ಕೋಲಾರ

ವಿದ್ಯುತ್ ಕಟ್: ಜನರ ಜೊತೆ ಅಧಿಕಾರಿಗಳ ಚೆಲ್ಲಾಟ

Published On :

ಬಾಗೇಪಲ್ಲಿ: ದಿನದ 24 ಗಂಟೆಗಳಲ್ಲಿ ಅನೇಕ ಬಾರಿ ವಿದ್ಯುತ್ ಕಡಿತಗೊಳಿಸುವ ಮೂಲಕ ರೈತರ ಮತ್ತು ಸಾರ್ವಜನಿಕರ ಜೊತೆಗೆ ಬೆಸ್ಕಾಂ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆಂದು ಕನ್ನಡ ಸೇನೆಯ ತಾಲೂಕು ಘಟಕದ ಅಧ್ಯಕ್ಷ ಬಿ.ಎ. ಬಾಬಾಜಾನ್ ಆರೋಪಿಸಿದರು.
ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಒತ್ತಾಯಿಸಿ ಹೆಚ್.ಎನ್. ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿದ ಕನ್ನಡ ಸೇನೆಯ ಕಾರ್ಯಕರ್ತರು ಬೆಸ್ಕಾಂ ಕಚೇರಿಯ ಮುಂದೆ ಧರಣಿ ನಡೆಸಿದ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಬಹುತೇಕರು ವ್ಯವಸಾಯವನ್ನೇ ನಂಬಿ ಜೀವನವನ್ನು ನಡೆಸುತ್ತಿದ್ದಾರೆ. ಬೆಸ್ಕಾಂ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ಏರಿಳಿತಗೊಳ್ಳುತ್ತಿರುವುದರಿಂದ ಕೊಳವೆ ಬಾವಿಗಳಿಗೆ ಅಳವಡಿಸಲಾಗಿರುವ ಮೋಟಾರ್, ಪಂಪು ಮೋಟಾರ್ ಸುಟ್ಟು ರೈತರ ಬೆಳೆಗಳು ಬಾಡಿಹೋಗಿ ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದರು.
ಇಲ್ಲಿನ ಬಹುತೇಕ ರೈತರು ಸಾಲ ಮಾಡಿ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಇರುವ ಅಲ್ಪಸ್ವಲ್ಪ ನೀರನ್ನು ಬಳಸಿಕೊಂಡು ಇಟ್ಟಿರುವ ವಿವಿಧ ರೀತಿಯ ಬೆಳೆಗಳನ್ನು ಕಾಪಾಡಿಕೊಂಡು ಬರಲು ಹರಸಾಹಸ ಮಾಡಬೇಕಾಗಿದೆ. ಕೊಳವೆ ಬಾವಿಯಿಂದ ನೀರನ್ನು ಬಳಕೆ ಮಾಡಬೇಕಾದರೆ ವಿದ್ಯುತ್ ಅವಶ್ಯಕತೆಯಿದೆ. ಆದರೆ, ಅಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿರುವುದರಿಂದ ಕುಡಿಯಲು ನೀರಿಲ್ಲ.
ಬೆಳೆಗಳು ಸಂಪೂರ್ಣವಾಗಿ ಒಣಗಿ ನಾಶವಾಗಿ ಈ ಭಾಗದ ರೈತರು ಸಂಕಷ್ಟದಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು ವಿದ್ಯಾರ್ಥಿಗಳು ಓದಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವಿದ್ಯುತ್‌ನ್ನು ಕಡಿತಗೊಳಿಸುವಂತಹ ವೇಳಾಪಟ್ಟಿಯನ್ನು ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಬಹಿರಂಗಪಡಿಸದೇ ತಮಗೆ ಮನಬಂದಂತೆ ವಿದ್ಯುತ್ ಸರಬರಾಜು ಮಾಡುವ ಮೂಲಕ ಕಣ್ಣಾಮುಚ್ಚಾಲೆಯಾಟವನ್ನು ಆಡಿಸುತ್ತಿದ್ದಾರೆಂದು ಇಲಾಖೆಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಅವರು,ಇದೇ ರೀತಿಯಲ್ಲಿ ವಿದ್ಯುತ್ ವ್ಯತ್ಯಯವಾದರೆ ಮುಂದಿನ ದಿನಗಳಲ್ಲಿ ಬೆಸ್ಕಾಂ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.  
ಪ್ರತಿಭಟನೆಯಲ್ಲಿ ಮುಖಂಡರಾದ ಎಸ್.ರವೀಂದ್ರ, ಮುದ್ದುಕೃಷ್ಣ, ಜಿಕ್ರೀಯಾ, ವೆಂಕಟರವಣಪ್ಪ, ವೆಂಕಟಶಿವಪ್ಪ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.