ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಲಕ್ಷ್ಯ: ಆಕ್ರೋಶ
ಚಿಕ್ಕಬಳ್ಳಾಪುರ: ಸರ್ಕಾರದ ಪರವಾಗಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ. ಕಾಟಾಚಾರಕ್ಕೆ ಜಯಂತಿ ಆಚರಿಸಿ ಕೈ ತೊಳೆದುಕೊಳ್ಳುವ ಮನೋಭಾವನೆಯಲ್ಲಿದೆ ಎಂದು ವಾಲ್ಮೀಕಿ ಜನಾಂಗದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೆ ಅದ್ಧೂರಿಯಾಗಿ ಜಿಲ್ಲಾಡಳಿತದ ವತಿಯಿಂದ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಜಯಂತಿ ಆಚರಣೆಯಲ್ಲಿ ಜಿಲ್ಲಾಧಿಕಾರಿ ವಿಶಾಲ್ರವರ ನಿರ್ಲಕ್ಷ್ಯ ಧೋರಣೆ ಜನರಲ್ಲಿ ಅಸಮಾಧಾನವನ್ನುಂಟು ಮಾಡಿದೆ ಎಂದು ಆರೋಪಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎನ್. ಸುಬ್ಬರಾಯಪ್ಪ, ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು ಸರ್ಕಾರ ಆದೇಶ ನೀಡಿದ್ದು ರಾಜ್ಯದೆಲ್ಲೆಡೆ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಇದಕ್ಕಾಗಿ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಆದರೆ, ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ. ಇದಕ್ಕೆ ಜಿಲ್ಲಾಧಿಕಾರಿಗಳ ದಲಿತ ವಿರೋಧಿ ನೀತಿಯೇ ಕಾರಣವಾಗಿದೆ ಎಂದರು.
ನಿರ್ಲಕ್ಷ್ಯ ಏಕೆ: ಜಿಲ್ಲಾಡಳಿತದ ವತಿಯಿಂದ ವಾಲ್ಮೀಕಿ ಜಯಂತಿ ಆಚರಣೆಗಾಗಿ ನಡೆಸಲಾದ ಎರಡು ಪೂರ್ವಭಾವಿ ಸಭೆಯಲ್ಲೂ ಜಿಲ್ಲಾಧಿಕಾರಿಗಳು ಭಾಗವಹಿಸಿಲ್ಲ. ಇವರ ಧೋರಣೆಯನ್ನೇ ಅನುಸರಿಸುತ್ತಿರುವ ಜಿಲ್ಲಾ, ತಾಲೂಕು ಮಟ್ಟದ ಬಹುತೇಕ ಅಧಿಕಾರಿಗಳು ಪೂರ್ವಭಾವಿ ಸಭೆಗಳಿಗೆ ಗೈರು ಹಾಜರಾಗಿ ಸಭೆಯನ್ನು ಕಾಟಾಚಾರಕ್ಕೆ ನಡೆಸುತ್ತಿದ್ದಾರೆ. ಸಭೆಗಳೇ ಹೀಗೆ ನಡೆಯುವಾಗ ಕಾರ್ಯಕ್ರಮವನ್ನು ಯಾವ ರೀತಿಯಲ್ಲಿ ಆಚರಿಸಲಾಗುತ್ತದೆ ಎಂಬುದೇ ಅನುಮಾನ ಮೂಡಿಸಿದೆ. ವಾಲ್ಮೀಕಿ ಜಯಂತಿ ಆಚರಣೆಗೆ ಜಿಲ್ಲಾಧಿಕಾರಿ ನಿರ್ಲಕ್ಷ್ಯ ತೋರುತ್ತಿರುವುದೇತಕ್ಕೆ ಎಂದು ಪ್ರಶ್ನಿಸಿದರು.
ದೂರ ಉಳಿಯುತ್ತೇವೆ: ಮಹರ್ಷಿ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಿ ಅವರ ಸಂದೇಶ, ತತ್ವಗಳನ್ನು ಜನರಿಗೆ ತಿಳಿಸಬೇಕಾಗಿದೆ. ಆದರೆ, ಜಿಲ್ಲಾಡಳಿತ ನಿರ್ಲಕ್ಷ್ಯದಿಂದ ಜಯಂತಿ ಆಚರಣೆಗೆ ಮುಂದಾಗುತ್ತಿರುವುದರಿಂದ ನಾವು ಕಾರ್ಯಕ್ರಮದಿಂದ ದೂರ ಉಳಿಯಲು ಮುಂದಾಗಿರುವುದಾಗಿ ತಿಳಿಸಿದರು.
ವಾಲ್ಮೀಕಿ ಜಯಂತಿ ಆಚರಣೆಗೆ ಒಂದು ವಾರ ಬಾಕಿ ಇದ್ದು ಈ ನಡುವೆ ಸರ್ಕಾರಿ ರಜೆಗಳು ಹೆಚ್ಚಿಗೆ ಬಂದಿವೆ. ಇದರ ನಡುವೆ ಅದ್ಧೂರಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಲು ಮುಖಂಡರು ಮತ್ತು ಅಧಿಕಾರಿಗಳನ್ನು ಕರೆಸಿ ಯಾವಾಗ ಚರ್ಚೆ ನಡೆಸುತ್ತಾರೆ ಎಂದು ಪ್ರಶ್ನಿಸಿದ ಅವರು,ಜಿಲ್ಲಾಧಿಕಾರಿಗಳು ತಮ್ಮ ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು.ಇಲ್ಲದಿದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ ಜನಾಂಗದ ಗವಿರಾಯಪ್ಪ, ಮುನಿರಾಜು, ವೆಂಕಟ್ವಾಮಿ, ರಾಮಕೃಷ್ಣ, ಮೂರ್ತಿ ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

