'ಆರೋಗ್ಯ ಶಿಬಿರಗಳು ಹೆಚ್ಚಿಗೆ ನಡೆಯಲಿ'
ಚಿಕ್ಕಬಳ್ಳಾಪುರ: ಪ್ರಸ್ತುತ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹೆಚ್ಚಿಗೆ ಹಮ್ಮಿಕೊಳ್ಳಬೇಕಾದ ಅವಕಶ್ಯತೆಯಿದ್ದು ಜನರ ಆರೋಗ್ಯ ದೃಷ್ಟಿಯಿಂದ ಸ್ವಯಂ ಸೇವಾ ಸಂಸ್ಥೆಗಳು ಇಂತಹ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಬೇಕೆಂದು ಕೆ.ವಿ. ಮತ್ತು ಪಂಚಗಿರಿ ಶಿಕ್ಷಣ ದತ್ತಿಗಳ ಅಧ್ಯಕ್ಷ ಕೆ.ವಿ. ನವೀನ್ ಕಿರಣ್ ಸಲಹೆ ನೀಡಿದರು.
ನಗರದ ಪಂಚಗಿರಿ ಬೋಧನಾ ಪ್ರೌಢಶಾಲೆಯಲ್ಲಿ ಸಾಯಿಚರಣ್ ಟ್ರಸ್ಟ್ ಹಾಗೂ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆಯ ಆಶ್ರಯದಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತಾನಾಡಿದರು.
ಜೀವನದಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯವೇ ಪ್ರಮುಖವಾದುದು. ಇದರಿಂದ ಉತ್ತಮ ಆರೋಗ್ಯ ಕಾಪಾಡಿಕೊಂಡಾಗ ಸುಖಕರ ಜೀವನ ನಡೆಸಲು ಸಾಧ್ಯವಾಗುತ್ತದೆ. ಆದರೆ, ಬಡವರು ಆರ್ಥಿಕ ಸಮಸ್ಯೆಗಳಿಂದ ಆರೋಗ್ಯದ ಕಡೆಗೆ ಗಮನ ಕೊಡಲು ಸಾಧ್ಯವಾಗುವುದಿಲ್ಲ. ಅಲ್ಲದೇ ಚಿಕಿತ್ಸೆ ಪಡೆಯಲು ಆರ್ಥಿಕ ಶಕ್ತಿಯಿಲ್ಲದೇ ತೊಂದರೆ ಅನುಭವಿಸುತ್ತಾರೆ. ಈ ನಿಟ್ಟಿನಲ್ಲಿ ಉಳ್ಳವರು ಆರ್ಥಿಕವಾಗಿ ಹಿಂದುಳಿದ ಜನರಿಗೆ ಅಗತ್ಯವಿರುವ ನೆರವು ನೀಡಲು ಮುಂದಾಗಬೇಕು. ಹೆಚ್ಚಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಮಾಡಿಕೊಡಬೇಕೆಂದ ಅವರು, ವಿದ್ಯಾ ದಾನ, ರಕ್ತದಾನದ ಜತೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮಗಳು ಹೆಚ್ಚಿನ ಮಹತ್ವ ಹೊಂದಿದೆ ಎಂದರು.
ಶಿಬಿರ ಉದ್ಘಾಟಿಸಿ ಮಾತನಾಡಿದ ಕೋಲಾರದ ದೇವರಾಜ್ ಅರಸ್ ಮೆಡಿಕಲ್ ಕಾಲೇಜಿನ ಕಾರ್ಯದರ್ಶಿ ಜಿ.ಎಚ್. ನಾಗರಾಜ್, ಗ್ರಾಮೀಣ ಭಾಗದ ಜನರಿಗೆ ಅಗತ್ಯವಿರುವ ಆರೋಗ್ಯ ಸೇವೆ ದೊರೆಯುತ್ತಿಲ್ಲ. ಬದಲಿಗೆ ಇಂದಿನ ದಿನಗಳಲ್ಲೂ ಮೌಢ್ಯತೆ ಬೆಳೆಸಿಕೊಂಡು ಜನರು ಕೊನೆಗೆ ದೊಡ್ಡ ಸಮಸ್ಯೆ ತಂದುಕೊಳ್ಳುತ್ತಿದ್ದಾರೆ. ಇದನ್ನು ದೂರ ಮಾಡಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನೂ ಕೈಗೊಳ್ಳಬೇಕೆಂದು ಸಲಹೆ ನೀಡಿದರು.
ಸಾಯಿ ಚರಣ್ ಟ್ರಸ್ಟ್ ಪ್ರಧಾನ ಪೋಷಕ ಬಿ.ಎ. ಲೋಕೇಶ್ ಕುಮಾರ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ. ಆಂಜಿನಪ್ಪ ಭಾಗವಹಿಸಿದ್ದರು. ಸಂಜೀವಿನಿ ಆಸ್ಪತ್ರೆಯ ಮಕ್ಕಳ ತಜ್ಞ ಸುಭಾಷ್ ಕುಮಾರ್ ರೆಡ್ಡಿ, ವೈದ್ಯರಾದ ಪ್ರೇಮಲತಾ, ಹನುಮಂತ ರಾಜು,ವಾಸುದೇವ್ ಪ್ರಭು, ಋತ್ವಿಕ್, ಅನಿತಾ ಹಾಗೂ ಪಂಚಗಿರಿ ಭೋಧನಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎಂ. ಉಷಾಮಕರಂದಂ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

