ಶಿಕ್ಷಕರನ್ನು ನೇಮಿಸಲು ಗ್ರಾಮಸ್ಥರ ಆಗ್ರಹ
ಕ.ಪ್ರ.ವಾರ್ತೆ ಕೆಜಿಎಫ್ ಜು.18
ಬೇತಮಂಗಲ ಹೋಬಳಿ ಕದರಿಪುರದಲ್ಲಿ ಅಗತ್ಯವಿರುವ ಶಿಕ್ಷಕರನ್ನು ನೇಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಸರ್ಕಾರಿ ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದರು.
ಗ್ರಾಮದ ತಾತೇನಹಳ್ಳಿ, ಮಲ್ಲಹಳ್ಳಿ, ಕದಿರಿಪುರ ಗ್ರಾಮಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 2011-12ನೇ ಸಾಲಿನಲ್ಲಿ ಸುಮಾರು 100ಕ್ಕೂ ಹೆಚ್ಚು ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಆದರೆ, ಈ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಮಾತ್ರ ಕೆಲಸ ನಿರ್ವಹಿಸುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಸರಿಯಾದ ಶಿಕ್ಷಣ ದೊರೆಯುತ್ತಿಲ್ಲ ಎಂದು ಗ್ರಾಮಸ್ಥರ ಆರೋಪವಾಗಿದೆ.
2012-13ನೇ ಸಾಲಿನಲ್ಲಿ ಕದರಿಪುರ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಮಕ್ಕಳ ಸಂಖ್ಯೆ ಕಡಿಮೆಯಾಗಿತ್ತು. ಈ ಬಗ್ಗೆ ಗ್ರಾಮಸ್ಥರು ಹಾಗೂ ಪೋಷಕರು ರಾಮಸಾಗರ ಗ್ರಾ.ಪಂ. ಅಧ್ಯಕ್ಷರಿಗೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಲವು ಬಾರಿ ಶಿಕ್ಷಕರನ್ನು ನೇಮಕ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ದೂರುಗಳನ್ನು ಸಲ್ಲಿಸಿದ್ದಾರೆ. ಆದೆರ, ಇದುವರೆಗೂ ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಆದರೆ, ಇದೀಗ 2013-14ನೇ ಸಾಲಿನಲ್ಲಿ ಕೇವಲ 65 ಮಕ್ಕಳು ಮಾತ್ರ ಕದರಿಪುರ ಗ್ರಾಮದ ಸರ್ಕಾರಿ ಶಾಲೆಗೆ ಬರುತ್ತಿದ್ದಾರೆ. ಇವರಿಗೆ ಪಾಠ-ಪ್ರವಚನಗಳನ್ನು ಮಾಡಲು ಕೇವಲ ಒಬ್ಬರು ಮಾತ್ರ ಶಿಕ್ಷಕರಿದ್ದಾರೆ. ಇವರಿಂದ ಎಷ್ಟು ಮಕ್ಕಳಿಗೆ, ಎಷ್ಟು ದಿನಗಳವರೆಗೆ ಗುಣಮಟ್ಟದ ಪಾಠ ಹೇಳಲು ಸಾಧ್ಯ? ಶಿಕ್ಷಣ ಕೊರತೆಯಿಂದಾಗಿ ಈಗಾಗಲೇ ಹಲವಾರು ಮಕ್ಕಳು ಈ ಶಾಲೆ ತೊರೆದು ಬೇರೆ ಶಾಲೆಗಳಿಗೆ ಸೇರಿಕೊಂಡಿದ್ದಾರೆ. ಮೂರು ಗ್ರಾಮದ ಮಕ್ಕಳಿಗೆ ಕದರಿಪುರ ಶಾಲೆ ಹೆಚ್ಚು ಅನುಕೂಲವಾಗಿದೆ. ಆದರೆ, ಹತ್ತಾರು ಮೈಲಿ ದೂರದಲ್ಲಿರುವ ಶಾಲೆಗಳಿಗೆ ಮಕ್ಕಳು ಹೋಗಿ ಬರಲು ತೊಂದರೆಯಾಗುತ್ತಿದೆ ಎಂದು ಪೋಷಕರು ಮತ್ತು ಗ್ರಾಮಸ್ಥರು ಆರೋಪಿಸಿದರು.
ಕದರಿಪುರ ಶಾಲೆಗೆ ಅಗತ್ಯವಿರುವ ಶಿಕ್ಷಕರನ್ನು ನೇಮಿಸಲು ಕ್ರಮ ಜರುಗಿಸುವಂತೆ ಹಲವು ಬಾರಿ ಗ್ರಾಮ ಪಂಚಾಯಿತಿಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕೋಲಾರದ ಡಿಡಿಪಿಐ ಅವರಿಗೆ ದೂರು ನೀಡಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಈ ಸಂದರ್ಭ ಕದರಿಪುರ, ಮಲ್ಲಹಳ್ಳಿ ಹಾಗೂ ತಾತೇನಹಳ್ಳಿ ಗ್ರಾಮಸ್ಥರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಶ್ರೀಲಕ್ಷ್ಮೀನರಸಿಂಹರ ಕನ್ನಡ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಶೀಘ್ರ ಸೌಲಭ್ಯ ಕಲ್ಪಿಸಲಿದ್ದರೆ ರಾಮಸಾಗರ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು. ಶ್ರೀಲಕ್ಷ್ಮೀನರಸಿಂಹರ ಕನ್ನಡ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀನಿವಾಸನ್, ಕಾರ್ಯದರ್ಶಿ ನಾಗೇಶ್, ಗ್ರಾಮದ ಮುಖಂಡರು, ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

