ಸುದ್ದಿ ಸಂಕ್ಷೇಪ
'ನೀರಾವರಿಗೆ ಹಣ ನೀಡೋದು ಫ್ಯಾಷನ್ ಆಗಿದೆ'
ಶಿಡ್ಲಘಟ್ಟ: ರಾಜ್ಯದಲ್ಲಿ ನೀರಾವರಿ ಕ್ಷೇತ್ರಕ್ಕೆ ಹಣ ಮೀಸಲಿಡುವ ವಿಚಾರವನ್ನು ಸರ್ಕಾರಗಳು ಫ್ಯಾಷನ್ ಮಾಡಿಕೊಂಡಿವೆ ಎಂದು ಜಿಲ್ಲಾ ರೇಷ್ಮೆ ಬೆಳೆಗಾರರ ಹಿತರಕ್ಷಣಾ ವೇದಿಕೆಯ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ ಟೀಕಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿ, ರೇಷ್ಮೆ ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡನೆ ಮಾಡಿರುವ ಬಜೆಟ್ ರೇಷ್ಮೆ ಬೆಳೆಗಾರರಿಗೆ ಹಾಗೂ ನೂಲು ಬಿಚ್ಚಾಣಿಕೆದಾರ ಪಾಲಿಗೆ ನಿರಾಶದಾಯಕವಾಗಿದೆ ಎಂದರು. ಸತತ ಬರಗಾಲ ಎದುರಿಸುತ್ತಿರುವ ಅವಿಭಜಿತ ಕೋಲಾರ ಜಿಲ್ಲೆ ಸೇರಿದಂತೆ ಇನ್ನಿತರೆ ಜಿಲ್ಲೆಗಳಲ್ಲಿ ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡಿರುವ ರೈತರಿಗೆ ಶೇ.100 ಸಹಾಯಧನ, ರೇಷ್ಮೆ ಹುಳು ಸಾಕಾಣಿಕೆ ಮನೆಗಳನ್ನು ನಿರ್ಮಿಸಿಕೊಳ್ಳಲು ಶೇ.50 ಸಹಾಯಧನ ಹಾಗೂ ರೇಷ್ಮೆ ಬೆಳೆಗಾರರು ಹಾಗೂ ನೂಲು ಬಿಚ್ಚಾಣಿಕೆದಾರರು ಬ್ಯಾಂಕ್ಗಳಲ್ಲಿ ಪಡೆದಿರುವ ಸಾಲ ಮನ್ನಾ ಮಾಡಬೇಕು. ರೇಷ್ಮೆ ಉದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನದ ನೂಲು ಬಿಚ್ಚಾಣಿಕೆ ಘಟಕಗಳನ್ನು ಸ್ಥಾಪಿಸಲು ಆರ್ಥಿಕವಾಗಿ ಪ್ರೋತ್ಸಾಹಿಸಬೇಕೆಂದು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳು ಗಮನ ಹರಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ರೇಷ್ಮೆ ಉದ್ಯಮವನ್ನು ನೆಚ್ಚಿಕೊಂಡಿರುವ ರೈತರು ಹಾಗೂ ನೂಲು ಬಿಚ್ಚಾಣಿಕೆದಾರರನ್ನು ಜಾತಿ ಆಧಾರದ ಮೇಲೆ ವಿಂಗಡಿಸುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿರುವುದು ನೋವಿನ ಸಂಗತಿ. ಬಜೆಟ್ನಲ್ಲಿ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಹೋರಾಟ ನಡೆಸುತ್ತಿರುವ ಬಯಲುಸೀಮೆಯ ಜನರ ಭಾವನೆಗಳಿಗೆ ಕಿಂಚಿತ್ತು ಬೆಲೆ ನೀಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನಪರ ಬಜೆಟ್: ಮುನಿಯಪ್ಪ
ಶಿಡ್ಲಘಟ್ಟ: ಸಮಾಜದ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಹಾಗೂ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ ಬಜೆಟ್ ಮಂಡಿಸಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕೆಂಬ ಸಂಕಲ್ಪದೊಂದಿಗೆ ಶಿಕ್ಷಣ ಕ್ಷೇತ್ರಕ್ಕೆ 18 ಸಾವಿರ ಕೋಟಿಗೂ ಅಧಿಕ ಹಣ ಮೀಸಲಿಡುವ ಜೊತೆಗೆ ಆರೋಗ್ಯ, ನೀರಾವರಿ, ವಸತಿ, ನಗರ ಹಾಗೂ ಗ್ರಾಮೀಣಾಭಿವೃದ್ಧಿಗೆ ಆದ್ಯತೆ ನೀಡಿ ಜನ ಸಾಮಾನ್ಯರಿಗೆ ಸಂತಸ ಉಂಟು ಮಾಡಿದ್ದಾರೆ ಎಂದರು. ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಂಗನವಾಗಿ ಕೇಂದ್ರಗಳ ಮಕ್ಕಳಿಗೆ ಹಾಲು ನೀಡುವ ಯೋಜನೆ, ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ, ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ, ಪರಿಶಿಷ್ಟ ಜಾತಿ- ಪಂಗಡಗಳು ಸೇರಿದಂತೆ ಇತರೆ ಸಮಾಜದ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸಿದ್ದಾರೆ ಎಂದಿದ್ದಾರೆ.
