'ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ನಮೋ ಪ್ರಧಾನಿಯಾಲಿ'
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ನ. 10
ಕೇಂದ್ರ ಯುಪಿಎ ಸರ್ಕಾರ ನೀಡಿರುವ ಭ್ರಷ್ಟಾಚಾರ, ಹಗರಣ ಮತ್ತು ಜನ ವಿರೋಧಿ ಆಡಳಿತದಿಂದ ದೇಶವನ್ನು ಮುಕ್ತಗೊಳಿಸಲು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಪ್ರಧಾನಮಂತ್ರಿಯನ್ನಾಗಿಸಬೇಕೆಂದು ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮುನಿರಾಜು ತಿಳಿಸಿದರು.
ನಗರದ ಚೆನ್ನಕೇಶವ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಜನಪರ ಆಡಳಿತ ನೀಡುತ್ತೇವೆ ಎಂದೇಳಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಕಾಂಗ್ರೆಸ್ ನೇತೃತ್ವದ ಕೇಂದ್ರದ ಯುಪಿಎ ಸರ್ಕಾರ ಜನ ವಿರೋಧಿ ಆಡಳಿತವನ್ನು ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಸಾಲು ಸಾಲು ಹಗರಣಗಳು ದೇಶದಲ್ಲಿ ನಡೆದಿದ್ದಲ್ಲದೇ ಭ್ರಷ್ಟಾಚಾರದಿಂದ ಜನರ ಕೋಟ್ಯಂತರ ರು.ಗಳನ್ನು ಲೂಟಿ ಮಾಡಲಾಯಿತು. ಇದರ ಜತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸಲು ಪರದಾಡಬೇಕಾದ ವಾತಾವರಣವನ್ನು ನಿರ್ಮಾಣ ಮಾಡಿದ್ದು ಇದೀಗ ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಸುಳ್ಳು ಮಾತುಗಳ ಮೂಲಕ ತಮ್ಮ ದುರಾಡಳಿತವನ್ನು ಮರೆಮಾಚಿ ಜನರ ಒಲವು ಪಡೆದುಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಈಗ ದೇಶದಲ್ಲಿ ನರೇಂದ್ರ ಮೋದಿ ಅಲೆ ಎಲ್ಲೆಡೆ ಕಂಡು ಬರುತ್ತಿದೆ. ಭವಿಷ್ಯದಲ್ಲಿ ಭಾರತ ದೇಶ ಸರ್ವಾಂಗೀಣ ಪ್ರಗತಿಯನ್ನು ಕಂಡು ವಿಶ್ವದಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ರೂಪುಗೊಳ್ಳಲು ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂಬ ಆಶಯ ವ್ಯಕ್ತವಾಗುತ್ತಿದೆ. ಇದಕ್ಕೆ ಪೂರಕವಾಗಿ ಮೋದಿಯವರು ಹಮ್ಮಿಕೊಳ್ಳುತ್ತಿರುವ ಸಮಾವೇಶಗಳಲ್ಲಿ ಜನರೇ ಸ್ವಯಂ ಪ್ರೇರಣೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸುತ್ತಿದ್ದಾರೆ. ಇದು ಸಹಜವಾಗಿ ಕೇಂದ್ರ ಯುಪಿಎ ಸರ್ಕಾರವನ್ನು ಕಂಗೆಡೆಸಿದೆ. ಇದರಿಂದ ಅದು ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಕಾರ್ಯಕರ್ತರು ಸಂಘಟಿತರಾಗಿ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು. ಗುಜರಾತಿನಲ್ಲಾದ ಅಭಿವೃದ್ಧಿಯ ಬಗ್ಗೆ ಜನರಿಗೆ ತಿಳಿಸಿ ಮೋದಿಯವರ ಹೆಚ್ಚಿಗೆ ಬೆಂಬಲ ಸಿಗುವಂತೆ ಮಾಡಬೇಕೆಂದು ಕರೆ ನೀಡಿದರು.
ಬೃಹತ್ ರ್ಯಾಲಿ: ಇದಕ್ಕೂ ಮುನ್ನ ಯುವ ಮೋರ್ಚಾ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿದರು. ಜೊತೆಗೂಡಿ ಕಟ್ಟೋಣ ಬನ್ನಿ.. ನವಭಾರತ ದೇಶವನ್ನು, ನರೇಂದ್ರ ಮೋದಿಯಿಂದ ಮಾತ್ರ ದೇಶದ ಅಭಿವೃದ್ಧಿ ಎಂದು ಕೂಗುತ್ತಾ ಹೊರಟರು. ನಗರದ ಶ್ರೀ ಶನಿಮಹಾತ್ಮ ಸ್ವಾಮಿ ದೇವಸ್ಥಾನದಿಂದ ರ್ಯಾಲಿ ಪ್ರಾರಂಭಿಸಿ ಬಜಾರ್ ರಸ್ತೆ, ಗಂಗಮ್ಮನಗುಡಿ, ಎಂ.ಜಿ. ರಸ್ತೆ, ಬಿ.ಬಿ. ರಸ್ತೆಯಲ್ಲಿ ಸಾಗಿದರು.
ನ.17 ರಂದು ಬೆಂಗಳೂರಿನಲ್ಲಿ ನಡೆಯುವ ಭಾರತವನ್ನು ಗೆಲ್ಲಿಸಿ ಸಮಾವೇಶದಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರ ಮೂಲಕ ಮೋದಿಯವರಿಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಉಪಾಧ್ಯಕ್ಷ ತಮ್ಮೇಶ್ ಗೌಡ, ಚೌಡರೆಡ್ಡಿ, ಕಿರಣ್ ಕುಮಾರ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

