ಬರೋಬ್ಬರಿ 10 ಸಾವಿರ ಪಡಿತರ ಚೀಟಿ ರದ್ದು
ಬಾಗೇಪಲ್ಲಿ: ಬರಗಾಲಕ್ಕೆ ತುತ್ತಾಗಿರುವ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರೋಬ್ಬರಿ 10 ಸಾವಿರ ಅರ್ಹ ಫಲಾನುಭವಿಗಳ ಪಡಿತರ ಚೀಟಿಗಳನ್ನು ರದ್ದು ಪಡಿಸುವ ಮೂಲಕ ಬಡವರ ಹೊಟ್ಟೆ ಮೇಲೆ ಹೊಡೆಯಲಾಗುತ್ತಿದೆ ಎಂದು ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,2 ತಿಂಗಳ ಹಿಂದೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯರವರು ಒಂದು ಕೆಜಿ ಅಕ್ಕಿಗೆ ಒಂದು ರು.ನಂತೆ 30 ಕೆಜಿ ಅಕ್ಕಿಯನ್ನು ನೀಡುವುದಾಗಿ ಘೋಷಣೆ ಮಾಡಿ ಅಗ್ಗದ ಪ್ರಚಾರ ಪಡೆದುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಏಕಾಏಕಿಯಾಗಿ ಬಡವರ ಪಡಿತರ ಚೀಟಿಗಳನ್ನು ರದ್ದು ಪಡಿಸುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ವ್ಯಂಗ್ಯವಾಡಿದರು.
ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಕ್ಕಿಯನ್ನು ನೀಡುತ್ತಿದ್ದರೆ, ಈ ಕ್ಷೇತ್ರಕ್ಕೆ ಯೋಜನೆ ಇನ್ನು ತಲುಪಿಲ್ಲ ಎಂದ ಅವರು, ಕಳೆದ 3 ವರ್ಷಗಳಿಂದ ಸತತವಾಗಿ ಮಳೆಯಿಲ್ಲದೇ ಬರಗಾಲಕ್ಕೆ ತುತ್ತಾಗಿ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿ ಇರುವ ಈ ಕ್ಷೇತ್ರದಲ್ಲಿ ಸಮಯಕ್ಕೆ ಸರಿಯಾಗಿ ಮಳೆಯಿಲ್ಲದೆ, ಮಾಡಲು ಕೆಲಸವಿಲ್ಲದೆ ಇರುವುದರಿಂದ ಕುಟುಂಬದ ನಿರ್ವಹಣೆಗಾಗಿ ಬಹುತೇಕ ರೈತರು ಮತ್ತು ಕೂಲಿ ಕಾರ್ಮಿಕರು ಕೂಲಿಗಾಗಿ ನಗರ ಪ್ರದೇಶಗಳಿಗೆ ಗುಳೇ ಹೋಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
ಎಲ್ಲಾ ರೀತಿಯಲ್ಲೂ ಹಿಂದುಳಿದ ಪ್ರದೇಶವಾಗಿರುವ ಬಾಗೇಪಲ್ಲಿ ತಾಲೂಕಿನಲ್ಲಿ ಸುಮಾರು 7391 ಮತ್ತು ಗುಡಿಬಂಡೆ ತಾಲೂಕಿನಲ್ಲಿ ಸುಮಾರು 3 ಸಾವಿರ ಸೇರಿದಂತೆ ಒಟ್ಟು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಬಡವರ ಕಾರ್ಡ್ಗಳನ್ನು ರದ್ದುಗೊಳಿಸಿರುವ ಪರಿಣಾಮ ಬಡವರಿಗೆ ರೇಷನನ್ಸಿಗದಂತಾಗಿದೆ ಎಂದು ಆರೋಪಿಸಿದರು.
ಸಿಪಿಐ(ಎಂ) ಮುಖಂಡ ಮಂಜುನಾಥರೆಡ್ಡಿ ಮಾತನಾಡಿ, ಕಳೆದ ಒಂದು ತಿಂಗಳಿಂದ ಡೆಂಘೆ ಸೇರಿದಂತೆ ಸಾಂಕ್ರಾಮಿಕ ರೋಗಗಳು ಈ ಕ್ಷೇತ್ರದಲ್ಲಿ ಹೆಚ್ಚಾಗಿವೆ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಮತ್ತು ಸಿಬ್ಬಂದಿ ಕೊರತೆ, ಶಿಕ್ಷಕರ ಕೊರತೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳು ತಾಂಡವಾಡುತ್ತಿವೆ. ಆದರೆ ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ಕ್ಷೇತ್ರವನ್ನು ಹೆಸರಿಗೆ ಮಾತ್ರ ಬರಗಾಲ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದೆ. ಆದರೆ ಇಲ್ಲಿ ಯಾವುದೇ ರೀತಿಯ ಸೌಲಭ್ಯಗಳು ಸರಿಯಾಗಿ ಸಿಗುತ್ತಿಲ್ಲವೆಂದು ದೂರಿದರು.
ಮಳೆಯ ಕೊರತೆಯಿಂದ ರೈತರಿಗೆ ಬೆಳೆ ನಷ್ಟವಾಗಿದೆ. ಈ ಹಿಂದಿನ ವರ್ಷ ಬೆಳೆ ವಿಮೆ ನೀಡುವುದಾಗಿ ರೈತರಿಂದ ಹಣವನ್ನು ಸಂಗ್ರಹಿಸಿರುವ ವಿಮಾ ಕಂಪನಿಗಳು ಬೆಳೆ ವಿಮೆಯನ್ನು ನಷ್ಟಕ್ಕೆ ಒಳಗಾಗಿರುವ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ನೀಡುವಲ್ಲಿ ಮೀನಮೇಷ ಎಣಿಸುತ್ತಿವೆ ಎಂದ ಅವರು, ವಿವಿಧ ಕೆಲಸಗಳ ನಿಮಿತ್ತ ಸರ್ಕಾರಿ ಕಚೇರಿಗೆ ಬರುವಂತಹವರ ರೈತರ ಮತ್ತು ಜನರ ಸಮಸ್ಯೆಗಳಿಗೆ ತಾಲ್ಲೂಕು ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು.
ಇಲ್ಲಿ ಮೇವು ಸಿಗುತ್ತಿಲ್ಲವಾದರಿಂದ ಜಾನುವಾರುಗಳನ್ನು ಅನಿವಾರ್ಯವಾಗಿ ಕಸಾಯಿ ಖಾನೆಗಳಿಗೆ ಮಾರಾಟ ಮಾಡುತ್ತಿದ್ದು ಸರ್ಕಾರ ಜಾನುವಾರುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವುದನ್ನು ತಪ್ಪಿಸಲು ತಕ್ಷಣವೇ ಗೋಶಾಲೆಗಳನ್ನು ತೆರೆಯುವಂತೆ ಒತ್ತಾಯಿಸಿದ ಅವರು, ತಾಲೂಕು ಆಡಳಿತ ಜನರ ಸಮಸ್ಯೆಗಳನ್ನು ಕೂಡಲೇ ಪರಿಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಸಮಿತಿಯ ಕಾರ್ಯದರ್ಶಿ ರಘುನಾಥರೆಡ್ಡಿ, ಸಿ.ಪಿ.ಐ(ಎಂ) ಮುಖಂಡರಾದ ಚನ್ನರಾಯಪ್ಪ, ಗೋವರ್ಧನಚಾರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

