ಕೋಲಾರ

ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ: ವಿದ್ಯಾರ್ಥಿಗಳ ಪ್ರತಿಭಟನೆ

Published On :

ಚಿಂತಾಮಣಿ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಮೂಲಭೂತ ಸಮಸ್ಯೆಗಳು ಎದುರಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೋರಿ ದಲಿತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಹಾಸ್ಟೆಲ್ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಹಿಂಭಾಗದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಪಪೂ ಕಾಲೇಜಿನ ವಸತಿ ನಿಲಯದ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಕುಡಿಯುವ ನೀರು, ಉತ್ತಮ ತರಕಾರಿ, ಸ್ವಚ್ಛತೆ ಸೇರಿದಂತೆ ಇನ್ನೂ ಹಲವಾರು ಸಮಸ್ಯೆಗಳು ಎದುರಾಗುತ್ತಿದ್ದರೂ ಸ್ಥಳೀಯ ಸಮಾಜ ಕಲ್ಯಾಣ ಅಧಿಕಾರಿ ಮತ್ತು ವಾರ್ಡನ್ ಒಳಒಪ್ಪಂದ ಮಾಡಿಕೊಂಡು ದಲಿತ ಮಕ್ಕಳಿಗೆ ಮೂಲ ಸೌಲಭ್ಯ ಕಲ್ಪಿಸಿಕೊಡುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.
ದೇಶಾದ್ಯಂತ ವಾಲ್ಮೀಕಿ ಜಯಂತಿ ಆಚರಿಸಿ ದಲಿತ ಬಡ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಆದರೂ ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಪುಣ್ಯ ಪುರುಷ ವಾಲ್ಮೀಕಿ ಜಯಂತಿ ದಿನದಂದು ದಲಿತ ಮಕ್ಕಳಿಗೆ ಅನ್ನ ನೀರಿಲ್ಲದೆ ಉಪವಾಸ ಕುಳಿತಿರುವುದು ದಲಿತ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ.
ಅಧಿಕಾರಿಗಳಿಗೆ ಘೇರಾವ್: ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ನಾಗರಾಜ್ ಹಾಗೂ ಸ್ಥಳೀಯ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಮೊಹಮದ್ ಸಫೀರ್ ಮತ್ತು ವಾರ್ಡನ್ ನಾಗರತ್ನಮ್ಮ ಕಾರ್ಯವೈಖರಿ ವಿರುದ್ಧ ವಿದ್ಯಾರ್ಥಿನಿಯರು ಗರಂ ಆಗಿ ತರಾಟೆ ತೆಗೆದುಕೊಂಡು ಸರ್ಕಾರ ಅನುದಾನ ನೀಡುತ್ತಿದ್ದರೂ ಮೂಲಭೂತ ಸವಲತ್ತುಗಳನ್ನು ಒದಗಿಸದೆ ಹಣವನ್ನು ನುಂಗಿ ನೀರು ಕುಡಿಯುತ್ತಿರುವ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿದರು.
ನಂತರ ಸ್ಥಳೀಯ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವಿದ್ಯಾರ್ಥಿನಿಯರನ್ನು ಸಮಾಧಾನಗೊಳಿಸಿ ಅಧಿಕಾರಿಗಳನ್ನು ಮತ್ತು ವಾರ್ಡನ್‌ರನ್ನು ತರಾಟೆಗೆ ತೆಗೆದುಕೊಂಡು ಮುಂದೆ ಇಂತಹ ಸಮಸ್ಯೆ ಬಾರದಂತೆ ನೋಡಿಕೊಂಡು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಎಚ್ಚರಿಸಿದರು. ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ಹಾಸ್ಟೆಲ್‌ನ ಸಮಸ್ಯೆಗಳ ಬಗ್ಗೆ  ಶಾಸಕರಿಗೆ ದೂರು ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.