ಗೋಮಾಳ ಜಮೀನು ಒತ್ತುವರಿ ಭೀತಿ
ಶಿಡ್ಲಘಟ್ಟ: ತಾಲೂಕಿನ ಸುಗಟೂರಿನಲ್ಲಿ ಸರ್ಕಾರಿ ಜಮೀನು ಕಬಳಿಸಲು ಹೊರಟಿದ್ದವರ ಮೇಲೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಸಾರ್ವಜನಿಕರ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದ ಕಂದಾಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಂಗಮಕೋಟೆ ಹೋಬಳಿಯ ಎದ್ದಲತಿಪ್ಪೇನಹಳ್ಳಿ ಗ್ರಾಮದ ಗೋಮಾಳ ಜಮೀನನ್ನು ಬಲಾಢ್ಯರು ಒತ್ತುವರಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಗ್ರಾಮದ ಸರ್ವೆ ಸಂಖ್ಯೆ 9ರಲ್ಲಿ ಖಾಲಿಯಿರುವ 4 ಎಕರೆ 38 ಗುಂಟೆ ಗೋಮಾಳ ಜಮೀನು ಒತ್ತುವರಿ ಮಾಡಿಕೊಳ್ಳಲು ಸಂಚು ರೂಪಿಸಿರುವ ಕುರಿತು ಗ್ರಾಮಸ್ಥರು ತಾಲೂಕು ದಂಡಾಧಿಕಾರಿಗಳಿಗೆ ದೂರು ಸಲ್ಲಿಸಿದರು. ಈ ಹಿನ್ನೆಲೆ ಯಾವುದೇ ಕಾಮಗಾರಿ ನಡೆಸದಂತೆ ಕಂದಾಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದರು. ಇದೀಗ ಖಾಸಗಿ ವ್ಯಕ್ತಿಯೊಬ್ಬರು ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಲಪಟಾಯಿಸಲು ಹುನ್ನಾರ ನಡೆಸಿದ್ದಾರೆ. ಗೋಮಾಳ ಜಮೀನಿನಲ್ಲಿ 3 ಎಕರೆ ಪ್ರದೇಶದಲ್ಲಿ ದನ-ಕರುಗಳು ಮೇಯಲು ಹಾಗೂ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಿಸಿಕೊಡಲು ಹೊಸಪೇಟೆ ಗ್ರಾಪಂ ಮೂಲಕ ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಪ್ರಸ್ತುತ ಸರ್ಕಾರಿ ಗೋಮಾಳ ಜಾಗ ಒತ್ತುವರಿ ಮಾಡಿಕೊಳ್ಳುತ್ತಿರುವ ಕುರಿತು ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದರಿಂದ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ಸರ್ಕಾರಿ ಖರಾಬ್ ಹಾಗೂ ಗೋಮಾಳ ಜಮೀನಿನ ಸರ್ವೆ ನಡೆಸಿ ರಕ್ಷಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

