ಪಡಿತರ ಅಕ್ಕಿ ದುರ್ಬಳಕೆ: ಕ್ರಮಕ್ಕೆ ಭರವಸೆ
ಕೋಲಾರ: ಜಿಲ್ಲೆಯಲ್ಲಿ ಪಡಿತರ ಅಕ್ಕಿ ಹಗರಣವು ಗಮನಕ್ಕೆ ಬಂದಿದ್ದು, ಕೂಡಲೇ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಘಟನೆಗೆ ಕಾರಣರಾದ ಅಧಿಕಾರಿಗಳು, ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ರೈಸ್‌ಮಿಲ್ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆಂದು ಅಪರ ಜಿಲ್ಲಾಧಿಕಾರಿ ಎಸ್.ಆರ್. ಪೆದ್ದಪ್ಪಯ್ಯ ಭರವಸೆ ನೀಡಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಡಿತರ ಅಕ್ಕಿಯಲ್ಲಿ ಆಗಿರುವ ಅನ್ಯಾಯ ಖಂಡಿಸಿ ಘಟನೆಗೆ ಕಾರಣರಾದ ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸಯ್ಯ ಅವರನ್ನು ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಕಾರ್ಯಾಧ್ಯಕ್ಷ ಬಿಸನಹಳ್ಳಿ ಬೈಚೇಗೌಡ ನಮ್ಮ ಜಿಲ್ಲೆಯ ಹಲವೆಡೆ ನ್ಯಾಯಬೆಲೆ ಅಂಗಡಿಗಳಲ್ಲಿ ಸರಿಯಾದ ರೀತಿಯಲ್ಲಿ ಬಡವರಿಗೆ ಪಡಿತರ ವಿತರಣೆಯಾಗುತ್ತಿಲ್ಲ. ಈ ಕುರಿತು ಯಾರಾದರೂ ಪ್ರಶ್ನಿಸಿದರೆ ಸ್ಟಾಕ್ ಬಂದಿಲ್ಲ, ಮುಂದಿನ ತಿಂಗಳು ಬಂದರೆ ನೋಡೋಣ ಅಂತ ಉದಾಸೀನ ಮಾತುಗಳನ್ನು ಹೇಳುತ್ತಾರೆ. ಆದರೆ ಈಗ ರೈಸ್‌ಮಿಲ್ ಮಾಲೀಕರ ಮಿಲ್ಲುಗಳಲ್ಲಿ ಮಾತ್ರ ಮೂಟೆಗಟ್ಟಲೇ ಅಕ್ಕಿ ಇದ್ದು, ಇದನ್ನು ಯಾರು ಸರಬರಾಜು ಮಾಡಿದರು, ಈ ಘಟನೆಯ ಹಿಂದೆ ಯಾರು ಯಾರು ಇದ್ದಾರೆ ಎಂಬುದು ತನಿಖೆಯಾಗಬೇಕೆಂದು ಒತ್ತಾಯಿಸಿದರು.
ಹಸಿರುಸೇನೆ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶಗೌಡ ಮಾತನಾಡಿ, ಆಹಾರ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸಯ್ಯ ಅವರನ್ನು ಘಟನೆಗೆ ಸಂಬಂಧಿಸಿದಂತೆ ಕೇಳಿದರೆ ನಾವು ಈಗಾಗಲೇ 20 ಕಡೆಗಳಲ್ಲಿ ಪರಿಶೀಲಿಸಿದ್ದೇನೆಂದು ಹೇಳಿದರು. ಈ ಕುರಿತು ಏನು ಕ್ರಮ ಕೈಗೊಂಡಿದ್ದೀರಾ ಎಂದು ಪ್ರಶ್ನಿಸಿದಾಗ ಅವರಿಂದ ಕೇವಲ ಹಾರಿಕೆ ಉತ್ತರ ನೀಡುವ ಮೂಲಕ ಜಾರಿಕೊಳ್ಳಲು ಪ್ರಯತ್ನಿಸಿದ್ದಾರೆಂದು ಆರೋಪಿಸಿದರು.
ಪ್ರತಿಭಟನಾಕಾರರು ಇದಕ್ಕೂ ಮುನ್ನ ಕೋಲಾರ ತಹಸೀಲ್ದಾರ್ ಕೃಷ್ಣಪ್ಪ ಅವರಿಗೂ ಮನವಿ ಸಲ್ಲಿಸಿದಾಗ ನಮಗೆ ಇದುವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಘಟನೆ ಕುರಿತು ತನಿಖೆ ನಡೆಸಿ ಇದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆಂದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಅಶ್ವತ್ಥರೆಡ್ಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಿ. ನಾರಾಯಣಸ್ವಾಮಿ, ಜಿಲ್ಲಾ ಖಜಾಂಚಿ ಮಾಗೇರಿ ಸೀನಪ್ಪ, ಹಸಿರು ಸೇನೆ ಸಂಚಾಲಕ ಕೆ.ಆನಂದ್ ಕುಮಾರ್, ವಿವಿಧ ತಾಲೂಕು ಸಮಿತಿಯ ಅಧ್ಯಕ್ಷ ಕೋಲಾರದ ಹೊಳಲಿಹೊಸೂರು ಚಂದ್ರಪ್ಪ, ಬಂಗಾರಪೇಟೆಯ ರಾಮೇಗೌಡ, ಮಾಲೂರಿನ ಬೆಡಶೆಟ್ಟಿಹಳ್ಳಿ ರಮೇಶ್, ತಾಲೂಕು ಗೌರವಾಧ್ಯಕ್ಷ ಪಾರೇಹೊಸಹಳ್ಳಿ ಶಾಮಣ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

