ಕೋಲಾರ

ರಮೇಶ್‌ಕುಮಾರ್‌ಗೆ ಸಚಿವ ಸ್ಥಾನ ನೀಡಲು ರೈತ ಸಂಘ ಆಗ್ರಹ

Published On :

ಕ.ಪ್ರ. ವಾರ್ತೆ ಕೋಲಾರ ಜೂ.26
ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲೆಯವರನ್ನೇ  ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕೆಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಬಣದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಗ್ರಹಿಸಿದ್ದಾರೆ.
ಶ್ರೀನಿವಾಸಪುರದಲ್ಲಿ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಸಮಸ್ಯೆಗಳನ್ನು ಅರಿತಿರುವ ಹಿರಿಯ ರಾಜಕಾರಣಿ ಕೆ.ಆರ್.ರಮೇಶ್‌ಕುಮಾರ್ ಅವರಿಗೆ ಸರ್ಕಾರದಲ್ಲಿ ಮಂತ್ರಿ ಸ್ಥಾನ ಕೊಟ್ಟು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದಲ್ಲಿ ರೈತರಿಗೆ, ಬಡವರಿಗೆ ಹಾಗೂ ಶೋಷಿತ ಸಮುದಾಯಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಬಗ್ಗೆ ಸರ್ಕಾರ ತೋರುತ್ತಿರುವ ಮಲತಾಯಿ ಧೋರಣೆ ನಿಲ್ಲಬೇಕು. ಜಿಲ್ಲೆಯವರನ್ನೇ ಉಸ್ತುವಾರಿ ಸಚಿವರನ್ನಾಗಿ ಮಾಡಲು ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ನಾಯಕರು ದಿಟ್ಟ ನಿರ್ಧಾರ ಕೈಗೊಳ್ಳದಿದ್ದರೆ  ಜಿಲ್ಲಾದ್ಯಂತ ರೈತ ಸಂಘದಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಜಿಲ್ಲೆ ಸತತ ಬರಗಾಲದಿಂದ ತತ್ತರಿಸಿದೆ. ಇಲ್ಲಿ ಸರ್ಕಾರದ ಯಾವುದೇ ಯೋಜನೆಗಳು ಅನುಷ್ಠಾನಗೊಳ್ಳುತ್ತಿಲ್ಲ. ಯೋಜನೆಗಳಿಗೆ ಬರುವ ಹಣವೆಲ್ಲ ಗುತ್ತಿಗೆದಾರರ ಮತ್ತು ಅಧಿಕಾರಿಗಳ ಪಾಲಾಗಿ ಶೋಷಣೆಗೊಳಪಡುತ್ತಿದೆ. ಜಿಲ್ಲೆ ಹಿಂದುಳಿಯಲು ಜನಪ್ರತಿನಿಧಿಗಳ ಮತ್ತು ಸರ್ಕಾರಗಳ ಬೇಜವಾಬ್ದಾರಿಯೇ ಕಾರಣವಾಗಿರುವುದರಿಂದ ಕಾಂಗ್ರೆಸ್ ಸರ್ಕಾರವಾದರೂ ಜನತೆಯ ನೋವು-ನಲಿವುಗಳಿಗೆ ಸ್ಪಂದಿಸಬೇಕೆಂದು ಹೇಳಿದ್ದಾರೆ.
ಇಷ್ಟಲ್ಲಾ ಸಮಸ್ಯೆಗಳು ಜಿಲ್ಲೆಯಲ್ಲಿದ್ದರೂ ಇಲ್ಲಿನ ಶಾಸಕರಿಗೆ ಸಚಿವ ಸ್ಥಾನ ಕೊಡದೇ ಜಿಲ್ಲೆಗೆ ಸಂಬಂಧವಿಲ್ಲದವರಿಗೆ ಮಂತ್ರಿ ಸ್ಥಾನ ಕೊಟ್ಟು ಉಸ್ತುವಾರಿಯಾಗಿ ನೇಮಕ ಮಾಡಿ ಜಿಲ್ಲೆಯ ಉಳಿವನ್ನೇ ರಾಜ್ಯ ಭೂಪಟದಿಂದ ಕಾಣದಂತೆ ಮಾಡಲು ಷಡ್ಯಂತ್ರ ನಡೆಯುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ನಾರಾಯಣಗೌಡ, ಸಂಘಟನಾ ಸಂಚಾಲಕ ಕೆ.ಶ್ರೀನಿವಾಸಗೌಡ, ಹಸಿರು ಸೇನೆ ಜಿಲ್ಲಾಧ್ಯಕ್ಷ ಹುಲ್ಕೂರು ಹರಿಕುಮಾರ್, ವಿದ್ಯಾರ್ಥಿ ಮುಖಂಡ ಹೂಹಳ್ಳಿ ನಾಗರಾಜ್, ಮುಖಂಡರಾದ ತೇರ್ನಹಳ್ಳಿ ಆಂಜಿನಪ್ಪ, ವೆಂಕಿ, ಮೂರಾಂಡಹಳ್ಳಿ ಶಿವಾರೆಡ್ಡಿ, ಐತಂಡಹಳ್ಳಿ ಉದಯ್, ಮರಗಲ್ ಶ್ರೀನಿವಾಸ್,ನೀಲಕಂಠಪುರ ಮುನೇಗೌಡ, ಕೆಂಬೋಡಿ ಕೃಷ್ಣೇಗೌಡ, ಮಾಸ್ತಿ ಬಾಬು, ಗೊಟ್ಟಿಕುಂಟೆ ಕೃಷ್ಣ, ರಂಜಿತ್‌ಕುಮಾರ್,ಅಚಂಪಲ್ಲಿ ಗಂಗಾಧರ್, ನೀಲ್ಟೂರು ರಮೇಶ್, ಈಕಂಬಳ್ಳಿ ಮಂಜುನಾಥ್ ಹಾಗೂ ಕಾರಿ ವಿಶ್ವನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.