ಆಸ್ಪತ್ರೆ ಸಮಸ್ಯೆಗಳ ನಿವಾರಣೆಗೆ ಸೂಚನೆ
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 7 ಹಾದು ಹೋಗಿರುವುದರಿಂದ ಇಲ್ಲಿ ಅಪಘಾತಗಳು ಹೆಚ್ಚಿಗೆ ಸಂಭವಿಸುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಅವ್ಯವಸ್ಥೆಯಿಂದ ವಿಳಂಬವಾಗುತ್ತಿದ್ದು ಇದಕ್ಕೆ ಅವಕಾಶ ನೀಡಬಾರದು ಎಂದು ಶಾಸಕ ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಹೊರ ವಲಯದಲ್ಲಿರುವ ಜಿಲ್ಲಾಡಳಿತ ಭವನದ ಸಮೀಪ(ಪೂಜೇನಹಳ್ಳಿ) ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರು ಮೃತಪಟ್ಟು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇದೆ. ಇಲ್ಲಿರುವ ಮೂಲ ಸೌಕರ್ಯಗಳ ಸಮಸ್ಯೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ತಾವು ಸದನದಲ್ಲಿ ಅನೇಕ ಬಾರಿ ಪ್ರಶ್ನಿಸಿ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದು ಈಗ ನಗರದ ಹೊಸ ಬಸ್ಸು ನಿಲ್ದಾಣದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯು ನೂತನವಾಗಿ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದೊಳಗೆ ಅದು ಸೇವೆಗೆ ಸಿಗಲಿದೆ. ಆಗ ಸಮಸ್ಯೆಗಳು ಪರಿಹಾರ ಕಾಣಲಿದ್ದು ಅಲ್ಲಿಯವರೆಗೂ ಈಗ ಇರುವ ಆಸ್ಪತ್ರೆಯಲ್ಲಿ ಜನರು ಸಮಸ್ಯೆಗಳಿಗೆ ಗುರಿಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಅಪಘಾತಗಳು ಹೆಚ್ಚಿಗೆ ಸಂಭವಿಸುತ್ತಿದ್ದು ಇಂತಹ ಸಂದರ್ಭದಲ್ಲಿ ಗಾಯಾಳುಗಳನ್ನು ತ್ವರಿತವಾಗಿ ಆಸ್ಪತ್ರೆಗೆ ತಂದು ಚಿಕಿತ್ಸೆ ಕೊಡಿಸಬೇಕು. ಆದರೆ, ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ವಾಹನಗಳು ಬರುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು ಇದಕ್ಕೆ ಅಧಿಕಾರಿಗಳು ಗಮನಕೊಡಬೇಕು. ಅಲ್ಲದೇ ಪೆರೇಸಂದ್ರ ಮತ್ತು ಚಿಕ್ಕಬಳ್ಳಾಪುರ ನಗರ ಸೇರಿದಂತೆ ಅಗತ್ಯವಿರುವರೆಡೆ ಅ್ಯಂಬ್ಯುಲೆನ್ಸ್ ವ್ಯವಸ್ಥೆಯನ್ನು ಒದಗಿಸಬೇಕೆಂದು ಸೂಚನೆ ನೀಡಿದರು.
ಅಪಘಾತಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದ ಅವರು, ಅಗತ್ಯವಿರುವ ವೈದ್ಯರನ್ನು ನೇಮಿಸಲು ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇರುವ ವೈದ್ಯರೇ ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡುತ್ತಿದ್ದು ಅಪಘಾತಕ್ಕೆ ತುತ್ತಾಗಿದ್ದ ರಾಕೇಶರವರನ್ನು ಇಲ್ಲಿಗೆ ಕರೆದುಕೊಂಡು ಬರುವಷ್ಟರಲ್ಲಿ ಆತ ತಲೆಗೆ ತೀವ್ರ ಪೆಟ್ಟು ಮೃತನಾಗಿದ್ದ. ಈ ಹಿನ್ನೆಲೆಯಲ್ಲಿ ಮತ್ತೊಬ್ಬ ಗಾಯಾಳು ಅನಂತರಾಜುರವರಿಗೆ ಚಿಕಿತ್ಸೆ ನೀಡಲು ಮುಂದಾದೆವು. ಆದರೆ, ಜನರು ನಮಗೆ ಚಿಕಿತ್ಸೆ ನೀಡಲು ಬಿಡಲಿಲ್ಲ. ತಮ್ಮ ಮೇಲೆ ಹಲ್ಲೆ ನಡೆಸಲು ಬಂದ ಕಾರಣ ಭಯದಿಂದ ನಮಗೂ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಈ ನಡುವೆ ಮತ್ತೊಂದು ಅಪಘಾತ ಪ್ರಕರಣದಲ್ಲಿ ಮಹಿಳೆಯರು ಸೇರಿದಂತೆ ಮೂವರು ಉತ್ತರ ಭಾರತದವರು ಗಾಯಗೊಂಡು ಬಂದಿದ್ದು ಒತ್ತಡದಲ್ಲಿ ಯಾರಿಗೆ ಚಿಕಿತ್ಸೆ ನೀಡಬೇಕೆನ್ನುವುದೇ ತೋಚಲಿಲ್ಲ. ಇಂತಹ ಸ್ಥಿತಿಯಲ್ಲಿ ನಾವು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಆಸ್ಪತ್ರೆಯ ವೈದ್ಯರಾದ ಡಾ. ದಿವಾಕರ್ ಮತ್ತು ಗಿರಿಜಾ ಶಾಸಕರ ಮುಂದೆ ತಮ್ಮ ಅಳಲು ತೋಡಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

