ಕೋಲಾರ

ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಅಧಿಕ ಸ್ಥಾನ: ಎನ್. ಸಂಪಂಗಿ ಭವಿಷ್ಯ

Published On :

ಬಾಗೇಪಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ಅಲ್ಲದೇ ಮತ್ತೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಶಾಸಕ ಎನ್. ಸಂಪಂಗಿ ಭವಿಷ್ಯ ನುಡಿದರು.
ಪಟ್ಟಣದ ದರ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಇಫ್ತಾರ್ ಕೂಟದಲ್ಲಿ ಅವರು ಮಾತನಾಡುತ್ತಿದ್ದರು.
ಡಾ. ಎಂ. ವೀರಪ್ಪ ಮೊಯ್ಲಿರವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆದ್ದು ಕೇಂದ್ರದಲ್ಲಿ ಮಂತ್ರಿಯಾದ ನಂತರ ಹಲವಾರು ಜನಪರ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ.
  ಆದರೆ, ಇವರ ಏಳ್ಗೆಯನ್ನು ಸಹಿಸದ ಕೆಲವರು ವೀರಪ್ಪ ಮೊಯ್ಲಿಯವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದೆಲ್ಲಾ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮೊಯ್ಲಿ  ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿರುವ ಹಿನ್ನೆಲೆಯಲ್ಲಿ ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಡೆ ಗಮನ ಕೊಡಬೇಕು. ಅದು ಬಿಟ್ಟು ಬೇರೆಯವರು ಮಾಡುವ  ಅಭಿವೃದ್ಧಿ  ಕೆಲಸಗಳಿಗೆ ತೊಂದರೆ ಕೊಡಬಾರದೆಂದು ತಿಳಿಸಿದರು.
ತಾವು ಶಾಸಕರಾಗಿದ್ದಾಗ ಕ್ಷೇತ್ರದ  ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿದ್ದು ಇನ್ನು ಅನೇಕ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ.
ತಮ್ಮ ಅಧಿಕಾರದ ಅವಧಿಯಲ್ಲಿ ಪ್ರಾರಂಭಿಸಿರುವಂತಹ ಕಾಮಗಾರಿಗಳನ್ನು ಮುಂದುವರೆಸಿ ಶೀಘ್ರದಲ್ಲೇ ಮುಗಿಸುವಂತೆ ಹಾಲಿ ಶಾಸಕರಿಗೆ ಸಲಹೆ ನೀಡಿದರು.
ಕ್ಷೇತ್ರದಲ್ಲಿ ಸತತವಾಗಿ ಬರಗಾಲದಿಂದಾಗಿ ಜನರು ತತ್ತರಿಸುತ್ತಿರುವುದರ ನಡುವೆ ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ 130 ಕೋಟಿ  ರು. ವೆಚ್ಚದಲ್ಲಿ ಸುಮಾರು 20 ಕೆರೆಗಳನ್ನು ಕುಡಿಯುವ ನೀರಿಗಾಗಿ ಗುರುತಿಸಲಾಗಿದೆ.
 ಈ ಯೋಜನೆ ಸರ್ಕಾರದಿಂದ ಅನುಮೋದನೆಗೊಂಡಿದ್ದು ಹಾಲಿ ಶಾಸಕರು ಈ ಯೋಜನೆಯನ್ನು ಅನುಷ್ಠಾನಕ್ಕೆ ತಂದರೆ ಕ್ಷೇತ್ರದಲ್ಲಿರುವ ನೀರಿನ ಸಮಸ್ಯೆಯನ್ನು ಬಗೆಹರಿಸಬಹುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಬಿ.ಆರ್. ನರಸಿಂಹನಾಯ್ಡು, ಪುರಸಭಾ ಸದಸ್ಯ ಶ್ರೀನಿವಾಸ ಅಪ್ಪಯ್ಯಬಾಬು, ನಂಜುಂಡಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಅಶ್ವತ್ತಪ್ಪ, ಮುಖಂಡರಾದ, ಬಾಬಾಜಾನ್, ಸಲೀಂ, ರಿಜ್ವಾನ್‌ಪಾಷ, ಇನಾಯತ್, ಜಿ.ಪಂ.ಮಾಜಿ ಉಪಾಧ್ಯಕ್ಷ ಎ.ವಿ. ಪೂಜಪ್ಪ, ಪಾಚೇಪಲ್ಲಿ ನಾಗರಾಜರೆಡ್ಡಿ ಮತ್ತಿರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.