ಆ.25ರಂದು ಬೃಹತ್ ಉದ್ಯೋಗ ಮೇಳ
ಕನ್ನಡಪ್ರಭ ವಾರ್ತೆ ಕೋಲಾರ ಜು.22
ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವ(ಸ್ವತಂತ್ರ) ಕೆ.ಹೆಚ್. ಮುನಿಯಪ್ಪ ಮಾರ್ಗದರ್ಶನದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಗಸ್ಟ್ 25ರಂದು ಕೋಲಾರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಉದ್ಯೋಗ ಮೇಳದ ಸಮನ್ವಯ ಸಮಿತಿ ಅಧ್ಯಕ್ಷ, ವಿಧಾನಪರಿಷತ್ ಸದಸ್ಯ ದಯಾನಂದ ರೆಡ್ಡಿ ತಿಳಿಸಿದರು.
ಅವರು ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉದ್ಯೋಗ ಮೇಳ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೋಲಾರ ಜಿಲ್ಲೆಯಲ್ಲಿ ಅಗಾಧವಾದ ಮಾನವ ಸಂಪನ್ಮೂಲವಿದೆ, ಇಲ್ಲಿನ ನಿರುದ್ಯೋಗಿ ಯುವಕರಿಗೆ ಕೆಲಸ ಸಿಕ್ಕಲ್ಲಿ ಕೇವಲ ವೈಯಕ್ತಿಕವಾದ ಅಭಿವೃದ್ಧಿ ಮಾತ್ರವಲ್ಲ, ದೇಶ ಮತ್ತು ಆರ್ಥಿಕ ಪ್ರಗತಿಗೆ ಇದರಿಂದ ಪ್ರಯೋಜನವಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಸುಮಾರು 8 ಸಾವಿರ ಕೈಗಾರಿಕೆಗಳು ಇತ್ತು. ಈ ಪೈಕಿ 1500 ಕೈಗಾರಿಕೆಗಳು ರೋಗಗ್ರಸ್ತವಾಗಿ ಮುಚ್ಚಿ ಹೋಗಿವೆ, ಇನ್ನುಳಿದ 6500 ಕೈಗಾರಿಕೆಗಳಲ್ಲಿ ಉದ್ಯೋಗ ಲಭ್ಯತೆಯನ್ನು ಆಧರಿಸಿ ಒಂದು ಕಾರ್ಖಾನೆಯಲ್ಲಿ ಕನಿಷ್ಠ ಒಬ್ಬರಿಗೆ ಉದ್ಯೋಗ ಕಲ್ಪಿಸಿದರೂ ಜಿಲ್ಲೆಯ 6500 ಮಂದಿಗೆ ಉದ್ಯೋಗ ಸಿಗುವುದರಿಂದ ಜಿಲ್ಲೆಯ ನಿರುದ್ಯೋಗ ಸಮಸ್ಯೆ ನಿವಾರಣೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.
ಉದ್ಯೋಗ ಮೇಳ ಯಶಸ್ವಿಗೊಳಿಸಿ:
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕೆ.ಹೆಚ್. ಮುನಿಯಪ್ಪನವರು ಈಗ ಕೇಂದ್ರ ಸರ್ಕಾರದಲ್ಲಿ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಖಾತೆ ಸಚಿವರಾಗಿದ್ದಾರೆ, ಈ ಹಿಂದೆ ಅವರಿಗೆ ಸಿಕ್ಕ ಅಧಿಕಾರದಲ್ಲಿ ಕೈಲಾದಷ್ಟು ಕೊಡುಗೆ ನೀಡಿದ್ದಾರೆ. ಈಗ ಉತ್ತಮ ಖಾತೆ ಸಿಕ್ಕಿರುವುದರಿಂದ ಜಿಲ್ಲೆಯ ಕನಿಷ್ಠ 5 ಸಾವಿರ ಮಂದಿ ನಿರುದ್ಯೋಗಿಗಳಿಗೆ ವಿವಿಧ ಕೈಗಾರಿಕೆಗಳಲ್ಲಿ ಮತ್ತು ಉದ್ದಿಮೆಗಳಲ್ಲಿ ಕೆಲಸ ಕೊಡಿಸುವ ಮೂಲಕ ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡಬೇಕೆಂದು ಉದ್ದೇಶಿಸಿರುವುದರಿಂದ ಆ.25 ರಂದು ನಡೆಸಲು ಉದ್ದೇಶಿಸಿರುವ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸಲು ಜಿಲ್ಲಾ ಆಡಳಿತ ಸಜ್ಜಾಗಬೇಕೆಂದು ತಿಳಿಸಿದರು.
