ಡೆಂಘೀ ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಿ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಜು. 15
ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಮಾಸಿಕ ಸಭೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ, ಡೆಂಘೀ, ಅರ್ಹ ಫಲಾನುಭವಿಗಳಿಗೆ ಸಾಲ ವಿತರಣೆ, ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಸೇರಿದಂತೆ ವಿವಿಧ ವಿಷಯಗಳು ಮತ್ತು ವಿವಿಧ ಇಲಾಖೆಗಳ ಪ್ರಗತಿಯ ಬಗ್ಗೆ ಚರ್ಚೆ ನಡೆಸಲಾಯಿತು.
ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿ.ಪಂ ಅಧ್ಯಕ್ಷ ಚಿನ್ನಪ್ಪ, ಪ್ರಸ್ತುತ ಸಾಂಕ್ರಾಮಿಕ ರೋಗಗಳು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು ಡೆಂಘೀ ಭೀತಿ ಜನರನ್ನು ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಸೂಕ್ತ ಕ್ರಮ ಕೈಗೊಂಡು ಡೆಂಘೀ ಹರಡದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಂಗಸ್ವಾಮಿ ಮಾತನಾಡಿ, ಈಗಾಗಲೇ ಆರೋಗ್ಯ ಇಲಾಖೆ ಡೆಂಘೀ ವಿರುದ್ಧ ಪ್ರಚಾರ ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಎಲ್ಲೆಡೆ ಫಾಗಿಂಗ್ ಕೈಗೊಳ್ಳುತ್ತಿದ್ದು ಬಹು ಮುಖ್ಯವಾಗಿ ಸ್ವಚ್ಛತೆ ಕಾಪಾಡಲು ಜನರಿಗೆ ಸಲಹೆ ನೀಡಲಾಗುತ್ತಿದೆ ಎಂದರು.
ಅಧಿಕಾರಿಗಳಿಗೆ ನೋಟಿಸ್: ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ಸಕಾಲದಲ್ಲಿ ವಿತರಿಸಬೇಕು. ಇದಕ್ಕಾಗಿ ಸಭೆಯಲ್ಲಿ ಚರ್ಚಿಸಿ ನಿಗದಿಪಡಿಸಿಕೊಂಡಿರುವ ಫಲಾನುಭವಿಗಳ ಪಟ್ಟಿಯನ್ನು ಮಾನದಂಡವಾಗಿ ತೆಗೆದುಕೊಳ್ಳಬೇಕು. ಕೇವಲ ಇಬ್ಬರು ಮೂವರಿಗೆ ಕೊಟ್ಟು ಸವಲತ್ತುಗಳನ್ನು ನೀಡಿದ್ದೇವೆ ಎಂದು ಹೇಳಿದರೆ ಕೇಳಲಿಕ್ಕಾಗುವುದಿಲ್ಲ. ಗುರುತಿಸಲಾಗಿರುವ ಫಲಾನುಭವಿಗಳಿಗೆ ಸವಲತ್ತು ಸಿಕ್ಕಿರಬೇಕು. ಒಂದು ವೇಳೆ ದೂರುಗಳು ಕೇಳಿ ಬಂದು ಸರ್ಕಾರದಿಂದ ನೋಟಿಸ್ ಬಂದರೆ, ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎಸ್.ಶೇಖರಪ್ಪ ಎಚ್ಚರಿಕೆ ನೀಡಿದರು.
ಅಧಿಕಾರಿಗಳೇ ಜವಾಬ್ದಾರರು: ಸಭೆಗೆ ಅಧಿಕಾರಿಗಳು ಗೈರು ಹಾಜರಾದರೆ ಪದೇ ಪದೆ ಎಚ್ಚರಿಸಲು ಸಾಧ್ಯವಿಲ್ಲ. ಮುಂದಿನ ಆಗುಹೋಗುಗಳಿಗೆ ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರರಾಗಬೇಕಾಗುತ್ತದೆ ಎಂದು ತಿಳಿಸಿದರು. ಎಂಎನ್ ನರೇಗಾ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಸಂಬಂಧಿಸಿದ ಇಲಾಖೆಗಳ ಮೂಲಕ ಸಮರ್ಪಕವಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಚಿನ್ನಪ್ಪ ತಿಳಿಸಿದಾಗ ಸಭೆಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಂದ್ರಪ್ಪ, ಉದ್ಯೋಗ ಖಾತ್ರಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಹಾಗೂ ಕಾರ್ಯಕ್ರಮ ಅನುಷ್ಠಾನ ಮಾಡಲು 8 ಇಲಾಖೆಗಳಿಗೆ ಅನುಮತಿ ನೀಡಲಾಗಿದೆ.
ಈ ಇಲಾಖೆಗಳಿಗೆ ಇದರ ಹಣ ಸಹ ಬಿಡುಗಡೆಯಾಗಲಿದ್ದು, ವಿವಿಧ ಕಾಮಗಾರಿಗಳಿಗೆ ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ. ಮೊದಲನೇ ಕಂತಿನ ಅನುದಾನವಾಗಿ ಜಿಲ್ಲೆಗೆ 19 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಬೆಳೆ ವಿಮೆ: ಈ ಬಾರಿ ಶೇ.33.9 ರಷ್ಟು ಮಳೆಯ ಕೊರತೆ ಉಂಟಾಗಿದೆ. ಮುಂಜಾಗ್ರತಾ ದೃಷ್ಟಿಯಿಂದ ಲೀಡ್ ಬ್ಯಾಂಕ್ನ ಸಹಾಯದಿಂದ ಇಲಾಖೆಯಲ್ಲಿ ಬೆಳೆ ವಿಮೆಯನ್ನು ಮಾಡಿಸಲಾಗುವುದು ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಲೀಡ್ಬ್ಯಾಂಕ್ ಮ್ಯಾನೇಜರ್, ಪ್ರಯೋಗ ಕೃಷಿ ಯೋಜನೆ, ರಾಷ್ಟ್ರೀಯ ಕೃಷಿ ವಿಮೆ ಯೋಜನೆಯಡಿ ಜಿಲ್ಲೆಯಲ್ಲಿ ರಾಗಿ, ನೆಲಗಡಲೆ, ದ್ರಾಕ್ಷಿ ಬೆಳೆ ಸೇರಿದಂತೆ ಮುಂತಾದ ಬೆಳೆಗಳಿಗೆ 3 ವರ್ಷದವರೆಗೆ ಬೆಳೆ ವಿಮೆ ನೀಡಲಾಗುವುದು. ಒಂದು ಹೆಕ್ಟೇರ್ಗೆ 1 ಸಾವಿರ ರು. ಬೆಳೆ ವಿಮೆಯಾಗಿದ್ದು ಇದರಲ್ಲಿ ಸರ್ಕಾರ 750 ರು.ಗಳು ನೀಡಿದರೆ ರೈತ 250 ರು. ಭರಿಸಬೇಕಾಗುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

