ಮಹಿಳಾ ಕಾಲೇಜು ಅಭಿವೃದ್ಧಿಗೆ ಕೇಂದ್ರಕ್ಕೆ ರು. 68 ಕೋಟಿ ಪ್ರಸ್ತಾವ
ಕ.ಪ್ರ.ವಾರ್ತೆ ಕೋಲಾರ ನ.6
ನಗರದ ಸರ್ಕಾರಿ ಮಹಿಳಾ ಕಾಲೇಜಿನ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಗೆ 68 ಕೋಟಿ ರು.ಗಳ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪೊ.ನಂದವಾಡಗಿ ಪ್ರಕಟಿಸಿದರು.
ಉಡುಪಿ ಮತ್ತು ಕುಂದಾಪುರದ ದಾನಿಗಳು ಸರ್ಕಾರಿ ಮಹಿಳಾ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯರಿಗೆ ನೀಡಿರುವ ಸಮವಸ್ತ್ರಗಳ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕೇಂದ್ರ ಸರ್ಕಾರ ಉನ್ನತ ಶಿಕ್ಷಣಕ್ಕಾಗಿ ತನ್ನ ಬಜೆಟ್ನಲ್ಲಿ 99 ಸಾವಿರ ಕೋಟಿ ರು.ಗಳನ್ನು ಮೀಸಲಿಟಿದೆ. ಈ ಹಣದಲ್ಲಿ ಕನಿಷ್ಠ 68 ಕೋಟಿ ರು.ಗಳನ್ನು ನಮ್ಮ ಕಾಲೇಜಿನ ಸಮಗ್ರ ಅಭಿವೃದ್ಧಿಗಾಗಿ ಪಡೆಯುವ ಉದ್ದೇಶದಿಂದ ಐದು ವರ್ಷಗಳಲ್ಲಿ ಕಾಲೇಜಿನ ಅಭಿವೃದ್ಧಿಗಾಗಿ ರೂಪಿಸಿರುವ ಯೋಜನೆಗಳ ಮಾಹಿತಿಯನ್ನು ಒಳಗೊಂಡ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.
ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯು ನಮ್ಮ ಪ್ರಸ್ತಾವನೆ ಅಂಗೀಕರಿಸಿ ಅನುದಾನ ಬಿಡುಗಡೆ ಮಾಡಿದಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಮಾಡಲಾಗುವುದು. ಪ್ರತಿಯೊಂದು ವಿಭಾಗಕ್ಕೆ ಪ್ರತ್ಯೇಕ ಶೌಚಾಲಯಗಳು, ಪ್ರಾಯೋಗಾಲಯ, ಕ್ಯಾಂಟೀನ್ ಸೌಲಭ್ಯ, ಉಪನ್ಯಾಸಕರ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ, ಡಿಜಿಟೆಲ್ ಗ್ರಂಥಾಲಯ, ದೊಡ್ಡದೊಂದು ಸಭಾಂಗಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ವಿವರಿಸಿದರು.
ಕೇಂದ್ರ ಸರ್ಕಾರ ಉನ್ನತ ಶಿಕ್ಷಣ ನೀಡುವ ವಿದ್ಯಾ ಸಂಸ್ಥೆಗಳ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಅಖಿಲ ಭಾರತ ಮಟ್ಟದಲ್ಲಿ ಉಚ್ಚತಮ ಶಿಕ್ಷಣ ಅಭಿಯಾನ(ರೂಸಾ)ಜಾರಿಗೆ ತಂದಿದೆ. ಈ ಯೋಜನೆಯಡಿ ಕೋಲಾರದ ಸರ್ಕಾರಿ ಮಹಿಳಾ ಕಾಲೇಜಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು 68 ಕೋಟಿ ರು. ಕೇಳಿದ್ದೇವೆ. ಕೇಂದ್ರ ಸರ್ಕಾರ ನಾವು ಕಳುಹಿಸಿರುವ ಪ್ರಸ್ತಾವನೆಗೆ ಒಪ್ಪಿದಲ್ಲಿ ಕಾಲೇಜಿಗೆ ಬಂಪರ್ ಕೊಡುಗೆ ಸಿಗುತ್ತದೆ ಎಂದು ತಿಳಿಸಿದರು.
ಮಹಿಳಾ ಸಮಾಜದ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಉಷಾ ಗಾಂಗಾಧರ್, ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ. ರಾಮರಾಜು, ನಗರಸಭೆ ಸದಸ್ಯ ಎಂ.ಬಿ. ಮುಬಾರಕ್, ವಿದ್ಯಾರ್ಥಿ ಮುಖಂಡ ಸುರೇಶ್ಗೌಡ, ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಡುಪಲ್ಲಿ ಕೃಷ್ಣಮೂರ್ತಿ,ವಾಣಿಜ್ಯ ವಿಭಾಗದ ಮುಖ್ಯಸ್ಥ ಆಂಜನಪ್ಪ ಇದ್ದರು. ಕಾಲೇಜಿನ ಉಪನ್ಯಾಸಕಿ ಹೇಮಮಾಲಿನಿ ನಿರೂಪಿಸಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

