ಕೋಲಾರ

ಜನಸಂಖ್ಯೆ ಹೆಚ್ಚಳ ದೇಶದ ಪ್ರಗತಿಗೆ ಮಾರಕ

Published On :

ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಡಾ. ಡಿ.ಎಸ್. ವಿಶ್ವನಾಥ್ ಅಭಿಪ್ರಾಯ
ಕ.ಪ್ರ.ವಾರ್ತೆ ಕೋಲಾರ ಜು.26
ಜನಸಂಖ್ಯೆ ಹೆಚ್ಚಳದಿಂದ ದೇಶದ ಸಾಮಾಜಿಕ, ಆರ್ಥಿಕ ಪ್ರಗತಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ, ಬಡತನ, ಅಜ್ಞಾನ, ಮಾಹಿತಿಯ ಕೊರತೆ, ಮೂಢನಂಬಿಕೆಗಳು, ಬಾಲ್ಯ ವಿವಾಹ ಹಾಗೂ ಕಡಿಮೆ ಸಾಕ್ಷರತೆಯಿಂದಾಗಿ ಜನಸಂಖ್ಯೆ ಹೆಚ್ಚುತ್ತಿದ್ದು ಜನತೆ ತಮ್ಮ ವೈಯಕ್ತಿಕವಾದ ಹಾಗೂ ದೇಶದ ಅಭಿವೃದ್ಧಿಗಾಗಿ ಜನಸಂಖ್ಯೆ ಸ್ಫೋಟದ ಬಗ್ಗೆ ಎಚ್ಚರ ವಹಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಎಸ್. ವಿಶ್ವನಾಥ್ ಕರೆ  ನೀಡಿದರು.
ಅವರು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಹದಿಹರೆಯದ ಗರ್ಭದಾರಣೆ ವಿಷಯದ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಿದಾಗ ಜನಸಂಖ್ಯೆ ಸ್ಫೋಟವನ್ನು ತಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ವಿಶ್ವದಲ್ಲಿ ಪ್ರತಿ ವರ್ಷ ಸುಮಾರು 16 ದಶಲಕ್ಷ ಬಾಲಕಿಯರು ಅಂದರೆ 18 ವರ್ಷದೊಳಗಿನ ಹೆಣ್ಣು ಮಕ್ಕಳು ಗರ್ಭಧಾರಣೆ ಹೊಂದುತ್ತಿದ್ದಾರೆ, 3 ದಶಲಕ್ಷ ಬಾಲಕಿಯರು ನುರಿತರಲ್ಲದ ವೈದ್ಯರಿಂದ ಗರ್ಭಪಾತ ಮಾಡಿಸಿಕೊಂಡು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ವಿಷಾದಿಸಿದರು.
ದೇಶದಲ್ಲಿ ಪುರುಷ ಮತ್ತು ಮಹಿಳೆಯ ಅನುಪಾತದಲ್ಲಿ ಸಾಕಷ್ಟು ವ್ಯತ್ಯಾಸವಿದೆ ಎಂದ ಅವರು, ಪ್ರತಿ ವರ್ಷ 0.6ರಷ್ಟು ಹೆಣ್ಣು ಮಕ್ಕಳ ಅನುಪಾತ ಕಡಿಮೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದ ಜಿಲ್ಲಾಧಿಕಾರಿಗಳು, ಪ್ರಕೃತಿದತ್ತವಾದ ಪೌಷ್ಟಿಕಾಂಶಗಳು ತಾಯಿ ಮತ್ತು ಮಕ್ಕಳಿಗೆ ಇಂದು ಬೇರೆ ಬೇರೆ ಕಾರಣಗಳಿಂದ ಸಿಗದೆ ಇರುವುದರಿಂದ ಆರೋಗ್ಯದಲ್ಲಿ ಸಾಕಷ್ಟು ಏರುಪೇರುಗಳನ್ನು ಕಾಣುವಂತಾಗಿದೆ ಎಂದು ಹೇಳಿದರು.
ಹದಿಹರೆಯದ ವಯಸ್ಸಿನಲ್ಲಿ ಗರ್ಭಧಾರಣೆಯಾದರೆ ಹೆಣ್ಣು ಮಕ್ಕಳಲ್ಲಿ ಕಿನ್ನತೆ ಮತ್ತು ಮಗುವಿಗೆ ಬೇಕಾದಷ್ಟು ಹಾಲು ಸಿಗುವುದಿಲ್ಲ ಎಂದ ಅವರು, ಪ್ರಪಂಚದಲ್ಲಿ ಶೇ.12ರಿಂದ 15 ರಷ್ಟು ಮಂದಿ ಹದಿಹರೆಯದ ವಯಸ್ಸಿನಲ್ಲಿ ಮಕ್ಕಳನ್ನು ಹೆತ್ತು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆಂದು ತಿಳಿಸಿದರು.      
