ಕೋಲಾರ

ರೈತರು, ಕಾರ್ಮಿಕರ ಬೇಡಿಕೆಗಳಿಗೆ ಆಗ್ರಹಿಸಿ ಇಂದಿನಿಂದ ಅಹೋರಾತ್ರಿ ಧರಣಿ

Published On :

ಚಿಕ್ಕಬಳ್ಳಾಪುರ: ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನ.7 ಮತ್ತು 8 ರಂದು ಅಹೋರಾತ್ರಿ ಧರಣಿ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಗೋಪಿನಾಥ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರ ಪರ ನೀತಿಗಳನ್ನು ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿ ಖಾಸಗೀ ಕಂಪನಿಗಳಿಗೆ ಮತ್ತು ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ವರ್ತಿಸುತ್ತಿವೆ.ಎಲ್ಲೆಡೆ ರೈತರು ಸರ್ಕಾರಗಳ ನೀತಿಯಿಂದ ಕೃಷಿ ಚಟುವಟಿಕೆಗಳಿಂದ ದೂರ ಉಳಿಯುತ್ತಿದ್ದಾರೆ. ಇದರಿಂದ ರೈತರು ಮತ್ತು ಕೃಷಿ ಕೂಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸರ್ಕಾರಗಳ ಗಮನ ಸೆಳೆಯಲು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ರಾಜ್ಯ ಸಂಘ ತೀರ್ಮಾನಿಸಿದ್ದು ಅದರಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನ.7 ಮತ್ತು 8ರಂದು ನಿರಂತರ 48 ಗಂಟೆಗಳ ಅಹೋ ರಾತ್ರಿ ಧರಣಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ರೈತರು ಬೆಳೆದಂತಹ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಅಲ್ಲದೇ ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬೀದಿಪಾಲು ಮಾಡಲಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಬಗರ್ಹುಕುಂ ಅರಣ್ಯ ಭೂಮಿ ಹಕ್ಕಿಗಾಗಿ, ಬಡವರಿಗೆ ಉಚಿತ ಮನೆ ನಿವೇಶನಕ್ಕಾಗಿ, ಶಾಶ್ವತ ನೀರಾವರಿ ಕುಡಿಯುವ ನೀರು, ಉದ್ಯೋಗ ಖಾತ್ರಿ, ಸ್ವಾಮಿನಾಥನ್ಸ್ಲಹೆಯಂತೆ ಬೆಂಬಲ ಬೆಲೆಗಾಗಿ, ಸುಗ್ಗಿ ಪೂರ್ವವೇ ಸರ್ಕಾರಿ ಖರೀದಿ ಕೇಂದ್ರ ತೆರೆಯಲು ಹಾಗೂ ಮತ್ತಿತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.
ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದ ಜನತೆ ಅತ್ಯಂತ ಸಂಕಷ್ಟದಲ್ಲಿರುವಾಗಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೇವಲ ಮೇಲ್ನೋಟಕ್ಕೆ ರೈತರು, ಕೂಲಿಕಾರರ ಪರ ಇರುವಂತೆ ಬಿಂಬಿಸಿಕೊಂಡು ರೈತರ ವಿರೋಧಿ ಹಾಗೂ ದೇಶ ವಿದೇಶಗಳ ದೊಡ್ಡ ಬಂಡವಾಳದಾರರು, ಭೂಮಾಲೀಕರು ಮತ್ತು ಶ್ರೀಮಂತರ ಪರವಾಗಿ ಜಾಗತೀಕರಣದ ನೀತಿಗಳನ್ನು ರೂಪಿಸುತ್ತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡ ಬಿ.ಎನ್. ಮುನಿಕೃಷ್ಣಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.