ಸಂಪುಟದಿಂದ ಸಂತೋಷ್ ಲಾಡ್ ವಜಾಗೆ ಆಗ್ರಹ
ಕ.ಪ್ರ.ವಾರ್ತೆ , ಕೋಲಾರ , ನ.13
ವಿರೋಧ ಪಕ್ಷದಲ್ಲಿದ್ದಾಗ ಬಿಜೆಪಿ ಸರ್ಕಾರ ಗಣಿ ಹಗರಣದಲ್ಲಿ ಮುಳುಗಿದೆ ಎಂದು ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದ ಸಿದ್ದರಾಮಯ್ಯನವರು ಈಗ ತಮ್ಮದೇ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿರುವ ಸಂತೋಷ್ ಲಾಡ್ ಮೇಲೆ ಗಣಿ ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಆರೋಪಗಳಿದ್ದರೂ ಕ್ರಮ ಕೈಗೊಳ್ಳದೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಮುನಿರಾಜು ಕಿಡಿಕಾರಿದರು.
ನಗರದಲ್ಲಿ ಬುಧವಾರ ಜಿಲ್ಲಾ ಯುವ ಮೋರ್ಚಾದಿಂದ ಹಮ್ಮಿಕೊಂಡಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿ, ಭ್ರಷ್ಟಾಚಾರದ ಬಗ್ಗೆ ಸಿದ್ದರಾಮಯ್ಯನವರಿಗೆ ಮಾತನಾಡಲು ನೈತಿಕತೆ ಇಲ್ಲ, ನಿಜಕ್ಕೂ ಮುಖ್ಯಮಂತ್ರಿಗಳು ಪ್ರಾಮಾಣಿಕರೇ ಆಗಿದ್ದಲ್ಲಿ ಗಣಿ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಸಚಿವ ಸಂತೋಷ್ ಲಾಡ್ ಅವರನ್ನು ವಿಚಾರಣೆ ಮುಗಿಯುವ ತನಕ ಸಚಿವ ಸಂಪುಟದಿಂದ ಕೈಬಿಟ್ಟು ತಾವೊಬ್ಬ ಆದರ್ಶ ರಾಜಕಾರಣಿ ಅನಿಸಿಕೊಳ್ಳುತ್ತಿದ್ದರೆಂದು ತಿಳಿಸಿದರು.
ಬೈಕ್ ರ್ಯಾಲಿ: ಸಚಿವ ಸಂತೋಷ್ ಲಾಡ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಯುವ ಮೋರ್ಚಾ ಬೆಂಗಳೂರಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿನಿಧಿಸುತ್ತಿರುವ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲು ನಿರ್ಧರಿಸಿದ್ದು ಇದಕ್ಕೆ ರಾಜ್ಯದ ಸಮಸ್ತ ಯುವಕರು ಬೆಂಬಲ ನೀಡಬೇಕೆಂದು ಕರೆ ನೀಡಿದರು.
ಶಾದಿ ಭಾಗ್ಯಕ್ಕೆ ಅಲ್ಪಸಂಖ್ಯಾತರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಆದರೂ ಮುಖ್ಯಮಂತ್ರಿಗಳು ಶಾದಿ ಭಾಗ್ಯವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆಂದು ದೂರಿದ ಮುನಿರಾಜು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಮಂದಿ ಅಭ್ಯರ್ಥಿಗಳು ಸಂಸತ್ತಿಗೆ ಆಯ್ಕೆ ಮಾಡಿ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸಬೇಕೆಂದು ಕಾರ್ಯಕರ್ತರಿಗೆ ಸೂಚಿಸಿದರು.
