ಕೋಲಾರ

ಜಿಲ್ಲೆಗೆ ಸ್ವಲ್ಪ ಸಿಹಿ, ಕೊಂಚ ಕಹಿ!

Published On :

ಕ.ಪ್ರ.ವಾರ್ತೆ   ಕೋಲಾರ   ಜು. 12
ಎತ್ತಿನಹೊಳೆ ಯೋಜನೆಗೆ ಒಂದು ಸಾವಿರ ಕೋಟಿ ರುಪಾಯಿ ಹಾಗೂ ಡಾ.ಪರಮಶಿವಯ್ಯ ವರದಿ ಅನುಷ್ಠಾನ ಸಂಬಂಧ ಸಮಗ್ರ ವರದಿ ತಯಾರಿಸಲು 50 ಕೋಟಿ ರುಪಾಯಿಗಳನ್ನು ರಾಜ್ಯ ಮುಂಗಡ ಪತ್ರದಲ್ಲಿ ಘೋಷಣೆ ಮಾಡಿರುವುದಕ್ಕೆ ಜಿಲ್ಲೆಯ ಶಾಸಕರು ಸಂತಸ ವ್ಯಕ್ತಪಡಿಸಿದ್ದಾರೆ.
ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಲು ಜಿಲ್ಲೆಯವರೇ ಆದ ಶ್ರೀನಿವಾಸಪುರ ಶಾಸಕ ಕೆ.ಆರ್.ರಮೇಶ್ಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಪ್ರಣಾಳಿಕೆಯಲ್ಲಿ ಶಾಶ್ವತ ನೀರಾವರಿ, ರೈತರು ಬೆಳೆಯುವ ಉತ್ಪನ್ನಗಳಿಗೆ ರೈತರೇ ಬೆಲೆ ನಿಗದಿ ಮಾಡಲು ಆಯೋಗ ರಚನೆ, ಕೆರೆ ಅಭಿವೃದ್ಧಿ ಪ್ರಾಧಿಕಾರ, ತಾಲೂಕಿಗೊಂದು ಡಯಾಲೀಸಿಸ್ ಘಟಕ ಸೇರಿದಂತೆ ಹತ್ತಾರು ಭರವಸೆಗಳನ್ನು ಘೋಷಿಸಲಾಗಿತ್ತು.
ರಮೇಶ್ಕುಮಾರ್ ಹರ್ಷ: ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು, ಮಹಿಳಾ ಬ್ಯಾಂಕ್ ಹೊರತು ಪಡಿಸಿ ಪ್ರಣಾಳಿಕೆಯಲ್ಲಿನ ಬಹುತೇಕ ಭರವಸೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಈಡೇರಿಸಿರುವುದಕ್ಕೆ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ಹರ್ಷ ವ್ಯಕ್ತಪಡಿಸಿ, ಸೋಮವಾರ (ಜು.15)ಬೆಂಗಳೂರಿನಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ಶಾಸಕರು ಸಭೆ ಸೇರಿ ಎತ್ತಿನಹೊಳೆ ಮತ್ತು ಡಾ.ಪರಮಶಿವಯ್ಯ ವರದಿ ಆಧಾರಿತ ಶಾಶ್ವತ ನೀರಾವರಿ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರ ಮೇಲೆ ಒತ್ತಡ ತರುವುದಾಗಿ ಕನ್ನಡಪ್ರಭಕ್ಕೆ ತಿಳಿಸಿದರು.
ಯೋಜನೆ ಜಾರಿಗೂ ಒಗ್ಗಟ್ಟು: ಜನತೆಯ ಬಹುದಿನಗಳ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆ ಜಾರಿಗೆ ಮುಖ್ಯಮಂತ್ರಿಗಳು ಬದ್ಧತೆ ತೋರಿರುವುದಕ್ಕೆ ಎರಡೂ ಜಿಲ್ಲೆಯ ಶಾಸಕರು ಪಕ್ಷಾತೀತವಾಗಿ ಸಂತಸ ವ್ಯಕ್ತ ಮಾಡಿದ್ದೇವೆ ಅದೇ ರೀತಿ ಯೋಜನೆ ಜಾರಿಯತನಕ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ರಮೇಶ್ ಕುಮಾರ್ ತಿಳಿಸಿದರು.  
ರೈತರಿಗಾಗುವ ನಷ್ಟಕ್ಕೆ ತಡೆ: ರೈತರು ಬೆಳೆಯುವ ಉತ್ಪನ್ನಗಳಿಗೆ ರೈತರೇ ನ್ಯಾಯಬದ್ಧವಾದ ಬೆಲೆ ನಿಗದಿ ಮಾಡುವ ಸಂಬಂಧ ಬೆಲೆ ನಿಗದಿ ಆಯೋಗ ರಚನೆ ಮಾಡುವುದಕ್ಕೆ ಬಜೆಟ್ನಲ್ಲಿ ಘೋಷಣೆ ಮಾಡಿರುವುದರಿಂದ ರೈತರಿಗೆ ಆಗುವ ನಷ್ಟ ತಪ್ಪುತ್ತದೆ, ಕೆರೆಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡುವುದರಿಂದ ಗ್ರಾಮೀಣ ಭಾಗದಲ್ಲಿ ಕೃಷಿಗೆ ಮತ್ತು ಅಂತರ್ಜಲ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಬಂಗಾರಪೇಟೆ ಶಾಸಕ ಕೆ.ಎಂ.ನಾರಾಯಣಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಬಜೆಟ್ ಮಂಡಿಸಿದ್ದಾರೆ. ರೇಲ್ವೆ ಕೋಟ್ ಘಟಕ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿರುವುದರಿಂದ ಜಿಲ್ಲೆಯ ಅಭಿವೃದ್ಧಿ ಹೆಚ್ಚುತ್ತದೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ಕುಮಾರ್ ಪ್ರತಿಕ್ರಿಯಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ಒಂದು ಸಾವಿರ ಕೋಟಿ ಪ್ರಕಟಿಸಿರುವುದರಿಂದ ಇನ್ನು ಕೆಲವೇ ತಿಂಗಳಲ್ಲಿ ನೀರಿನ ಸಮಸ್ಯೆ ನಿವಾರಣೆ ಆಗುವುದರಲ್ಲಿ ಅನುಮಾನವಿಲ್ಲವೆಂದು ಕೋಲಾರ ಶಾಸಕ ಆರ್.ವರ್ತೂರ್ ಪ್ರಕಾಶ್ ತಿಳಿಸಿದ್ದಾರೆ.
ಬಂಗಾರಪೇಟೆ, ಮಾಲೂರು, ಕೋಲಾರ ನಗರ ಸೇರಿದಂತೆ 45 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ರೂಪಿಸಿರುವ ಯರಗೋ ಳ್ ಯೋಜನೆಯ ಅನುಷ್ಠಾನ, ಮಾಲೂರಿನಲ್ಲಿ ಫುಡ್ಪಾರ್ಕ್ ನಿರ್ಮಾಣ, ಕೋಲಾರದಲ್ಲಿ ಜವಳಿ ಉದ್ಯಮಕ್ಕೆ ಪ್ರೋತ್ಸಾಹ, ಶ್ರೀನಿವಾಸಪುರದಲ್ಲಿ ಮಾವು ಅಭಿವೃದ್ಧಿ ಮಂಡಳಿ ರಚನೆ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪ ಇಲ್ಲದಿರುವುದು ಕೊಂಚ ಮಟ್ಟಿಗೆ ಜನತೆಯಲ್ಲಿ ನಿರಾಸೆ ಮೂಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.