'ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ'
ಕೋಲಾರ: ಅಂಗನವಾಡಿ ಕೇಂದ್ರಕ್ಕೆ ಬರುವ ಮಕ್ಕಳ ಸುರಕ್ಷತೆ ಮತ್ತು ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡುವಂತೆ ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ತಿಳಿಸಿದರು.
ಮಂಗಳವಾರ ಸಂಜೆ ಕೋಲಾರ ಜಿಪಂ ಸಭಾಂಗಣದಲ್ಲಿ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಮಾಲೂರು ತಾಲೂಕಿನ ಬ್ಯಾಲಹಳ್ಳಿಯ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ಮಗು ಒಂದು ಸಾಂಬಾರು ಪಾತ್ರೆಗೆ ಬಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಸತ್ತಿರುವುದರಿಂದ ಇನ್ನು ಮುಂದೆ ಈ ರೀತಿಯ ಘಟನೆಗಳು ಆಗದಂತೆ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕರು ಮತ್ತು ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದರು.
ಜವಾಬ್ದಾರಿ: ಮಕ್ಕಳನ್ನು ಯಾವುದೇ ಕಾರಣಕ್ಕೂ ಅಡುಗೆ ಮನೆಗೆ ಪ್ರವೇಶವಾಗದಂತೆ ನೋಡಿಕೊಳ್ಳಬೇಕು, ಮಕ್ಕಳಿಗೆ ಬಿಸಿ ಅಥವಾ ತಂಗಳು ಎಂಬುದು ಗೊತ್ತಾಗಲ್ಲ, ಮಕ್ಕಳ ಸುರಕ್ಷತೆಗಾಗಿ ಕ್ರಮಗಳನ್ನು ಕೈಗೊಳ್ಳುವ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಹಾಗೂ ಅಂಗನವಾಡಿ ಇಲ್ಲವೇ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಏನಾದರೂ ಅಪಾಯ ಉಂಟಾಗಿ ಮೃತಪಟ್ಟರೆ ತಾವೇ ಜವಾಬ್ದಾರಿಯಾಗಬೇಕಾಗುತ್ತದೆ ಹಾಗೂ ಕಠಿಣ ಶಿಕ್ಷೆ ಎದುರಿಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಬಾಡಿಗೆ ಮೊತ್ತ ಹೆಚ್ಚಿಸಿ: ಅಂಗನವಾಡಿ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನಮ್ಮನ್ನು ಬಳಸಿಕೊಳ್ಳುತ್ತಾರೆ, ಇದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಗಮನಿಸಲು ಆಗುತ್ತಿಲ್ಲ, ಬಾಡಿಗೆ ಕಟ್ಟಡಗಳಿಗೆ ನಿಗದಿ ಮಾಡಿರುವ ಬಾಡಿಗೆ ಮೊತ್ತ ಹೆಚ್ಚಿಸದಿದ್ದರೆ ಕಟ್ಟಡದ ಮಾಲೀಕರು ಮಕ್ಕಳನ್ನು ಮತ್ತು ನಮ್ಮನ್ನು ಹೊರ ಹಾಕುತ್ತಾರೆ, ಸರ್ಕಾರಿ ಶಾಲೆಗಳಲ್ಲಿ 5 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳಿಗೆ ಪ್ರವೇಶ ನೀಡುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಆಗುತ್ತಿದೆ, ನಾವು ನಿರ್ವಹಿಸುತ್ತಿರುವ ಕೆಲಸ ತೃಪ್ತಿ ತಂದಿಲ್ಲ, ಜೊತೆಗೆ ಭಯದ ವಾತಾವಣದಲ್ಲಿ ಕೆಲಸ ಮಾಡುವಂತಾಗಿದೆ ಎಂದು ಕೋಲಾರ ತಾಲೂಕಿನ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಕಿ ರತ್ನಮ್ಮ ತಮ್ಮ ಅಳಲು ವ್ಯಕ್ತಪಡಿಸಿದರು.
