ಅಸಮರ್ಪಕ ವಿದ್ಯುತ್; ಬೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ
ಚಿಕ್ಕಬಳ್ಳಾಪುರ: ರಾಜ್ಯದ ಜಲಾಶಯಗಳೆಲ್ಲಾ ಭರ್ತಿಯಾಗಿದ್ದರೂ ಚಿಕ್ಕಬಳ್ಳಾಪುರದಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲು ಬೆಸ್ಕಾಂ ಇಲಾಖೆ ವಿಫಲವಾಗಿರುವುದಕ್ಕೆ ಆಕ್ರೋಶಗೊಂಡ ರೈತರು ಜೆಡಿಎಸ್ ನೇತೃತ್ವದಲ್ಲಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಸಮಾದಾನಪಡಿಸಲು ಆಗಮಿಸಿದ ಅಧಿಕಾರಿಗಳು ನೀಡಿದ ಉತ್ತರಕ್ಕೆ ಕಿಡಿಕಾರಿ ಸುಮಾರು 1 ಗಂಟೆಗೂ ಹೆಚ್ಚು ಕಾಲ ತರಾಟೆಗೆ ತೆಗೆದುಕೊಂಡರು.
ಬೆಸ್ಕಾಂ ಕಚೇರಿಯಲ್ಲಿ ಕುಳಿತಿರುವ ಅಧಿಕಾರಿಗಳಿಗೆ ರೈತರ ಸಮಸ್ಯೆ ಅರ್ಥವಾಗುತ್ತಿಲ್ಲ. ಲೈನ್ಮೆನ್ಗಳು ವಿದ್ಯುತ್ ಸಮಸ್ಯೆ ನೆಪದಲ್ಲಿ ರೈತರ ಸುಲಿಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿದ ಪ್ರತಿಭಟನಾಕಾರರು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ನಗರದ ವಾಣಿ ಟಾಕೀಸ್ ಮುಂಭಾಗವಿರುವ ಬೆಸ್ಕಾಂ ಕಚೇರಿ ಮುಂದೆ ಧರಣಿ ಕುಳಿತು ಧಿಕ್ಕಾರ ಕೂಗಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ವಿ. ನಾಗರಾಜ್, ಕಳೆದ 15 ದಿನಗಳಿಂದ ವಿದ್ಯುತ್ ಸಮರ್ಪಕವಾಗಿ ಸರಬರಾಜಾಗದೇ ರೈತರ ಬೆಳೆಗಳು ನಾಶವಾಗುತ್ತಿದೆ. ಕೊಡುತ್ತಿರುವ ಜ್ಯೂಸ್ ಕರೆಂಟಿಗೆ ಪಂಪ್ಗಳು ಮತ್ತು ಟ್ರಾನ್ಸ್ ಫಾರ್ಮರ್ಗಳು ಸುಟ್ಟು ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸೆ.28 ರಂದು ಬೆಸ್ಕಾಂ ಇಇಗೆ ಮನವಿ ಸಲ್ಲಿಸಿ, ಸಮಸ್ಯೆ ಬಗೆಹರಿಸಲು ಕೋರಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿದರು. ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಮಾತನಾಡಿ, ಶಾಶ್ವತ ನೀರಾವರಿ ಮೂಲ ಹೊಂದಿರದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರು ಅಂತರ್ಜಲವನ್ನು ನಂಬಿ ಕೃಷಿ ಕೈಗೊಳ್ಳುತ್ತಿದ್ದಾರೆ. ಕೊಳವೆ ಬಾವಿಗಳಿಂದ ನೀರನ್ನು ತೆಗೆಯಲು ಸಮರ್ಪಕವಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ. ಇದರಿಂದ ಬೆಳೆಗಳು ಹಾಳಾಗುತ್ತಿವೆ ಎಂದು ಆರೋಪಿಸಿದರು.
ಜೆಡಿಎಸ್ ಮುಖಂಡರಾದ ಕೆ.ಟಿ.ನಾರಾಯಣಸ್ವಾಮಿ, ವೆಂಕಟನಾರಾಯಣಪ್ಪ, ಅಬ್ದುಲ್ ಹಫೀಜ್, ಕಿಸಾನ್ ಕೃಷ್ಣಪ್ಪ, ಶ್ರೀನಿವಾಸ್, ನಾರಾಯಣಸ್ವಾಮಿ, ಮುನಿರಾಜು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

