ಪೈಪ್ಲೈನ್ ಮೂಲಕ ನೀರು ಹರಿಸಲು ತೀವ್ರ ಆಕ್ರೋಶ
ಚಿಕ್ಕಬಳ್ಳಾಪುರ: ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಜನರನ್ನೊಳಗೊಂಡ ಶಾಶ್ವತ ನೀರಾವರಿ ಹೋರಾಟದ ಸಭೆಯಲ್ಲಿ, ಬಯಲು ಸೀಮೆ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರನ್ನು ಪೈಪ್ಲೈನ್ ಮೂಲಕ ಒದಗಿಸುವ ನಿರ್ಧಾರ ವ್ಯಕ್ತವಾಗುತ್ತಿರುವ ಗೊಂದಲಕಾರಿ ಹೇಳಿಕೆಗಳ ಕುರಿತು ಆಕ್ರೋಶ ವ್ಯಕ್ತವಾಯಿತು.
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ದಿನೇ ದಿನೇ ಕುಸಿದು ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಲ್ಲಿ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಡಾ ಪರಮಶಿವಯ್ಯನವರ ವರದಿಯಾಧಾರಿತ ನೀರಾವರಿ ಯೋಜನೆಯನ್ನು ಕಾರ್ಯ ರೂಪಕ್ಕೆ ತರಬೇಕೆಂದು ಒತ್ತಾಯಿಸಿ ನಿರಂತರವಾಗಿ ಹೋರಾಟಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಗಳ ಬಂದ್, ರಸ್ತೆ ತಡೆ, ಅನಿರ್ದಿಷ್ಟಾವಧಿ ಧರಣಿ, ಪ್ರತಿಭಟನೆಗಳನ್ನು ನಡೆಸಿ ಸರ್ಕಾರದ ಗಮನ ಸೆಳೆಯುವಂತಹ ಕೆಲಸವನ್ನು ಮಾಡಲಾಗಿದೆ. ಇದರ ಫಲವಾಗಿ ಎತ್ತಿನಹೊಳೆ ಯೋಜನೆ ಮತ್ತು ಡಾ. ಪರಮಶಿವಯ್ಯನವರ ವರದಿಯನ್ನು ಅನುಷ್ಠಾನಗೊಳಿಸುವ ಭರವಸೆ ಸಿಕ್ಕಿದೆ. ಈ ನಡುವೆ ಮುಖ್ಯಮಂತ್ರಿಗಳು, ನೀರಾವರಿ ಸಚಿವರು ಸೇರಿದಂತೆ ಪ್ರಮುಖರನ್ನೊಳಗೊಂಡಂತೆ ನಡೆದ ಸಭೆಗಳಲ್ಲಿ, ಎತ್ತಿನಹೊಳೆ ಯೋಜನೆಯಡಿ ನೀರನ್ನು ಕಾಲುವೆಗಳ ಮೂಲಕ ಹರಿಸಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಈಗ ಕೆಲವರು ಯೋಜನೆಯ ದಿಕ್ಕು ತಪ್ಪಿಸಲು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೋರಾಟಗಾರರು ಆರೋಪಿಸಿದರು.
ಕಾಲುವೆಗಳ ಮೂಲಕ ನೀರನ್ನು ಹರಿಸಿದರೆ ಮುಂದೆ ಡಾ. ಪರಮಶಿವಯ್ಯನವರ ವರದಿಯನ್ನು ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ. ಆದರೆ, ಪೈಪ್ಲೈನ್ ಅಳವಡಿಸಿದರೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಹಿಂದಿನಿಂದಲೂ ಪೈಪ್ಲೈನ್ನ್ನು ವಿರೋಧಿಸಿ, ಕಾಲುವೆಗಳ ಮೂಲಕ ನೀರನ್ನು ಹರಿಸುವಂತೆ ಒತ್ತಾಯಿಸುತ್ತಿದೆ. ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇತ್ತೀಚೆಗೆ ದೇವನಹಳ್ಳಿಯಲ್ಲಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಪೈಪ್ಲೈನ್ ಬಗ್ಗೆ ಪ್ರಸ್ತಾಪ ಮಾಡಿದಕ್ಕೆ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು. ಸಚಿವರು ಜನರ ಬೇಡಿಕೆಗಳನ್ನು ತಿಳಿದುಕೊಂಡು ಹೇಳಿಕೆಗಳನ್ನು ನೀಡುವುದು ಸೂಕ್ತ ಎಂದು ಹಲವರು ಒತ್ತಾಯಿಸಿದರು.
ಜುಲೈ 30 ರಂದು ನಡೆಯುವ ವಿಧಾನಸಭಾ ಅಧಿವೇಶನದ ಮುಂಗಡ ಪತ್ರದಲ್ಲಿ ಡಾ. ಪರಮಶಿವಯ್ಯನವರ ವರದಿಯಾಧಾರಿತ ನೀರಾವರಿ ಯೋಜನೆ ಅನುಷ್ಠಾನದ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ನೀರನ್ನು ಪೈಪ್ಲೈನ್ ಮೂಲಕ ಹರಿಸುವ ಹೇಳಿಕೆಯನ್ನು ಹಿಂದಕ್ಕೆ ತೆಗೆದುಕೊಂಡು ಕಾಲುವೆಗಳ ಮೂಲಕ ನೀರನ್ನು ಹರಿಸುವ ಘೋಷಣೆ ಮಾಡಬೇಕು. ಒಂದು ವೇಳೆ ಕೆಲ ಪಟ್ಟಭದ್ರಾ ಹಿತಾಸಕ್ತಿಗಳ ಒತ್ತಡಕ್ಕೆ ಮಣಿದು ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಬಯಲು ಸೀಮೆಯ ಜಿಲ್ಲೆಯ ಜನರ ದಿಕ್ಕು ತಪ್ಪಿಸಲು ಕಣ್ಣೊರೆಸುವ ತಂತ್ರವನ್ನು ಅನುಸರಿಸಿದರೆ ಗ್ರಾಮ ಮಟ್ಟದಿಂದಲೇ ಜನಾಂದೋಲನದ ರೀತಿಯಲ್ಲಿ ಅನಿವಾರ್ಯವಾಗಿ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯರೆಡ್ಡಿ, ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ಯಲುವಹಳ್ಳಿ ರಮೇಶ್, ಶಂಕರಪ್ಪ, ರೈತ ಮುಖಂಡರು, ನಾನಾ ಪ್ರಗತಿಪರ ಸಂಘಟನೆಗಳ ಮುಖಂಡರು ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

