ಕೋಲಾರ

ಸುಡು ಬಿಸಿಲಲ್ಲಿ ಕ್ರೀಡಾಪಟುಗಳ ಪರದಾಟ

Published On :

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳನ್ನು ಸುಡು ಬಿಸಿಲಿನಲ್ಲಿ ಹೆಚ್ಚಿನ ಸಮಯ ಕೂರಿಸಿ ತೊಂದರೆ ಕೊಡುವುದು ಬೇಡ ಎಂದು ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು ತಮ್ಮ ಸುದೀರ್ಘ ಭಾಷಣಕ್ಕೆ ಕತ್ತರಿ ಹಾಕಿ ವಿದ್ಯಾರ್ಥಿಗಳ ನೋವನ್ನು ಅರ್ಥ ಮಾಡಿಕೊಂಡರು.
ಆದರೆ, ಕ್ರೀಡಾಕೂಟವನ್ನು ಆಯೋಜಿಸಿದ್ದ ಅಧಿಕಾರಿಗಳು, ಉಸ್ತುವಾರಿ ಮೇಲ್ವಿಚಾರಕರು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಕಾಳಜಿ ತೋರದೇ ದಿನಪೂರ್ತಿ ಕ್ರೀಡಾಪಟು ವಿದ್ಯಾರ್ಥಿಗಳನ್ನು ಪರದಾಡುವಂತೆ ಮಾಡಿದರು.
ನಗರದ ಸರ್ ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2013-14ನೇ ಸಾಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಮ್ಮಿಕೊಂಡಿದ್ದು, ಈ ಎರಡು ದಿನಗಳ ಕ್ರೀಡಾಕೂಟವನ್ನು ಸೋಮವಾರ ಉದ್ಘಾಟಿಸಲಾಯಿತು.
ಜಿಲ್ಲೆಯ 6 ತಾಲೂಕುಗಳಿಂದ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದ ಕಾರಣ ಕ್ರೀಡಾಪಟುಗಳು ತೊಂದರೆ ಅನುಭವಿಸಿದರು.
ಟೋಪಿ ಹಾಕಿಸಿ: ಸುಮ್ಮನೆ ಮಕ್ಕಳಿಗೆ ಕ್ರೀಡಾಕೂಟವನ್ನು ಆಯೋಜಿಸುವುದಲ್ಲ. ಅವರಿಗೆ ಅಗತ್ಯವಿರುವ ಸವಲತ್ತುಗಳನ್ನು ಕೊಡಬೇಕು. ಆಗ ತಮ್ಮ ಪ್ರತಿಭೆಯನ್ನು ಏನೆಂಬುದನ್ನು ಅವರು ತೋರಿಸುತ್ತಾರೆ ಎಂದ ಶಾಸಕ ಸುಧಾಕರ್, ಕ್ರೀಡಾಕೂಟದಲ್ಲಿ ಮಕ್ಕಳನ್ನು ಸುಡು ಬಿಸಿಲಿನಲ್ಲಿ ಕೂರಿಸುವಾಗ ತಲೆಗೆ ಹಾಕಿಕೊಳ್ಳಲು ಟೋಪಿ ಕೊಡಿ, ಕ್ರೀಡಾ ಸಮವಸ್ತ್ರವನ್ನು ನೀಡಿ ಎಂದು ಸೂಚನೆ ನೀಡಿದರು.
ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಕ್ಕಳಲ್ಲಿ ಪ್ರತಿಭೆಯ ಕೊರತೆಯಿಲ್ಲ. ಆದರೆ, ಅವರಿಗೆ ಸವಲತ್ತುಗಳನ್ನು ಕೊಡುವಲ್ಲಿ ವಿಫಲವಾಗುತ್ತಿದ್ದೇವೆ ಎಂದು ವಿಷಾದ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷ ಚಿನ್ನಪ್ಪ, ಉಪಾಧ್ಯಕ್ಷ ರಾಘವೇಂದ್ರ ಹನುಮಾನ್, ತಾ.ಪಂ. ಅಧ್ಯಕ್ಷ ಕೃಷ್ಣಮೂರ್ತಿ, ದೈಹಿಕ ಶಿಕ್ಷಣಾಧಿಕಾರಿ ಮುನಿಸ್ವಾಮಿ ಉಪಸ್ಥಿತರಿದ್ದರು. ನನ್ನ ಗಮನಕ್ಕೆ ಬಂದಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಲು ಸೂಚನೆ ಕೊಡುತ್ತೇನೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಅಜಿತ್ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.