ಕೋಲಾರ

'ಸರ್ಕಾರಿ ಸವಲತ್ತು ಅರ್ಹ ದಲಿತ ಫಲಾನುಭವಿಗಳಿಗೆ ಸಿಗಲಿ'

Published On :

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿನ ಸರ್ಕಾರಿ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ಮತ್ತು ಅವ್ಯವಹಾರ ಕೆಲಸಗಳಿಗೆ ತ್ವರಿತವಾಗಿ ಕಡಿವಾಣ ಹಾಕಿ, ಸರ್ಕಾರದಿಂದ ದೊರೆಯಬೇಕಾದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ದಲಿತ ಫಲಾನುಭವಿಗಳಿಗೆ ಸಿಗುವಂತೆ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ದಲಿತ ಸಂಘರ್ಷ ಸೇನೆ ಪ್ರತಿಭಟನೆ ನಡೆಸಿತು.
ನಗರದ ಪ್ರವಾಸಿ ಮಂದಿರದಿಂದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟ ದಲಿತ ಸಂಘರ್ಷ ಸೇನೆಯ ಮುಖಂಡರು ಮತ್ತು ಕಾರ್ಯಕರ್ತರು ಉಪ ವಿಭಾಗಾಧಿಕಾರಿಗಳ ಕಚೇರಿಯ ಆವರಣದಲ್ಲಿ ಧರಣಿ ಕುಳಿತರು. ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಅಧಿಕಾರಿಗಳ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಸರ್ಕಾರ ದಲಿತರಿಗಾಗಿ ನಾನಾ ಯೋಜನೆ, ಕಾರ್ಯಕ್ರಮಗಳ ಮೂಲಕ ನಾನಾ ಸವಲತ್ತುಗಳನ್ನು ವಿತರಿಸುತ್ತಿದೆಯಾದರೂ ಅಧಿಕಾರಿಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರಮುಖ ಬೇಡಿಕೆಗಳು: ಜಿಲ್ಲೆಯಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಸ್ಮಶಾನಕ್ಕಾಗಿ ಅಗತ್ಯವಿರುವ ಭೂಮಿಯನ್ನು ಮಂಜೂರು ಮಾಡಬೇಕು. ಇದರ ಜತೆಗೆ ಸ್ಮಶಾನದ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ್ದ ಇಲಾಖೆಗಳಲ್ಲಿ ಸರ್ಕಾರಿ ಅನುದಾನ ದುರ್ಬಳಕೆಯಾಗುತ್ತಿದ್ದು ದಲಿತರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಚೇರಿಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತನಿಖೆಗೊಳಪಡಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹಂಗಾಮಿ ನೌಕರರನ್ನು ಕೂಡಲೇ ಕಾಯಂಗೊಳಿಸಬೇಕು. ದಲಿತರಿಗೆ ಮಂಜೂರಾಗಿರುವ ಜಮೀನುಗಳಿಗೆ ಸಂಬಂಧಪಟ್ಟ ತಾಲೂಕು ಕಚೇರಿಗಳಲ್ಲಿ ಮಂಜೂರಾತಿ ಮೂಲ ಕಡತ ಲಭ್ಯವಿಲ್ಲ ಎಂದು ತಿಳಿಸಿದ್ದು ಈ ಕೂಡಲೇ ಆಯಾ ತಹಸೀಲ್ದಾರುಗಳು ಸೂಕ್ತ ಗಮನಹರಿಸಿ ಮಂಜೂರಾತಿ ದೃಢೀಕರಣ ಪತ್ರವನ್ನು ಅರ್ಹರಿಗೆ ವಿತರಿಸಬೇಕು. ಬಾಗೇಪಲ್ಲಿ, ಚಿಕ್ಕಬಳ್ಳಾಪುರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಯಬೇಕು.ಬಾಗೇಪಲ್ಲಿ ತಾಲೂಕಿನಲ್ಲಿ ಅಕ್ರಮವಾಗಿ ನಡೆಯುತ್ತಿರುವ ಅರಣ್ಯ ನಾಶ, ಕಳ್ಳಭಟ್ಟಿ ಸಾರಾಯಿ ಮಾರಾಟವನ್ನು ತಡೆಯಬೇಕೆನ್ನುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ತಮ್ಮ 20 ಬೇಡಿಕೆಗಳ ಮನವಿ ಪತ್ರವನ್ನು ಉಪ ವಿಭಾಗಾಧಿಕಾರಿಗಳ ಕಚೇರಿ ಮೂಲಕ ಜಿಲ್ಲಾಡಳಿತ ಮತ್ತು ಸರ್ಕಾರಕ್ಕೆ ಸಲ್ಲಿಸಿದರು.
ದಲಿತ ಸಂಘರ್ಷ ಸೇನೆ ಮುಖಂಡರಾದ ಆನಂದ್, ನರಸಿಂಹಪ್ಪ, ಜಗದೀಶ್, ಡಿ.ವಿ.ನಾರಾಯಣಸ್ವಾಮಿ, ಜಗದೀಶ್, ವೆಂಕಟಪ್ಪ, ಶಂಕರ್, ನಾಗನರಸಿಂಹ, ಚಂದ್ರಣ್ಣ, ಬಾಬು, ಜಯಮ್ಮ, ರತ್ನಮ್ಮ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.