ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಯಿರಿ
ಕೋಲಾರ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಮಾರಾಟ, ಸೇವನೆ, ಧೂಮಪಾನಕ್ಕೆ ಸಂಬಂಧಿಸಿದ ಜಾಹೀರಾತು ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕೋಟ್ಪಾ ಕುರಿತು ಕೋಲಾರ ವಲಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಗರದಲ್ಲಿ ಶನಿವಾರ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರಿನ ಸಾರ್ವಜನಿಕ ಆರೋಗ್ಯ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಕೋಟ್ಪಾ ನಿಷೇಧಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ನಿವೃತ್ತ ಡಿಸಿಪಿ ಶ್ರೀಧರಮೂರ್ತಿ ಉಪಯುಕ್ತವಾದ ಮಾಹಿತಿ ನೀಡಿದರು.
ಕೋಲಾರ ಜಿಲ್ಲಾ ಎಸ್ಪಿ ಡಾ.ರಾಮ್‌ನಿವಾಸ್ ಸಾಪಟ್ ಮಾತನಾಡಿ, ಕೇಂದ್ರ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವ ಪ್ರಕರಣಗಳನ್ನು ಪೊಲೀಸ್ ಪ್ರಕರಣಗಳ ತಿಂಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅದರಂತೆ ಬಹುತೇಕ ಜಿಲ್ಲೆಗಳು ಮತ್ತು ವಲಯಗಳಲ್ಲಿ ಈ ಸಂಬಂಧ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತಾಗಿದೆ. ಈ ಹಿನ್ನೆಲೆಯಲ್ಲಿ ತಂಬಾಕು ಬಳಕೆಯಿಂದ ವಿಮುಖರಾಗುವಂತೆ ಮಾಡಿ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಪೊಲೀಸ್ ಇಲಾಖೆಯ ಕರ್ತವ್ಯ ಮಹತ್ತರವಾಗಿದೆ ಎಂದರು.
ಕೋಟ್ಪಾ ಕಾಯ್ದೆಯಲ್ಲಿನ ಪ್ರಮುಖ ನಿಯಮಗಳ ಮಹತ್ವ ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಾಗಾರ ನಡೆಯುತ್ತಿದ್ದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸದುಪಯೋಗ ಪಡಿಸಿಕೊಂಡು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕರೆ ನೀಡಿದರು.
ಶಾಲಾ ಕಾಲೇಜುಗಳ ಆವರಣದ ಸುತ್ತಮುತ್ತ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆಯನ್ನು ನಿಯಂತ್ರಿಸುವುದು ಪೊಲೀಸರ ಹೊಣೆಯಾಗಿದೆ ಎಂದು ನಿವೃತ್ತ ಡಿಸಿಪಿ ಶ್ರೀಧರಮೂರ್ತಿ ತಿಳಿಸಿದರು.
ತಂಬಾಕು ಸೇವನೆಯಿಂದಾಗಿ ಭಾರತದಲ್ಲಿ ಪ್ರತಿ ವರ್ಷ 10 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ, ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಇತ್ತೀಚಿನ ಸಂಶೋಧನೆಗಳ ಪ್ರಕಾರ ದೇಶದಲ್ಲಿ ಪ್ರತಿ ಎಂಟು ಸೆಕೆಂಡಿಗೆ ಒಬ್ಬರು ತಂಬಾಕು ಸೇವನೆ ಮಾಡುವವರು ಸಾವನ್ನಪ್ಪುತ್ತಿದ್ದರೆ, ಭಾರತದಲ್ಲಿ ಸರಾಸರಿ 17.8 ವರ್ಷದವರು ತಂಬಾಕು ಸೇವನೆ ಮಾಡುತ್ತಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

