ಕೋಲಾರ

ಹಾಸ್ಟೆಲ್ ಮೂಲ ಸೌಕರ್ಯಕ್ಕೆ ಎಬಿವಿಪಿ ಒತ್ತಾಯ

Published On :

ಕೋಲಾರ: ರಾಜ್ಯದ 260 ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಅಗತ್ಯ ಮೂಲ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ ಎಂದು ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸುನಿಲ್‌ಕುಮಾರ್ ತಿಳಿಸಿದರು.
ಅವರು ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ವಿದ್ಯಾರ್ಥಿ ನಿಲಯಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಎಬಿವಿಪಿಯ ಸುಮಾರು ನೂರು ಕಾರ್ಯಕರ್ತರ ತಂಡವು ಮೂರು ತಿಂಗಳಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳ 260 ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು, ವಾರ್ಡನ್, ಅಡುಗೆ ಸಿಬ್ಬಂದಿಯೊಂದಿಗೆ ಚರ್ಚಿಸಿ ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒಳಗೊಂಡ ಕಿರು ಹೊತ್ತಿಗೆಯನ್ನು ಹೊರ ತಂದಿದೆ. ಇದರ ಮೂಲಕ ಹಾಸ್ಟೆಲ್‌ಗಳ ನಿಜ ಸ್ಥಿತಿಯನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಉದ್ದೇಶಿಸಲಾಗಿದೆ ಎಂದರು.
ರಾಜ್ಯದಲ್ಲಿರುವ ಶೇ.100 ಹಾಸ್ಟೆಲ್‌ಗಳ ಪೈಕಿ ಶೇ.55 ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡವಿಲ್ಲದೆ ಬಾಡಿಗೆಯಲ್ಲಿ ನಡೆಯುತ್ತಿವೆ. ಅದೇ ರೀತಿ ಶೌಚಾಲಯಗಳ ಸ್ಥಿತಿಯಂತೂ ಶೋಚನೀಯ,ಮಹಿಳೆಯರ ಹಾಸ್ಟೆಲ್‌ಗಳಲ್ಲಿ ಸುರಕ್ಷಿತ ದೃಷ್ಟಿಯಿಂದ ಭದ್ರತಾ ಸಿಬ್ಬಂದಿನೇಮಕವಿಲ್ಲದಿರುವುದು ಆತಂಕ ಮೂಡಿಸಿದೆ, ಸ್ವಚ್ಛತೆ ಕಾಪಾಡದಿರುವುದು ಹಾಸ್ಟೆಲ್‌ಗಳ ಕರಾಳ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಹೊಸ ಹಾಸ್ಟೆಲ್‌ಗಳನ್ನು ತೆರೆಯಬೇಕು ಮತ್ತು ಈಗಿರುವ ಹಾಸ್ಟೆಲ್‌ಗಳನ್ನು ಮೇಲ್ದರ್ಜೆಗೇರಿಸಬೇಕು, ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು 2500 ರು.ಗೆ ಏರಿಸವುದರೊಂದಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ತಕ್ಷಣ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದರು.ಜಿಲ್ಲಾ ಸಂಚಾಲಕ ಪುನೀತ್ ಮಾತನಾಡಿ, ಕೋಲಾರ ಜಿಲ್ಲೆಯ 25 ಹಾಸ್ಟೆಲ್‌ಗಳ ಸರ್ವೇಕ್ಷಣೆ ಮುಗಿದಿದ್ದು ಜಿಲ್ಲೆಯ ಹಲವಾರು ಹಾಸ್ಟೆಲ್ ಗಳಲ್ಲಿ ಕನಿಷ್ಠ ಶುದ್ಧ ಕುಡಿಯುವ ನೀರು ಸಿಗದಿರುವ ನೋವಿನ ಸಂಗತಿಯಾಗಿದೆ. ಕೆಜಿಎಫ್‌ನ ಬಿಸಿಎಂ ಹಾಸ್ಟೆಲ್‌ನಲ್ಲಿ ನೀರು ಸೌಲಭ್ಯವಿಲ್ಲದೆ ಹಲವಾರು ಯೋಜನೆಗಳು ನಿಷ್ಪ್ರಯೋಜಕವಾಗಿವೆ. ಶ್ರೀನಿವಾಸಪುರದ ಎಸ್ಸಿ ಮತ್ತು ಎಸ್ಟಿ ಹಾಸ್ಟೆಲ್‌ನಲ್ಲಿ ಶೌಚಾಲಯದ ಬಗ್ಗೆ ಕೇಳುವಂತೆಯೆ ಇಲ್ಲ, ಈ ರೀತಿಯ ಹಲವಾರು ಸಮಸ್ಯೆಗಳ ಬಗ್ಗೆ ಇನ್ನೆರಡು ದಿನಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅವರ ಪ್ರತಿಕ್ರಿಯೆ ನಂತರ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಜಿಲ್ಲಾ ಸಚಿವರು, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಇಲಾಖೆಗೆ ಸಂಬಂಧಿಸಿದ ಸಚಿವರು, ಶಾಸಕರು ಹಾಸ್ಟೆಲ್‌ಗೆ  ತಿಂಗಳಿಗೊಮ್ಮೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು, ಪ್ರತಿಯೊಂದು ಹಾಸ್ಟೆಲ್‌ನಲ್ಲಿಯೂ ಬಯೋವುಟ್ರಿಕ್ ವ್ಯವಸ್ಥೆ ಜಾರಿಗೆ ತರಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.