ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಕೋಲಾರ: ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ತಿಂಗಳು ಪೂರ್ತಿಯಾಗಿ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಡಿ.ಕೆ.ರವಿ ತಿಳಿಸಿದರು.
ನವೆಂಬರ್ 1 ರಂದು ಜಿಲ್ಲಾಮಟ್ಟದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಮತ್ತು ಯಶಸ್ವಿಯಾಗಿ ಆಚರಿಸುವ ಸಂಬಂಧ ಶನಿವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ಅವರು ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಶ್ರೀ ಭುವನೇಶ್ವರಿ ಕನ್ನಡ ಸಂಘ ಹಾಗೂ ವಿವಿಧ ಕನ್ನಡ ಪರ ಸಂಘ ಸಂಸ್ಥೆಗಳು ಒಗ್ಗೂಡಿ ನಾಡ ಹಬ್ಬವನ್ನು ಆಚರಿಸಬೇಕು. ಕೇವಲ ಒಂದು ದಿನ ಮಾತ್ರ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಸಾಲದು, ನವೆಂಬರ್ ತಿಂಗಳು ಪೂರ್ತಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ನಾಡಹಬ್ಬಕ್ಕೆ ಮೆರಗು ನೀಡಬೇಕೆಂದರು.
ರಂಗಮಂದಿರದಲ್ಲಿ ವಾರ ಪೂರ್ತಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯಿಂದ ಒಂದು ದಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 3 ದಿನ, ಡಿವಿಜಿ ಹಾಗೂ ಮಾಸ್ತಿ ಪ್ರತಿಷ್ಠಾನದಿಂದ 2 ದಿನ, ಭುವನೇಶ್ವರಿ ಕನ್ನಡ ಸಂಘದಿಂದ ಒಂದು ದಿನ ಕಾರ್ಯಕ್ರಮ ನಡೆಸಿಕೊಡಲು ಸಭೆಯಲ್ಲಿ ನಿರ್ಧರಿಸಲಾಯಿತು.
ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿರುವ ಗಣ್ಯ ವ್ಯಕ್ತಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಬೇಕಾಗಿದ್ದು, ಅರ್ಹರ ಆಯ್ಕೆಗೆ ಸಮಿತಿ ರಚಿಸಿ ಪಾರದರ್ಶಕತೆ ಕಾಪಾಡಿಕೊಳ್ಳಲು ಸೂಚಿಸಿದರು.
ಹಳೆ ಸ್ತಬ್ದಚಿತ್ರ ಬೇಡ: ನ.1ರಂದು ನಡೆಯುವ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳ ಗುಣಮಟ್ಟ ಚೆನ್ನಾಗಿರಬೇಕು. ಹಳೆಯ ಸ್ತಬ್ದ ಚಿತ್ರಗಳು ಭಾಗವಹಿಸಬಾರದು. ಪಲ್ಲಕ್ಕಿಗಳು ಸಹ ಉತ್ತಮ ರೀತಿಯಲ್ಲಿರಬೇಕು. ಯಾವುದೇ ಭಾವಚಿತ್ರಗಳನ್ನು ಕಾಟಾಚಾರಕ್ಕಿಟ್ಟುಕೊಂಡು ಮೆರವಣಿಗೆಯಲ್ಲಿ ಭಾಗವಹಿಸಬಾರದೆಂದು ಜಿಲ್ಲಾಧಿಕಾರಿಗಳು ಹೇಳಿದರು.
ಕನ್ನಡ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಗಣ್ಯರನ್ನು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ್ ನೇತೃತ್ವದ ಆಯ್ಕೆ ಸಮಿತಿಗೆ ಅಧ್ಯಕ್ಷರನ್ನಾಗಿ ನೇಮಿಸಲಾಯಿತು.
ತಿಂಗಳು ಪೂರ್ತಿ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಚಲನ ಚಿತ್ರಮಂದಿರಗಳಿಗೆ ಮನವಿ, ಅಂಗಡಿ, ಕಚೇರಿಗಳಿಗೆ ಕನ್ನಡ ನಾಮಫಲಕ ಹಾಕಿಸುವಂತೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾವ್ ನಿವಾಸ್ ಸೆಪಟ್, ಜಿಪಂ ಸಿಇಒ ಝಲ್ಫಿಖಾರ್ ಉಲ್ಲಾ, ಡಿಡಿಪಿಐ ಪದ್ಮನಾಭ್, ಡಿಡಿಪಿಯು ದೊರೆಸ್ವಾಮಿ, ಡಿವೈಎಸ್ಪಿ ಅಶೋಕ್ಕುಮಾರ್, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಡಿ.ವಿ.ಜಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಪ್ರಹ್ಲಾದರಾವ್, ಡಾ.ರಾಜ್ ಅಭಿಮಾನಿಗಳ ಸಂಘದ ಮುಖಂಡ ಕೋ.ನಾ.ಪ್ರಭಾಕರ್, ಕನ್ನಡ ಹೋರಾಟಗಾರರ ಸಂಘದ ಅಧ್ಯಕ್ಷ ಕಲಾವಿದ ವಿಷ್ಣು, ಕನ್ನಡ ರಕ್ಷಣಾ ವೇದಿಕೆಯ ಜಯದೇವ ಪ್ರಸನ್ನ, ವಕೀಲರ ಸಂಘದ ಅಧ್ಯಕ್ಷ ಶಿವಣ್ಣ, ಜಯ ಕರ್ನಾಟಕದ ಜಿಲ್ಲಾಧ್ಯಕ್ಷ ತ್ಯಾಗರಾಜ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

