ಕೋಲಾರ

ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕಾರ್ಯ ನಿರ್ವಹಿಸಬೇಕು'

Published On :

ಚಿಕ್ಕಬಳ್ಳಾಪುರ: ಕೃಷಿ ಚಟುವಟಿಕೆಗಳಲ್ಲಿ ಪ್ರಗತಿ ಸಾಧಿಸಲು ಶ್ರಮಿಸುತ್ತಿರುವ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೃಷಿ ಇಲಾಖೆ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ತಮ್ಮ ನಿರ್ಲಕ್ಷ್ಯ ಧೋರಣೆ ಬಿಟ್ಟು ರೈತರು ತೊಂದರೆಯನ್ನು ಅನುಭವಿಸದಂತೆ ನೋಡಿಕೊಳ್ಳಬೇಕೆಂದು ಜಿಪಂ ಅಧ್ಯಕ್ಷ ಚಿನ್ನಪ್ಪ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಕೃಷಿ ಇಲಾಖೆಯಿಂದ ರೈತರಿಗೆ ಅಗತ್ಯವಿರುವ ಸವಲತ್ತುಗಳು ದೊರೆಯುವಲ್ಲಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಸವಲತ್ತು ಒದಗಿಸಬೇಕು: ಮುಂಗಾರ ಮಳೆ ಪ್ರಾರಂಭದಲ್ಲಿ ಕೈ ಕೊಟ್ಟು ಜಿಲ್ಲೆಯ ರೈತರನ್ನು ಆತಂಕಕ್ಕೆ ಗುರಿ ಮಾಡಿತ್ತಾದರೂ ಹಿಂದಿನ ತಿಂಗಳಿಂದ ಜಿಲ್ಲೆಯಲ್ಲಿ ಮಳೆ ಚೆನ್ನಾಗಿ ಬಿದ್ದು ಕೃಷಿ ಚಟುವಟಿಕೆಗಳಲ್ಲಿ ಚೇತರಿಕೆ ಕಾಣುವಂತೆ ಮಾಡಿದೆ. ಬಿತ್ತನೆ ಕಾರ್ಯ ಚುರುಕಾಗಿ ಮುಗಿದಿದ್ದು ಕೃಷಿ ಇಲಾಖೆ ಅಧಿಕಾರಿಗಳು ಗಮನಹರಿಸಿ ರೈತರಿಗೆ ಅಗತ್ಯವಿರುವ ಸವಲತ್ತು ಒದಗಿಸಬೇಕು. ರೈತರ ಅನುಕೂಲಕ್ಕಾಗಿ ಸರ್ಕಾರ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುತ್ತಿದೆ. ವಿಶೇಷ ಕಾರ್ಯಕ್ರಮಗಳು ಮತ್ತು ಯೋಜನೆಗಳ ಮೂಲಕ ಸವಲತ್ತುಗಳನ್ನು ಒದಗಿಸುತ್ತಿದೆ. ಇವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹೆಚ್ಚಿನ ಪ್ರಚಾರ ಕೈಗೊಂಡು ಅರ್ಹ ಫಲಾನುಭವಿಗಳಿಗೆ ಸವಲತ್ತು ಸಿಗುವಂತೆ ಮಾಡಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ತಿಳಿಸಿದರು.
ಸೌಕರ್ಯಗಳ ಕೊರತೆ: ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಸಾಕಷ್ಟು ಸಮಸ್ಯೆಗಳು ಕಂಡು ಬರುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಬಹಳಷ್ಟು ಹಾಸ್ಟೆಲ್ಗಳು ಮೂಲ ಸೌಕರ್ಯಗಳ ಕೊರತೆ ಹೊಂದಿದೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಮೇಲೆ ದುಷ್ಪರಿಣಾಮ ಬೀರುತ್ತಿದ್ದು ಯಾವುದೇ ಹಾಸ್ಟೆಲ್ಗಳಲ್ಲಾಗಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವುದರ ಬಗ್ಗೆ ದೂರುಗಳು ಬಾರದಂತೆ ನೋಡಿಕೊಳ್ಳಬೇಕು. ಸಕಾಲಕ್ಕೆ ಊಟ, ಜತೆಗೆ ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯ ದೊರಕಿಸಿಕೊಡಬೇಕೆಂದು ಸೂಚನೆ ನೀಡಿದರು.
ಲೀಡ್ ಬ್ಯಾಂಕ್ ಮ್ಯಾನೇಜರ್ ಸುಂದರೇಶ್ ಮಾತನಾಡಿ, ಕೆನರಾ ಬ್ಯಾಂಕನಿಂದ ಎಲ್ಲಾ ವರ್ಗದ ಪದವಿ ವಿದ್ಯಾರ್ಥಿಗಳಿಗೆ 4 ಲಕ್ಷ ರು.ಗಳವರೆಗೆ ಶೈಕ್ಷಣಿಕ ಸಾಲ ನೀಡಲಾಗುತ್ತಿದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕೆಂದು ಕೋರಿದರು. ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಮಾತನಾಡಿ, ವಿವಿಧ ಇಲಾಖೆಗಳು ಸರ್ಕಾರದಿಂದ ಬಂದ ಅನುದಾನ ಸದ್ಬಳಕೆ ಮಾಡಿಕೊಂಡು ಪ್ರಗತಿ ಸಾಧಿಸಬೇಕು. ಸಮಸ್ಯೆಗಳು ಕಂಡು ಬಂದ ತಕ್ಷಣ ಬಗೆಹರಿಸಿ ಸ್ಪಂದಿಸಬೇಕು. ಕೇವಲ ಸಭೆಗಳಲ್ಲಿ ಮಾಹಿತಿ ಹೇಳುವುದರಲ್ಲಿ, ಕಡತಗಳಲ್ಲಿನ ಅಂಕಿ ಅಂಶಗಳಲ್ಲಿ ಪ್ರಗತಿ ತೋರಿಸುವುದಲ್ಲ. ನಿಜವಾಗಲೂ ಪ್ರಗತಿ ಕೆಲಸದಲ್ಲಾಗಬೇಕೆಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತೋಟಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯ ಪರಿಶೀಲನೆ ನಡೆಯಿತು. ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೀಲಾ ಮಂಜುನಾಥ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.