ಕೇಂದ್ರ ಸರ್ಕಾರ ವಿಫಲ: ಕೇಂದ್ರದ ಯುಪಿಎ ಸರ್ಕಾರದ ಹಗರಣಗಳು ಒಂದಲ್ಲ ಹತ್ತಾರು. ಜೊತೆಗೆ ದೇಶಕ್ಕೆ ಅಪಾಯ ಉಂಟು ಮಾಡುತ್ತಿರುವ ಪಾಕಿಸ್ತಾನ, ಚೀನಾ ಹಾಗೂ ಬಾಂಗ್ಲಾ ದೇಶಕ್ಕೆ ಎಚ್ಚರಿಕೆ ನೀಡುವ ಸಾಮರ್ಥ್ಯವನ್ನು ಕಳೆದುಕೊಂಡಿದೆ, ಇಂತಹ ಸರ್ಕಾರ ಮತ್ತೆ ರಚನೆಯಾದರೆ ದೇಶಕ್ಕೆ ರಕ್ಷಣೆ ಇಲ್ಲದಂತಾಗುತ್ತದೆ ಎಂದರು. ನರೇಂದ್ರ ಮೋದಿಯವರು ಅಧಿಕಾರಕ್ಕಾಗಿ ಅಥವಾ ಸ್ವಾರ್ಥ ರಾಜಕಾರಣಕ್ಕಾಗಿ ಪ್ರಧಾನಿ ಆಗಬೇಕೆಂದು ಹಂಬಲಿಸುತ್ತಿಲ್ಲ, ಜನ ಸೇವಕನಾಗಿ ಕೆಲಸ ಮಾಡುವೆ,ದೇಶದ ರಕ್ಷಣೆಗಾಗಿ ಶ್ರಮಿಸುವೆ ಎಂದು ಭರವಸೆ ನೀಡಿದ್ದಾರೆ. ನುಡಿದಂತೆ ನಡೆಯುವ ಸ್ವಭಾವಯುಳ್ಳ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡಲು ಯುವಕರು ಸಂಕಲ್ಪ ಮಾಡಬೇಕೆಂದು ತಿಳಿಸಿದರು.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದರೆ ಕೋಲಾರ ಜಿಲ್ಲೆಯ ಜನತೆ ಶಾಶ್ವತ ನೀರಾವರಿಗಾಗಿ ಪಡುತ್ತಿರುವ ಕಷ್ಟ ನಿವಾರಣೆ ಆಗುತ್ತದೆ, ನೇರಂದ್ರ ಮೋದಿ ಅಧಿಕಾರ ಹಿಡಿದಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಅವರು ಕಂಡ ಕನಸಿನಂತೆ ನದಿ ಜೋಡಣೆಯ ಯೋಜನೆ ಜಾರಿಗೆ ತಂದು ಕೋಲಾರ ಸೇರಿದಂತೆ ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ವರದಾನವಾಗಲಿದ್ದಾರೆಂದು ಹೇಳಿದರು.
ನ.17 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಮೋದಿ ರ್ಯಾಲಿಗೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪಾಲ್ಗೊಳ್ಳುವ ಮೂಲಕ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಹಕಾರ ನೀಡುವಂತೆ ಮನವಿ ಮಾಡಿದರು. ರಾಜ್ಯ ಕಾರ್ಯದರ್ಶಿ ಓಂಶಕ್ತಿ ಚಲಪತಿ ಪ್ರಸ್ತಾವಿಕವಾಗಿ ಮಾತನಾಡಿ, ಕೆಲವರು ಮಾಡಿದ ತಪ್ಪಿನಿಂದ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವುದು ಕಷ್ಟವಾಯಿತು. ಸಂಘಟನೆಯ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವುದಕ್ಕೆ ಶ್ರಮಿಸೋಣವೆಂದು ನುಡಿದರು.
ಬಿಜೆಪಿಯ ಪಾಲಿಗೆ ಇದು ಯುದ್ಧಕಾಲ. ಹಗಲು ರಾತ್ರಿ ಪಕ್ಷಕ್ಕಾಗಿ ದುಡಿಯುವ ಮೂಲಕ ನೇರಂದ್ರ ಮೋದಿಯನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ಪಣ ತೊಡಬೇಕಾಗಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ರಮೇಶ್ ಗೌಡ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಶಾಸಕಿ ವೈ. ರಾಮಕ್ಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೃಷ್ಣಾರೆಡ್ಡಿ, ಜಿಲ್ಲಾ ಉಸ್ತುವಾರಿ ಶಿವಕುಮಾರ್, ರಾಜ್ಯ ಸ್ಲಮ್ ಮೋರ್ಚಾ ಕಾರ್ಯದರ್ಶಿ ನೀಲಿ ಕೆ. ಜಯಶಂಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

