ಕುಡಿವ ನೀರಿಗೆ ರು. 4.50 ಕೋಟಿ
ಕ.ಪ್ರ.ವಾರ್ತೆ ಕೋಲಾರ ನ. 26
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ 4.50 ಕೋಟಿ ರು.ಗಳ ಅವಶ್ಯಕತೆ ಇರುವುದರಿಂದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಕೆ. ರವಿ ತಿಳಿಸಿದರು.
ಅವರು ಮಂಗಳವಾರ ತಮ್ಮನ್ನು ಭೇಟಿಯಾಗಿದ್ದ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಸ್ತುತ ಜಿಲ್ಲೆಯ 27 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡು ಹಳ್ಳಿಗಳ ವಿವರವನ್ನು ಸರ್ಕಾರಕ್ಕೆ ನೀಡಲಾಗಿದೆ ಎಂದರು.
ಕೆಲವು ದಿನಗಳ ಹಿಂದೆ ಬಿದ್ದ ಮಳೆಯಿಂದಾಗಿ ಕೊಂಚ ಮಟ್ಟಿಗೆ ರೈತರಿಗೆ ಸಹಾಯವಾಗಿದೆ. ಕುಡಿಯುವ ನೀರಿಗೆ ನಮ್ಮಲ್ಲಿ ಯಾವುದೇ ಶಾಶ್ವತ ಯೋಜನೆಗಳು ಸದ್ಯಕ್ಕೆ ಜಾರಿಯಲ್ಲಿ ಇಲ್ಲದಿರುವುದರಿಂದ ಅಂತರ್ಜಲ ಬಳಕೆ ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಕ್ರಮಕ್ಕೆ ಸೂಚನೆ: ಅನಗತ್ಯವಾಗಿ ಕೈಗಾರಿಕೆಗಳ ಮೇಲೆ ದಾಳಿ ಮಾಡುವುದು ಹಾಗೂ ಪ್ರತಿಭಟನೆಗಳ ಮೂಲಕ ಕೈಗಾರಿಕೆಗಳ ಕಾರ್ಯಕ್ಕೆ ಅಡ್ಡಿಪಡಿಸುವ ಜನರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಎಸ್ಪಿಗೆ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಕೈಗಾರಿಕೆಗಳಲ್ಲಿ ಏನೇ ಸಮಸ್ಯೆ ಇದ್ದರೂ ಮುಕ್ತವಾಗಿ ನನ್ನನ್ನು ಭೇಟಿಯಾಗಿ ದೂರು ನೀಡಬಹುದು. ಕಾನೂನು ಕೈಗೆತ್ತಿಕೊಳ್ಳುವುದಕ್ಕೆ ಬಿಡುವುದಿಲ್ಲ. ಅತಿ ಶೀಘ್ರ ತಾವೇ ಖುದ್ಧಾಗಿ ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರಿಗೆ ಉದ್ಯೋಗ ನೀಡಲಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುತ್ತೇನೆ. ಒಂದು ವೇಳೆ ಜಿಲ್ಲೆಯವರಿಗೆ ಅನ್ಯಾಯವಾಗಿದ್ದಲ್ಲಿ ನ್ಯಾಯ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭರವಸೆ ನೀಡಿದ್ದಾರೆ.
ಎಟಿಎಂಗಳಿಗೆ ರಕ್ಷಣೆ: ಬೆಂಗಳೂರಿನಲ್ಲಿ ನಡೆದಿರುವ ಘಟನೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿನ ಎಲ್ಲಾ ಎಟಿಎಂಗಳಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವುದಕ್ಕೆ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡುವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕೋಲಾರ ನಗರದ ಬಹುತೇಕ ಎಟಿಎಂಗಳಿಗೆ ಭದ್ರತಾ ವ್ಯವಸ್ಥೆ ಇಲ್ಲದಿರುವ ಬಗ್ಗೆ ಕನ್ನಡಪ್ರಭದ ನ.25ರ ಸಂಚಿಕೆಯಲ್ಲಿ ಪ್ರಕಟವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