ಹೆಚ್ಚಳಕ್ಕೆ ಕ್ರಮ: ಇದಕ್ಕೆ ಪ್ರತಿಕ್ರಿಯಿಸಿದ ಉಪ ಲೋಕಾಯುಕ್ತರು. ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಓ ಝುಲ್ಫಿಖಾರ್ ಉಲ್ಲಾ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಶಕುಂತಲಾ ಅವರಿಗೆ ಸೂಚಿಸಿದರು. ಐದು ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳನ್ನು ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳಿಗೆ ಸೇರಿಕೊಳ್ಳಬಾರದು, ಅಂಗನವಾಡಿ ಕೇಂದ್ರಗಳಿಗೆ ಸೇರಿಸುವಂತೆ ಪೋಷಕರಿಗೆ ಸೂಚನೆ ನೀಡಿ ಎಂದು ಡಿಡಿಪಿಐ ಪದ್ಮನಾಭರವರಿಗೆ ತಿಳಿಸಿದರು.
ಇದಕ್ಕೆ ಸ್ಪಂಧಿಸಿದ ಡಿಡಿಪಿಐ 5 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳದಂತೆ ನಾಳೆಯೇ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳಿಗೆ ಸುತ್ತೊಲೆ ಕಳುಹಿಸುವುದಾಗಿ ಭರವಸೆ ನೀಡಿದರು.
ಸಿಬ್ಬಂದಿ ಕೊರತೆ ಬಗ್ಗೆ ಉತ್ತರ ನೀಡಿದ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ್, ಜಿಲ್ಲಾಧಿಕಾರಿಗಳು ಈ ಬಗ್ಗೆ ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಇನ್ನು 3 ತಿಂಗಳಲ್ಲಿ ಸಿಬ್ಬಂದಿಯ ಕೊರತೆ ನಿವಾರಣೆ ಆಗಲಿದೆ ಎಂದರು.
ಕುಡಿಯುವ ನೀರಿನ ವ್ಯವಸ್ಥೆಗಾಗಿ ಯೋಜನೆ ತಯಾರಿ ಆಗುತ್ತಿದೆ. ಸರ್ಕಾರದಿಂದ ಆದೇಶ ಬಂದ ನಂತರ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶುದ್ಧವಾದ ನೀರು ಒದಗಿಸಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶಕುಂತಲಾ ಪ್ರಶ್ನೆ ಮಂಡಿಸಿದ ಅಂಗನವಾಡಿ ಕಾರ್ಯಕರ್ತೆ ಮುನಿರಾಜಮ್ಮನವರಿಗೆ ಭರವಸೆ ನೀಡಿದರು. ತಾಲೂಕು ವೈದ್ಯಾಧಿಕಾರಿ ಡಾ.ಲತಾ ಅವರು ಉಪ ಲೋಕಾಯುಕ್ತರ ಸೂಚನೆಯಂತೆ ಸಭೆಯಲ್ಲಿ ಭಾಗವಹಿಸಿದ್ದ ಅಂಗನವಾಡಿ ಕಾರ್ಯಕರ್ತರಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮಕ್ಕಳ ತಜ್ಞರ ದೂರವಾಣಿ ಸಂಖ್ಯೆಯನ್ನು ಪ್ರಕಟಿಸಿದರಲ್ಲದೆ, ಮಕ್ಕಳ ಆರೋಗ್ಯದ ವಿಚಾರದಲ್ಲಿ ಮುತುವರ್ಜಿ ವಹಿಸಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಉಪ ಲೋಕಾಯುಕ್ತರ ಕಚೇರಿಯಲ್ಲಿ ಸಹಾಯಕ ಉಪ ನಿಬಂಧಕರಾಗಿರುವ ನ್ಯಾಯಮೂರ್ತಿ ನೇಗಿನಹಾಳ ಇದ್ದರು. ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