ಜಿಲ್ಲೆಯ ಕಂದಾಯ ಇಲಾಖೆ, ಕೈಗಾರಿಕೆ, ಉದ್ಯೋಗ ವಿನಿಮಯ ಕೇಂದ್ರ, ನೆಹರು ಯುವಕ ಕೇಂದ್ರ , ಜಿಲ್ಲಾ ಪಂಚಾಯಿತಿ ಸೇರಿದಂತೆ ಮತ್ತಿತರ ಇಲಾಖೆಗಳು ಒಗ್ಗೂಡಿ ಕೆಲಸ ಮಾಡಿದಲ್ಲಿ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸುವುದಕ್ಕೆ ಕಷ್ಟವಾಗದು ಎಂದ ದಯಾನಂದರೆಡ್ಡಿ ಅವರು, ಜಿಲ್ಲಾ ಉದ್ಯೋಗ ಕೇಂದ್ರದಲ್ಲಿ ಜಿಲ್ಲೆಯ 25 ಸಾವಿರ ಮಂದಿ ಯುವಕ-ಯುವತಿಯರು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇವರಿಗೆ ಆ.25ರಂದು ನಡೆಯಲಿರುವ ಉದ್ಯೋಗ ಮೇಳಕ್ಕೆ ಆಹ್ವಾನ ನೀಡಬೇಕು, ಜಿಲ್ಲೆಯ ಎಲ್ಲ ಕೈಗಾರಿಕೋದ್ಯಮಿಗಳು ಮೇಳದಲ್ಲಿ ಭಾಗವಹಿಸುವಂತೆ ಪತ್ರ ಬರೆಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ದೇಶದಲ್ಲಿ ಪ್ರತಿವರ್ಷ ಸುಮಾರು 1.50 ಕೋಟಿ ಮಂದಿ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ, ಈ ಪೈಕಿ ಕೇವಲ 1 ಕೋಟಿ ಜನರಿಗೆ ಮಾತ್ರ ಉದ್ಯೋಗ ಸಿಗುತ್ತಿದ್ದು 50 ಲಕ್ಷ ಮಂದಿ ನಿರುದ್ಯೋಗಿಗಳಾಗಿಯೇ ಉಳಿಯುತ್ತಿದ್ದಾರೆ, ಇದಕ್ಕೆ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದಲೇ ಉದ್ಯೋಗ ಮೇಳಗಳನ್ನು ನಡೆಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಲಾಗುತ್ತಿದೆ ಎಂದರು.
ನಿರುದ್ಯೋಗ ಸಮಸ್ಯೆಗೆ ಉದ್ಯೋಗ ಸೃಷ್ಟಿಯಾಗದಿರುವುದು ಮಾತ್ರವಲ್ಲದೆ ಕೌಶಲ್ಯದ ಕೊರತೆ ಕಾರಣವಾಗಿರುವುದರಿಂದ ಉದ್ಯೋಗ ಮೇಳದ ಜತೆಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರಲು ಉದ್ದೇಶಿಸಲಾಗಿದೆ ಎಂದು ದಯಾನಂದರೆಡ್ಡಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಶ್ರೀನಿವಾಸ್, ನೆಹರು ಯುವ ಕೇಂದ್ರದ ಅಧಿಕಾರಿ ನಾರಾಯಣರೆಡ್ಡಿ, ಕಾರ್ಮಿಕ ಅಧಿಕಾರಿ ರಾಜಗೋಪಾಲ್, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಮುನೇಗೌಡ ಮತ್ತಿತರ ಇಲಾಖೆಗಳ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

