ಕಚೇರಿ ಸ್ಥಳಾಂತರ ವಿರೋಧಿಸಿ ಪ್ರತಿಭಟನೆ
ಬಾಗೇಪಲ್ಲಿ: ಉಪನೋಂದಣಾಧಿಕಾರಿಗಳ ಕಚೇರಿಯನ್ನು ಸ್ಥಳಾಂತರಿಸುತ್ತಿರುವುದನ್ನು ವಿರೋಧಿಸಿ ಕರವೇ ಕಾರ್ಯಕರ್ತರು ಎಚ್ಎನ್ ವೃತ್ತದಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಬಂದು ಮಿನಿ ವಿಧಾನ ಸೌಧ ಆವರಣದ ಸಬ್ ರಿಜಿಸ್ಟರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿ ಮಾತನಾಡಿದ ಕರವೇದಿ ತಾಲೂಕು ಸಮಿತಿಯ ಅಧ್ಯಕ್ಷ ಕೆ.ಎನ್. ಹರೀಶ್, ಉಪನೋಂದಣಾಧಿಕಾರಿಗಳ ಕಚೇರಿಯನ್ನು ಮಿನಿ ವಿಧಾನಸೌಧ ಆವರಣದಿಂದ ಪಟ್ಟಣದ ಹೊರವಲಯಕ್ಕೆ ಸ್ಥಳಾಂತರ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿದರು.
ಮಿನಿವಿಧಾನಸೌಧ ಆವರಣದಲ್ಲಿರುವ ಉಪನೋಂದಣಾಧಿಕಾರಿಗಳ ಕಚೇರಿಯನ್ನು ಪಟ್ಟಣದ ಹೊರವಯದ ಘಂಟಂವಾರಿಪಲ್ಲಿ ಗ್ರಾಪಂ ವ್ಯಾಪ್ತಿ ಪ್ರದೇಶಕ್ಕೆ ಸ್ಥಳಾಂತರಿಸಲು ಅಧಿಕಾರಿಗಳು ಚಿಂತನೆ ನಡೆಸುತ್ತಿರುವುದು ಗಮನಕ್ಕೆ ಬಂದಿದ್ದು ಕಚೇರಿ ಸ್ಥಳಾಂತರಗೊಂಡರೆ ಹತ್ತಾರು ರುಪಾಯಿ ಖರ್ಚು ಮಾಡಿ ಸಾರ್ವಜನಿಕರು ಆಟೋಗಳಲ್ಲಿ ಹೋಗಲು ವ್ಯಯ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದರು.
ಜಮೀನು ಒತ್ತುವರಿ ತೆರವಿಗೆ ನಾಮಫಲಕ
ಟೇಕಲ್: ಯಲುವಹಳ್ಳಿ ಗ್ರಾಮದ ರೈತ ನಾರಾಯಣಸ್ವಾಮಿಯ ಸತತ 14 ವರ್ಷದ ಪ್ರಯತ್ನದ ಸರ್ವೇ ನಂ. 70 ರಲ್ಲಿ ಸರ್ಕಾರಿ ಜಮೀನು ಒತ್ತುವರಿಯಾಗಿರುವುದನ್ನು ತೆರವುಗೊಳಿಸಿ ನಾಮಫಲಕ ಹಾಕುವ ಹಿನ್ನಲೆಯಲ್ಲಿ ಇದೇ 8 ರಂದು ಸಮಯ ನಿಗಧಿಪಡಿಸಲಾಗಿತ್ತು. ಕಾರಣಾಂತರಗಳಿಂದ ಇದೇ ತಿಂಗಳ 12 ರ ಬೆಳಿಗ್ಗೆ 7 ಗಂಟೆಗೆ ಒತ್ತುವರಿ ತೆರವುಗೊಳಿಸಿ ನಾಮಫಲಕ ಹಾಕಲಾಗುತ್ತದೆ ಎಂದು ಮಾಲೂರು ತಹಸೀಲ್ದಾರ್ ಕಚೇರಿ ಮೂಲಗಳು ತಿಳಿಸಿವೆ.
ಇಂದು ಸಭೆ
ಕೋಲಾರ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿಗೆ ಇದೇ ನ.15 ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಪೂರ್ವಸಿದ್ಧತೆಯ ಬಗ್ಗೆ ಚರ್ಚಿಸಲು ನ.13 ರಂದು ಮಧ್ಯಾಹ್ನ 12.30 ಗಂಟೆ ಕೋಲಾರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು ಅಧಿಕಾರಿಗಳು ಹಾಜರಾಗಿ ಸಲಹೆ ಸೂಚನೆ ನೀಡಿ ಚುನಾವಣೆಯನ್ನು ಯಶಸ್ವಿಗೊಳಿಸಲು ಸಹಕಾರ ನೀಡಬೇಕೆಂದು ಡಿಸಿಸಿ ಬ್ಯಾಂಕ್ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಜಾನುವಾರು ಸಂತೆ ರದ್ದು
ಚಿಂತಾಮಣಿ: ಜಾನುವಾರುಗಳನ್ನು ಭಾನುವಾರ ಸಂತೆಗೆ ತರದಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ನಾಗರಾಜ್ ರೈತರಲ್ಲಿ ಮನವಿ ಮಾಡಿದ್ದಾರೆ. ತಾಲೂಕಿನಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಜ್ವರ ಹರಡಿದ್ದು, ರೋಗ ನಿಯಂತ್ರಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಆದೇಶ ಅನ್ವಯ ಜಾನುವಾರು ಸಂತೆಗಳನ್ನು ಮುಂದಿನ ಪ್ರಕಟನೆ ಹೊರಡಿಸುವ ವರೆಗೆ ರದ್ದು ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