ವಿಶ್ವದ ಜನಸಂಖ್ಯೆ 720ಕೋಟಿ:  ವಿಶ್ವದಲ್ಲಿ 1987ರಲ್ಲಿ 500 ಕೋಟಿ ಜನಸಂಖ್ಯೆ ಇತ್ತು ಈಗ 720 ಕೋಟಿ ದಾಟಿದೆ. ಭಾರತದಲ್ಲಿ 121 ಕೋಟಿ ಮತ್ತು ರಾಜ್ಯದಲ್ಲಿ 6.11 ಕೋಟಿ ಜನಸಂಖ್ಯೆ ಇದ್ದು, ಮುಂದಿನ ದಿನಳಗಳಲ್ಲಿ ಆಹಾರ ಭದ್ರತೆ ಮೇಲೆ ಇದರಿಂದ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.
ಭಾರತ ಕೃಷಿ ಆಧಾರಿತ ದೇಶವಾಗಿದ್ದರೂ 250 ಮಿಲಿಯನ್ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗುತ್ತಿದೆ. ಮುಂದಿನ 10-15 ವರ್ಷ ಕಳೆದರೆ 350 ರಿಂದ 400 ಮಿಲಿಯನ್ ಮೆಟ್ರಿಕ್ ಟನ್ ಆಹಾರ ಬೇಕಾಗುತ್ತದೆ. ಜನಸಂಖ್ಯೆ ಹೆಚ್ಚುತ್ತಾ ಹೋದರೆ ಆಹಾರ ಸಮಸ್ಯೆ ಎದುರಾಗುವುದರಲ್ಲಿ ಅನುಮಾನವಿಲ್ಲ ಎಂದರು.
ಕೋಲಾರ ಜಿಲ್ಲೆಯಲ್ಲಿ ಪ್ರತಿ ವರ್ಷ 7500 ಮಂದಿ ನಮಗೆ ಮಕ್ಕಳು ಬೇಡವೆಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತಿದ್ದು, ಇದರಲ್ಲಿ ಹೆಚ್ಚಿನವರು ಹೆಣ್ಣು ಮಕ್ಕಳಾಗಿದ್ದಾರೆ. ಗಂಡು ಮಕ್ಕಳು ಸಹ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಾಗ ಮಾತ್ರ ಸಮಾನತೆ ಕಾಣಲು ಸಾಧ್ಯ ಎಂದು ಸಲಹೆ ನೀಡಿದರು.
ಜಿ.ಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸೀಮೋಲ್ ಮೋಹನ್, ಜಿ.ಪಂ. ಸಿಇಒ ಜುಲ್ಪಿಕಾರ್ ಉಲ್ಲಾ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಎಂ.ಐ ಜಮೀಲ್, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಾಂತ್ ದಾಸ್, ಆರ್.ಎಲ್. ಜಾಲಪ್ಪ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಲಕ್ಷ್ಮಯ್ಯ, ಬೆಮಲ್ ಆಸ್ಪತ್ರೆಯ ವೈದ್ಯಕೀಯ ಅಧಿಕ್ಷಕ ಡಾ. ರಮೇಶ್ ಇದ್ದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಎನ್. ರಾಜಕುಮಾರ್ ಸ್ವಾಗತಿಸಿ, ಹೇಮಲತಾ ನಿರೂಪಿಸಿದರು. ಇದಕ್ಕೂ ಮೊದಲು ಹದಿಹರೆಯದ ಗರ್ಭದಾರಣೆ ವಿಷಯಕ್ಕೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತರು ಕಿರು ನಾಟಕ ಪ್ರದರ್ಶಿಸಿ ಜನರಲ್ಲಿ ಅರಿವು ಮೂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.