪೇಟೆಯಲ್ಲಿ ನಡೆಯುತ್ತಿರುವ ಶಿಶುವಿಹಾರ ಕೇಂದ್ರ ಮುಚ್ಚಲಾಗಿದೆ. ಇದರಿಂದ ಮಕ್ಕಳು ತೊಂದರೆ ಅನುಭವಿಸುತ್ತಿದ್ದು, ಕೇಂದ್ರಗಳಿಗೆ ಹೋಗಬೇಕಾದ ಮಕ್ಕಳು ಬೀದಿಯಲ್ಲಿರಬೇಕಾಗಿದೆ. ಇದೇ ಪರಿಸ್ಥಿತಿ ಚಿಂತಾಮಣಿಯಲ್ಲೂ ಇದೆ. ಅನುಕೂಲಕರವಾಗಿದ್ದ ವಿಹಾರ ಕೇಂದ್ರ ಮುಚ್ಚಬಾರದೆಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಎರಡು ದಿನಗಳೊಳಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದಸಂಸ ಮುಖಂಡ ಆನಂದ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

