ಕೋಲಾರ

ನಾನ್‌ಸ್ಟಾಪ್ ಬಸ್ ಸೇವೆಗೆ ಚಾಲನೆ

Published On :

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಿಂದ ಬೆಂಗಳೂರಿಗೆ ತೆರಳುವ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳು ಸಂಚಾರದ ಮಾರ್ಗದಲ್ಲಿ ಹೆಚ್ಚು ಸ್ಥಳಗಳಲ್ಲಿ ನಿಲುಗಡೆ ಮಾಡಿಕೊಂಡು ಸಂಚರಿಸುತ್ತಿದ್ದ ಹಿನ್ನೆಲೆಯಲ್ಲಿ ಕಿರಿಕಿರಿ ಅನುಭವಿಸುತ್ತಿದ್ದ ಪ್ರಯಾಣಿಕರಿಗಾಗಿ ಚಿಕ್ಕಬಳ್ಳಾಪುರ-ಬೆಂಗಳೂರು ಮಾರ್ಗವಾಗಿ ಹೊಸದಾಗಿ ನಾನ್ ಸ್ಟಾಪ್ ಬಸ್‌ಗಳ ಸಂಚಾರ ಪ್ರಾರಂಭಿಸಲಾಗಿದೆ.
ಎಕ್ಸ್‌ಪ್ರೆಸ್ ದರವನ್ನು ಪ್ರಯಾಣಿಕರು ಪಾವತಿಸಿದರೂ ಬಹುತೇಕ ಚಿಕ್ಕಬಳ್ಳಾಪುರ-ಬೆಂಗಳೂರು ಮಾರ್ಗದ ಬಸ್ಸುಗಳು ಸೆಟಲ್ ಬಸ್‌ಗಳು ಎಂಬ ಅಪಕೀರ್ತಿಗೆ ಪಾತ್ರವಾಗಿದ್ದವು. ಅಲ್ಲದೇ ತ್ವರಿತವಾಗಿ ಬೆಂಗಳೂರಿಗೆ ತಲುಪಬೇಕೆಂಬ ಭಾವನೆ ಹೊಂದಿದ್ದ ಬಹುತೇಕ ಪ್ರಯಾಣಿಕರು ಬೇಸರವನ್ನು ವ್ಯಕ್ತಪಡಿಸುತ್ತಿದ್ದರು. ಮತ್ತೊಂದೆಡೆ ಜಿಲ್ಲಾ ಕೇಂದ್ರದಿಂದ ನಂದಿ, ಬೀಡಗಾನಹಳ್ಳಿ, ಆವತಿ, ದೇವನಹಳ್ಳಿ ಕಡೆಗೆ ವಿದ್ಯಾರ್ಥಿಗಳು ಹೆಚ್ಚಾಗಿ ಸಂಚರಿಸುತ್ತಿರುವುದರಿಂದ ಜಾಸ್ತಿ ಕಡೆ ಅನಿವಾರ್ಯವಾಗಿ ನಿಲುಗಡೆ ಮಾಡಲೇಬೇಕಾಗಿತ್ತು. ನಿಲುಗಡೆ ಮಾಡದಿದ್ದರೆ ವಿದ್ಯಾರ್ಥಿಗಳು, ನಿಲುಗಡೆ ಮಾಡಿದರೆ ಪ್ರಯಾಣಿಕರು ಚಾಲಕರು ಮತ್ತು ನಿರ್ವಾಹಕರ ಮೇಲೆ ಮುಗಿ ಬೀಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಪೇಚಿಗೆ ಸಿಲುಕಿಕೊಳ್ಳುತ್ತಿದ್ದು ಈ ಎಲ್ಲಾ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡ ರಾಜ್ಯ ಸಾರಿಗೆ ಸಂಸ್ಥೆ ಹೊಸದಾಗಿ ಹೆಚ್ಚುವರಿ ನಾನ್ ಸ್ಟಾಪ್ ಬಸ್‌ಗಳನ್ನು ಬಿಟ್ಟು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಟ್ಟಿದೆ. ಚಿಕ್ಕಬಳ್ಳಾಪುರ-ಬೆಂಗಳೂರು, ಚಿಂತಾಮಣಿ-ಬೆಂಗಳೂರು ಮಾರ್ಗವಾಗಿ ತಲಾ ಎರಡು ತಡೆ ರಹಿತ ಹೊಸ ಬಸ್ಸು ಸಂಚಾರಕ್ಕೆ ಚಾಲನೆ ನೀಡಲಾಗಿದೆ.
ಹೆಚ್ಚಿನ ಸೌಲಭ್ಯಕ್ಕೆ ಭರವಸೆ: ಜಿಲ್ಲಾ ಕೇಂದ್ರದಲ್ಲಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಸಾರಿಗೆ ಸೌಲಭ್ಯವನ್ನು ಹೆಚ್ಚಿಸಲಾಗುವುದು ಎಂದು ಶಾಸಕ ಡಾ.ಕೆ. ಸುಧಾಕರ್ ಭರವಸೆ ನೀಡಿದರು.
ನಗರದ ಹಳೆ ಬಸ್ ನಿಲ್ದಾಣದಲ್ಲಿ ನಾನ್ ಸ್ಟಾಪ್ ಬಸ್‌ಗಳಿಗೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ನಗರ ಸಾರಿಗೆ ಸಂಚಾರದ ಬಸ್‌ಗಳನ್ನು ಪ್ರಾರಂಭಿಸಿದ ಹಿನ್ನೆಲೆಯಲ್ಲಿ ಇಲ್ಲಿನ ವಿದ್ಯಾರ್ಥಿಗಳು, ರೈತರು ಸೇರಿದಂತೆ ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಿದೆ. ಅಲ್ಲದೇ ಒಳ್ಳೆಯ ಪ್ರತಿಕ್ರಿಯೆ ದೊರೆಯುತ್ತಿದೆ. ಇದೀಗ ಚಿಕ್ಕಬಳ್ಳಾಪುರ-ಬೆಂಗಳೂರು ಮಾರ್ಗವಾಗಿ ನಾನ್ ಸ್ಟಾಪ್ ಬಸ್‌ಗಳ ಸಂಚಾರ ಪ್ರಾರಂಭಿಸುತ್ತಿದ್ದು ಮೂರು ತಿಂಗಳೊಳಗೆ 20 ತಡೆ ರಹಿತ ಬಸ್ಸುಗಳ ಸಂಚಾರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎಂ. ಮುನಿಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದಸ್ವಾಮಿ, ನಗರಸಭಾ ಸದಸ್ಯ ಗಜೇಂದ್ರ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.