ಕೋಲಾರ

ಹಂತಕನ ಬಂಧನ ವಿಳಂಬ:ಶವವಿಟ್ಟು ಪ್ರತಿಭಟನೆ

Published On :

ಕೆಜಿಎಫ್:  ಹಳೇ ದ್ವೇಷದ ಹಿನ್ನೆಲೆಯಲ್ಲಿ ಭಾನುವಾರ ವ್ಯಕ್ತಿಯನ್ನು ಹಾಡುಹಗಲೇ ಕೊಲೆ ಮಾಡಿ ಪರಾರಿಯಾದ ಆರೋಪಿಯನ್ನು ಮೂರು ದಿನಗಳಾದರೂ ಪೊಲೀಸರು ಬಂಧಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿ ಮಂಗಳವಾರ ಸಂಜೆ ರಾಬರ್ಟ್‌ಸನ್‌ಪೇಟೆ ಪೊಲೀಸ್ ಠಾಣೆ ಮುಂಭಾಗದ ಸೂರಜ್‌ಮುಲ್ ವೃತ್ತದಲ್ಲಿ ಮೃತರ ಸಂಬಂಧಿಗಳು, ಬಡಾವಣೆ ನಿವಾಸಿಗಳು ಶವವಿಟ್ಟು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ನಗರದಲ್ಲಿ ಮನೆ ಕಳ್ಳತನ, ಸುಲಿಗೆ, ಕೊಲೆ ಪ್ರಕರಣ ನಿರಂತರವಾಗಿ ನಡೆಯುತ್ತಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ, ಅಪರಾಧ ಪ್ರಕರಣ ನಿಯಂತ್ರಿಸುವಲ್ಲಿ ಕೆಜಿಎಫ್ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಕ್ಷೇತ್ರದ ಜನತೆ ಭೀತಿಯಿಂದ ಜೀವನ ನಡೆಸುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವಿಷಯ ತಿಳಿಯುತ್ತಿದ್ದಂತೆ ನೂರಾರು ಪೊಲೀಸ್ ಸಿಬ್ಬಂದಿ ಆಗಮಿಸಿದರು. ಈ ಸಂದರ್ಭ ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆ ಕೂಗಿ, ಕೊಲೆಗೈದು ಪರಾರಿಯಾದ ಆರೋಪಿಯನ್ನು  ಕೂಡಲೇ ಬಂಧಿಸಬೇಕು. ಮೃತನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ಇದರಿಂದ ನಗರದಲ್ಲಿ ಕೆಲ ಕಾಲ ಬಿಗು ವಾತಾವರಣ ಉಂಟಾಗಿತ್ತು. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ, ಮನವಿ ಸ್ವೀಕರಿಸಬೇಕು. ಅಲ್ಲಿಯವರೆಗೆ ಶವ ಇಲ್ಲಿಂದ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಸ್ಥಳಕ್ಕೆ ಆಗಮಿಸಿದ ವೃತ್ತ ನಿರೀಕ್ಷಕ ಟಿ.ಸಿ. ವೆಂಕಟೇಶ್, ಪಿಎಸ್‌ಐಗಳಾದ ಎಲ್.ಆಂಜಪ್ಪ, ನಾರಾಯಣಸ್ವಾಮಿ, ರಂಗಸ್ವಾಮಯ್ಯ, ಮೃತ ಕುಟುಂಬದೊಂದಿಗೆ ಮಾತುಕತೆ ನಡೆಸಿ ಆರೋಪಿಯನ್ನು ಬಂಧಿಸುವ ಎಲ್ಲಾ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಇನ್ನೆರಡು ದಿನಗಳಲ್ಲಿ ಫಲಿತಾಂಶ ನೀಡುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನೆ ಕೈ ಬಿಟ್ಟು, ಶವವನ್ನು ಅಂತ್ಯ ಸಂಸ್ಕಾರ ನಡೆಸಲು ಕೊಂಡೊಯ್ಯಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.