ಮಹಿಳಾ ದೌರ್ಜನ್ಯ ತಡೆಗೆ ಆಗ್ರಹಿಸಿ ಪ್ರತಿಭಟನೆ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹೆಚ್ಚಿಗೆ ನಡೆಯುತ್ತಿರುವ ಮಹಿಳಾ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕುವುದಲ್ಲದೇ ಗೌರಿಬಿದನೂರಿನ ವಿದ್ಯಾರ್ಥಿನಿ ನೇತ್ರಾ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಸಿಪಿಐ(ಎಂ) ಮುಖಂಡ ಎಂ.ಪಿ. ಮುನಿವೆಂಕಟಪ್ಪ ಆಗ್ರಹಿಸಿದರು.
ಜನವಾದಿ ಮಹಿಳಾ ಸಂಘಟನೆ, ಭಾರತ ವಿದ್ಯಾರ್ಥಿ ಫೆಡರೇಷನ್, ಅಂಗನವಾಡಿ ನೌಕರರ ಸಂಘಟನೆ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಮಾತನಾಡಿ, ಗೌರಿಬಿದನೂರಿನ ವಿದ್ಯಾರ್ಥಿನಿ ಸಾವು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದು ಮೊದಲು ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು. ನಂತರ ವಿವಿಧ ಸಂಘಟನೆಗಳು ನೇತ್ರಾಳ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದಾಗ ಆಕೆಯ ಪಕ್ಕದ ಮನೆಯ ಹುಡುಗನೊಬ್ಬನನ್ನು ಬಂಧಿಸಲಾಗಿದೆ. ಆದರೆ, ನೇತ್ರಾಳ ಸಾವಿನ ಹಿಂದೆ ಪ್ರಭಾವಿ ಮುಖಂಡರ ಮಕ್ಕಳಿದ್ದು ನಿಜವಾದ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ ಎಂದೆಲ್ಲಾ ಚರ್ಚೆಗಳಾಗುತ್ತಿ ಎಂದರು.
ಗುಡಿಬಂಡೆ ತಾಲೂಕಿನ ಚೌಟಕುಂಟಹಳ್ಳಿಯ ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮಳ ಮೇಲೆ ಆಕೆಯ ಗಂಡನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ. ಆದರೆ, ಇದನ್ನು ಆತ್ಮಹತ್ಯೆ ಪ್ರಕರಣ ಎಂದು ದಾಖಲಿಸಿಕೊಂಡಿರುವುದು ದುರಾದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಶಿವಪ್ರಸಾದ್ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇಂದು ಕನಕದಾಸರ 526ನೇ ಜಯಂತ್ಯುತ್ಸವ
ಚಿಕ್ಕಬಳ್ಳಾಪುರ: ನಗರದ ನಂದಿ ರಂಗಮಂದಿರದಲ್ಲಿ ನ.20 ರಂದು ಬೆಳಗ್ಗೆ 11.30 ಕ್ಕೆ ದಾಸಶ್ರೇಷ್ಠ ಶ್ರೀ ಕನಕದಾಸರ 526ನೇ ಜಯಂತ್ಯುತ್ಸವವನ್ನು ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದ ಪ್ರಯುಕ್ತ ಮೊದಲಿಗೆ ಬೆಳಗ್ಗೆ 10.30 ಕ್ಕೆ ಕನಕದಾಸರ ಭಾವಚಿತ್ರದ ಮೆರವಣಿಗೆ ನಗರದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ಮರಳು ಸಿದ್ದೇಶ್ವರಸ್ವಾಮಿ ದೇವಾಲಯದಿಂದ ಪ್ರಾರಂಭವಾಗಲಿದೆ.ಕಲಾ ತಂಡಗಳ ಪ್ರದರ್ಶನದೊಂದಿಗೆ ನಡೆಯಲಿರುವ ವಿವಿಧ ಇಲಾಖೆಗಳ, ಸಂಘ-ಸಂಸ್ಥೆಗಳ ಸ್ತಬ್ಧಚಿತ್ರಗಳ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಉಸ್ತುವಾರಿ ಸಚಿವ ದಿನೇಶ್ಗುಂಡೂರಾವ್ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ಅಧ್ಯಕ್ಷತವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಡಾ.ಎಂ. ವೀರಪ್ಪ ಮೊಯ್ಲಿ, ಕೆ.ಹೆಚ್. ಮುನಿಯಪ್ಪ, ವಿಧಾನಸಭೆ ಉಪ ಸಭಾಧ್ಯಕ್ಷ ಎನ್.ಹೆಚ್. ಶಿವಶಂಕರರೆಡ್ಡಿ, ಜಿ.ಪಂ. ಅಧ್ಯಕ್ಷ ಎಸ್.ಎನ್. ಚಿನ್ನಪ್ಪ, ಶಾಸಕರಾದ ಎಸ್.ಎನ್. ಸುಬ್ಬಾರೆಡ್ಡಿ, ಎಂ. ಕೃಷ್ಣಾರೆಡ್ಡಿ, ಎಂ. ರಾಜಣ್ಣ, ವಿಧಾನಪರಿಷತ್ ಸದಸ್ಯರಾದ ಡಾ.ಎ.ಹೆಚ್.ಶಿವಯೋಗಿಸ್ವಾವು, ನಸೀರ್ ಅಹಮ್ಮದ್, ವೈ.ಎ. ನಾರಾಯಣಸ್ವಾಮಿ, ಡಿ.ಎಸ್. ವೀರಯ್ಯರವರು ಮುಂತಾದವರು ಭಾಗವಹಿಸಲಿದ್ದಾರೆ. ಕೆ.ವಿ. ಶಿಕ್ಷಕರ ತರಬೇತಿ ಸಂಸ್ಥೆ ಉಪನ್ಯಾಸಕ ಎಂ. ಹಾಲಪ್ಪ ಕನಕರ ಕುರಿತು ಉಪನ್ಯಾಸ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

