ಕೋಲಾರ

ರಾತ್ರೋ ರಾತ್ರಿ ಸಚಿವರ ನಿವಾಸದಲ್ಲಿ ಹಕ್ಕುಪತ್ರ ವಿತರಣೆ

Published On :

ಕೋಲಾರ: ಆಶ್ರಯ ಯೋಜನೆಯಡಿ ಮನೆಗಳಿಗೆ ಅರ್ಜಿ ಹಾಕಿದ್ದ ಅರ್ಹ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವರ್ತೂರ್ ಪ್ರಕಾಶ್ ಗುರುವಾರ ಮನೆಗಳ ಮಂಜೂರಾತಿ ಪತ್ರ ವಿತರಿಸಿದರು.
ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಫೆ.16ರಂದು ನಗರದ ಮಹಾತ್ಮಾಗಾಂಧಿ ಉದ್ಯಾನವನದಲ್ಲಿ ಆಶ್ರಯ ಸಮಿತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ, ರಾಜ್ಯ ಚುನಾವಣಾ ಆಯೋಗವು ಗುರುವಾರ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಿ, ಚುನಾವಣಾ ನೀತಿ ಸಂಹಿತೆ ಫೆ.15ರಿಂದಲೇ ಜಾರಿಗೆ ಬರಲಿದೆ ಎಂದು ಸೂಚಿಸಿದ್ದರಿಂದ ಆಶ್ರಯ ಸಮಿತಿಯವರು ಸಚಿವರನ್ನು ಒಪ್ಪಿಸಿ ತರಾತುರಿಯಲ್ಲಿ ನಿನ್ನೆ ರಾತ್ರಿ ಸಚಿವರ ನಿವಾಸದಲ್ಲಿ ಸರಳ ಸಮಾರಂಭ ನಡೆಸಿ ಅರ್ಹ ಫಲಾನುಭವಿಗಳಿಗೆ ಸಚಿವರ ಮೂಲಕ ಮನೆ ಮಂಜೂರಾತಿ ಪತ್ರ ವಿತರಿಸಿದರು.
ನಗರ ಸ್ಥಳೀಯ ಸಂಸ್ಥೆಗಳಿಗೆ ಮಾ.7 ರಂದು ಚುನಾವಣೆ ನಡೆಯಲಿದ್ದು ಫೆ.15ರಂದು ಮನೆಗಳ ಮಂಜೂರಾತಿ ಪತ್ರ ನೀಡಿದ್ದಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಆರೋಪ ಹೊರಬೇಕಾಗಿತ್ತು. ಇದನ್ನು ತಪ್ಪಿಸಲು ಜಾಣತನ ತೋರಿದ ಆಶ್ರಯ ಸಮಿತಿಯವರು ಗುರುವಾರ ರಾತ್ರಿಯೇ ಸಚಿವರ ನಿವಾಸಕ್ಕೆ ಫಲಾನುಭವಿಗಳನ್ನು ಕರೆಸಿ ಸುಮಾರು 300ಕ್ಕೂ ಹೆಚ್ಚು ಫಲಾನುಭವಿಗಳಿಗೆ ಮನೆ ಮಂಜೂರಾತಿ ಪತ್ರ ಕೊಡಿಸಿದ್ದಾರೆ.
ಈ ಸಂದರ್ಭದಲ್ಲಿ ಆಶ್ರಯ ಸಮಿತಿ ಅಧ್ಯಕ್ಷ ಕೆ.ವಿ. ಸುರೇಶ್ ಕುಮಾರ್ ಮಾತನಾಡಿ, ಚುನಾವಣೆಯಿಂದಾಗಿ ಅದ್ಧೂರಿಯಾಗಿ ಕಾರ್ಯಕ್ರಮ ನಡೆಸಲು ಸಾಧ್ಯವಾಗಿಲ್ಲ. ಶನಿವಾರ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಸರಳವಾಗಿ ನಡೆಸಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಅರ್ಜಿದಾರರಿಗೆ ವಸತಿ ಸೌಕರ್ಯ ಕಲ್ಪಿಸುವುದಾಗಿ ತಿಳಿಸಿದರು.
ಸಮಿತಿಯ ಕೆಲ ಸದಸ್ಯರು ಹಾಗೂ ವರ್ತೂರ್ ಬಣದ ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.