ಕೋಲಾರ

ನ್ಯಾಯಸಮ್ಮತ ಚುನಾವಣೆಗೆ ತಂಡಗಳ ರಚನೆ: ಜಿಲ್ಲಾಧಿಕಾರಿ

Published On :

ಕೋಲಾರ: ಮೇ 5 ರಂದು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆ ನ್ಯಾಯ ಸಮ್ಮತ ಮತ್ತು ಪಾರದರ್ಶಕವಾಗಿ ನಡೆಯುವಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ ಹಲವಾರು ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಡಿ.ಎಸ್. ವಿಶ್ವನಾಥ್ ತಿಳಿಸಿದರು.
ಅವರು ಮಂಗಳವಾರ ಜಿಪಂ ಸಭಾಂಗಣದಲ್ಲಿ ಚುನಾವಣಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳಿಗೆ ಏರ್ಪಡಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಶಾಲಾ ಮಾಸ್ಟರ್ ರೀತಿಯಲ್ಲಿ ಚುನಾವಣಾ ಸಿಬ್ಬಂದಿಗೆ ಪಾಠ ಮಾಡಿದ ಜಿಲ್ಲಾಧಿಕಾರಿಗಳು ಚುನಾವಣಾ ನೀತಿ ಸಂಹಿತೆ, ಮುಕ್ತ ಚುನಾವಣೆಗಾಗಿ ಚುನಾವಣಾ ಆಯೋಗವು ನೀಡಿರುವ ಮಾರ್ಗಸೂಚಿಗಳ ಕುರಿತು ತಿಳಿವಳಿಕೆ ಮೂಡಿಸಿದರು.
ಸದಾಚಾರ ಸಂಹಿತೆಯನ್ನು ಎಲ್ಲಾ ಸಂಚಾರಿ ಜಾಗೃತದಳದವರು ವ್ಯಾಪಕವಾಗಿ ಪ್ರವಾಸ ಕೈಗೊಂಡು ಗ್ರಾಮ ಪಂಚಾಯಿತಿ ಮಟ್ಟದಿಂದ ತಾಲೂಕು ಮಟ್ಟದಲ್ಲಿರುವ ಎಲ್ಲಾ ಸರ್ಕಾರದ ಜಾಹೀರಾತು ಬೋರ್ಡ್‌ಗಳನ್ನು ತೆಗೆಯುವಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅವರ ವ್ಯಾಪ್ತಿಯಲ್ಲಿ ಬರುವ ಸರ್ಕಾರದ ಜಾಹೀರಾತು ಫಲಕಗಳು ಸೇರಿದಂತೆ ಎಲ್ಲಾ ವ್ಯಕ್ತಿಗಳ ಅಭಿನಂದನೆ ಫಲಕಗಳನ್ನು ತೆಗೆಯುವಂತೆ ಕ್ರಮ ಕೈಗೊಳ್ಳಬೇಕೆಂದರು.
ಚುನಾವಣೆ ಪಾರದರ್ಶಕವಾಗಿರಲು ವಿಡಿಯೋ ಸರ್ವಿಲೆನ್ಸ್‌ತಂಡ, ವಿಡಿಯೋ ವೀಕ್ಷಣಾ ತಂಡ, ಲೆಕ್ಕಪತ್ರ ತಂಡ, ವೆಚ್ಚ ಮತ್ತು ಕಂಟ್ರೋಲ್ ರೂಂ, ಕಾಲ್ ಸೆಂಟರ್, ಮಾಧ್ಯಮ ದೃಢೀಕರಣ ಮತ್ತು ಉಸ್ತುವಾರಿ ತಂಡ, ಸಂಚಾರಿ ನಿಗ್ರಹ ತಂಡಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳು ವಿವರಿಸಿದರು. ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಮಾತನಾಡಿ ಯಾವುದೇ ರೀತಿಯಲ್ಲಿ ಚುನಾವಣಾ ಅಕ್ರಮ ನಡೆಯದಂತೆ ಎಚ್ಚರವಹಿಸಬೇಕೆಂದು ಸೂಚಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎಂ. ಜುಲ್ಫಿಖಾರ್ ಉಲ್ಲಾ ಮಾತನಾಡಿದರು. ಜಿಲ್ಲಾ ರಕ್ಷಣಾಧಿಕಾರಿ ರಾಮ್ ನಿವಾಸ್ ಸಫೆಟ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬದನೂರು ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಪೆದ್ದಪ್ಪಯ್ಯ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.