ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ
ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ಜನತೆಯಿಂದ ಉತ್ತಮ ಬೆಂಬಲ ವ್ಯಕ್ತವಾಗಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜಾರಕೀಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಅನೇಕ ಕಾರಣಗಳಿಂದ ಪಕ್ಷ ಬಿಟ್ಟಿರುವವರನ್ನು ಮತ್ತೆ ಪಕ್ಷಕ್ಕೆ ಕರೆ ತರಲು ಪ್ರಯತ್ನ ನಡೆಯುತ್ತಿದ್ದು ಈಗಾಗಲೇ ಅನೇಕರು ಮುಖಂಡರ ಸಂಪರ್ಕದಲ್ಲಿ ಇದ್ದಾರೆಂದು ಹೇಳಿದರು.
ಕಾಂಗ್ರೆಸ್ನಲ್ಲಿ ಚುನಾವಣೆಗೆ ಮುಂಚೆ ಮುಖ್ಯಮಂತ್ರಿಯ ಅಭ್ಯರ್ಥಿಯನ್ನು ಘೋಷಣೆ ಮಾಡುವ ಸಾಂಪ್ರದಾಯವಿಲ್ಲ, ಚುನಾವಣೆ ಸಾಮೂಹಿಕ ನಾಯಕತ್ವದಲ್ಲಿ ನಡೆಯಲಿದೆ. ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ನಂತರ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದ್ದು, ಪಕ್ಷಕ್ಕಿಂತ ವ್ಯಕ್ತಿ ದೊಡ್ಡವನಲ್ಲ, ಹಾಗಾಗಿ ಯಾವುದೇ ವ್ಯಕ್ತಿಯನ್ನು ಆಧರಿಸಿ ಕಾಂಗ್ರೆಸ್ ತನ್ನ ರೀತಿ-ನೀತಿಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲವೆಂದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಬಗ್ಗೆ ಜನತೆಗೆ ಭ್ರಮನಿರಸನವಾಗಿದೆ, ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಪ್ರಾದೇಶಿಕ ಪಕ್ಷಗಳಿಂದ ರಾಜ್ಯಕ್ಕೆ ಯಾವುದೇ ರೀತಿಯಲ್ಲಿ ಉಪಯೋಗವಿಲ್ಲ, ಕಾಂಗ್ರೆಸ್ಮುಂಬರುವ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವುದಲ್ಲದೆ, ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದಿಂದ ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಕಾರ್ಯತಂತ್ರ ರೂಪಿಸಲಾಗುತ್ತಿದೆ. ವಿಭಾಗವಾರು ಸಮಾವೇಶ ನಡೆಸಲಾಗುತ್ತಿದೆ. ಈಗಾಗಲೇ ಬೆಳಗಾವಿ, ಗದಗ, ಮೈಸೂರು, ರಾಯಚೂರಿನಲ್ಲಿ ಸಮಾವೇಶ ನಡೆಸಲಾಗಿದ್ದು ಬೆಂಗಳೂರು ವಿಭಾಗದಲ್ಲಿ ಸಮಾವೇಶ ನಡೆಸಲು ಸಿದ್ಧತೆ ನಡೆಯುತ್ತಿದೆ. ಬರುವ ಮಾರ್ಚ್ 1ಕ್ಕೆ ಚಿತ್ರದುರ್ಗದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಎಸ್ಟಿ ಸಮಾವೇಶ ನಡೆಸಲಾಗುತ್ತಿದ್ದು ಇದಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರನ್ನು ಜೋಡಿಸಲು ಸಿದ್ಧತೆ ನಡೆಯುತ್ತಿದೆ ಎಂದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಕ್ಕಿ, ಗ್ಯಾಸ್, ಡೀಸೆಲ್ ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲವೆಂದು ಸಮರ್ಥನೆ ಮಾಡಿಕೊಂಡರು. ಚುನಾವಣೆಗೆ ಅಭ್ಯರ್ಥಿಗಳನ್ನು ಮುಂಚಿತವಾಗಿ ಘೋಷಣೆ ಮಾಡುವುದು ಕಾಂಗ್ರೆಸ್ ಪಾಲಿಸಿಕೊಂಡು ಬಂದಿಲ್ಲ, ಸೂಕ್ತ ಸಮಯ ನೋಡಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುತ್ತದೆ, ಇತರೆ ಪಕ್ಷಗಳು ಸಹ ಅಧಿಕೃತವಾಗಿ ಯಾವುದೇ ಅಭ್ಯರ್ಥಿಯ ಹೆಸರು ಪ್ರಕಟಿಸಿಲ್ಲ, ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಸಂಬಂಧ ಅದಷ್ಟು ಬೇಗನೆ ನಮ್ಮ ನಾಯಕರು ಈ ಸಂಬಂಧ ನಿರ್ಧಾರ ಕೈಗೊಳ್ಳುವರೆಂದರು.
ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಸೇರಿದವರು 15 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಮೀಸಲಾತಿ ಅವಕಾಶ ಸಿಕ್ಕಿದ್ದು, ಅದರಂತೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ಸ್ಮಿತಿ ಅಧ್ಯಕ್ಷ ಅನಿಲ್ಕುಮಾರ್, ಪ್ರದೇಶ ಕಾಂಗ್ರೆಸ್ ಎಸ್ಟಿ ವಿಭಾಗದ ರಾಜ್ಯಾಧ್ಯಕ್ಷ ಈಶ್ವರ್, ಮಾಜಿ ಅಧ್ಯಕ್ಷ ರಾಮಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

