ಕೋಲಾರ

ಅದ್ಧೂರಿ ವಾಲ್ಮೀಕಿ ಜಯಂತಿ ಆಚರಣೆಗೆ ಸೂಚನೆ

Published On :

ಚಿಕ್ಕಬಳ್ಳಾಪುರ:  ತಮ್ಮ ಕಚೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆಗಾಗಿ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ. ವಿಶಾಲ್. ಆರ್, ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಹಕಾರದೊಂದಿಗೆ ವಾಲ್ಮೀಕಿ ಜಯಂತಿ ಅದ್ಧೂರಿಯಾಗಿ ಆಚರಿಸಲು ಶ್ರಮಿಸಬೇಕು. ಕಡ್ಡಾಯವಾಗಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲಾಡಳಿತದ ವತಿಯಿಂದ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಅ.18 ರಂದು ಬೆಳಿಗ್ಗೆ 12.30 ಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ: ಬೆಳಿಗ್ಗೆ 10.30ಕ್ಕೆ ನಗರದ ಮರಳು ಸಿದ್ದೇಶ್ವರಸ್ವಾಮಿ ದೇವಾಲಯದಿಂದ ನಗರದ ಪ್ರಮುಖ ಬೀದಿಗಳಲ್ಲಿ ವಾಲ್ಮೀಕಿ ಮಹರ್ಷಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಕೃಷಿ ಇಲಾಖೆ, ಕೆಎಸ್‌ಆರ್‌ಟಿಸಿ, ಸಾಮಾಜಿಕ ಮತ್ತು ವಲಯ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಜಲಾನಯನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಮತ್ತು ಇಲಾಖೆಗಳಿಗೆ ಸಂಬಂಧಪಟ್ಟಂತೆ ಪ್ರತಿ ಬಿಂಬಿಸುವ ಸ್ತಬ್ದ ಚಿತ್ರಗಳು ಗಮನ ಸೆಳೆಯಲಿವೆ. ಅಲ್ಲದೇ ಡೊಳ್ಳು ಕುಣಿತ, ಕೀಲು ಕುದುರೆಗಳು, ಗಾರುಡಿ ಗೊಂಬೆ, ವೀರಗಾಸೆ, ತಮಟೆ ವಾದ್ಯ, ಪೂಜಾ ಕುಣಿತ ಸೇರಿದಂತೆ ಕಲಾ ತಂಡಗಳು ಭಾಗವಹಿಸಲಿವೆ.
ಪಾಲ್ಗೊಳ್ಳುವವರು: ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ  ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಡಾ.ಕೆ. ಸುಧಾಕರ್ ವಹಿಸುವರು.ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಡಾ.ಎಂ.ವೀರಪ್ಪ ಮೊಯಿಲಿ, ಕೆ.ಎಚ್. ಮುನಿಯಪ್ಪ, ವಿಧಾನಸಭೆ ಉಪಸಭಾಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಎನ್.ಚಿನ್ನಪ್ಪ, ಶಾಸಕರಾದ ಎಂ.ರಾಜಣ್ಣ, ಎಸ್.ಎನ್. ಸುಬ್ಬಾರೆಡ್ಡಿ, ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ಮುಖ್ಯ ಸಚೇತಕ ಡಾ.ಎ.ಹೆಚ್. ಶಿವಯೋಗಿ ಸ್ವಾಮಿ, ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ನಸೀರ್ ಅಹಮದ್, ಡಿ.ಎಸ್. ವೀರಯ್ಯ ಮುಂತಾದವರು ಭಾಗವಹಿಸಲಿದ್ದಾರೆ. ಜಿಪಂ ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಹಾಗೂ ಬೆಂಗಳೂರಿನ ಖ್ಯಾತ ಸಾಹಿತಿ ಡಾ.ಎಲ್. ಹನುಮಂತಯ್ಯ ಮಹರ್ಷಿ ವಾಲ್ಮೀಕಿ ಕುರಿತು ಭಾಷಣ ಮಾಡಲಿದ್ದಾರೆ.
ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮತ್ತು ಪರಿಶಿಷ್ಟ ಜನಾಂಗದವರ ಏಳಿಗೆಗೆ ಶ್ರಮಿಸಿದ ತಾಲೂಕಿಗೆ ಒಬ್ಬರಂತೆ ಆರು ಜನರನ್ನು ಸನ್ಮಾನಿಸಲಾಗುತ್ತದೆ. ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಇಬ್ಬರು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ವಿವಿಧ ಇಲಾಖೆಗಳಿಂದ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಗುತ್ತದೆ. ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹ ವಾಲ್ಮೀಕಿ ಜಯಂತಿಯನ್ನು ಆಚರಿಸಿ ಯಶಸ್ವಿಗೊಳಿಸಲು ಸಹಕಾರ ನೀಡಬೇಕೆಂದು ಕೋರಿದರು. ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಡಾ.ಎನ್. ಶಿವಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.