ಕಾಯಿದೆ ಪಾಲನೆ ಮಾಧ್ಯಮಗಳಿಗೂ ಮುಖ್ಯ
ಕ.ಪ್ರ.ವಾರ್ತೆ ಕೋಲಾರ ಅ.29
ಕಾಯಿದೆಗಳ ಪಾಲನೆ ಮಾಧ್ಯಮಗಳಿಗೂ ಅಗತ್ಯವೆಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ರೋಹಿಣಿ ಕಟೋಚ್ ಹೇಳಿದರು.
ಪತ್ರಿಕಾ ರಂಗದಲ್ಲೂ ಕೆಲವೊಂದು ಕಾಯ್ದೆಗಳ ಪಾಲನೆ ಮಾಡ ಬೇಕಾಗಿರುವುದು ಅಗತ್ಯವಿದೆ. ಪತ್ರಕರ್ತರ ಮೇಲೂ ಹೆಚ್ಚಿನ ಜವಾಬ್ದಾರಿ ಇದೆ. ಸಮಾಜದಲ್ಲಿನ ಲೋಪದೋಷಗಳನ್ನು ತಿದ್ದಿ ಉತ್ತಮ ಮಾರ್ಗದರ್ಶನ ತೋರಬೇಕೆಂದು ರೋಹಿಣಿ ಕರೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ರಾಮೀಣ ಪತ್ರಕರ್ತರಿಗೆ ಆಧುನಿಕ ತಂತ್ರಜ್ಞಾನ ಬಳಕೆ ಕುರಿತ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ಕ್ಷೇತ್ರದಲ್ಲಿ ಸಂಶೋಧನ ವರದಿಗಳಿಗೆ ಹೆಚ್ಚಿನ ಮಾನ್ಯತೆ ಇದೆ. ವರದಿಗಳು ಸತ್ಯಕ್ಕೆ ಸಮೀಪವಾಗಿರಬೇಕು. ಪ್ರಾಮಾಣಿಕವಾಗಿದ್ದಾಗ ಸಾರ್ವಜನಿಕರ ಗಮನ ಸೆಳೆಯಲು ಸಾಧ್ಯ. ಆದರೆ, ಕಾನೂನು ಬಗ್ಗೆ ಕೊಂಚ ಮಟ್ಟಿಗೆ ಅರಿವು ಇದ್ದಲ್ಲಿ ಮುಂದೆ ಆಗುವ ತೊಂದರೆಯಿಂದ ಪಾರಾಗಬಹುದೆಂದರು.
ಇದೇ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಲ್ಲಿ ಉತ್ತಮ ಅಭಿಪ್ರಾಯ ಮೂಡಿ ಬರಬೇಕಾದರೆ ಮಾಧ್ಯಮಗಳ ಪಾತ್ರ ಅತಿ ಮುಖ್ಯವೆಂದರು.ಯಾವುದೇ ಪ್ರಕರಣಕ್ಕೆ ಸಂಬಂಧಿಸಿದ ದೂರುಗಳನ್ನು ಪೊಲೀಸರು ಸ್ವೀಕರಿಸದೆ ಇರುವುದು ತಪ್ಪು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ನಿವಾರಣೆ ಮಾಡಿಕೊಳ್ಳಬೇಕೆಂದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ವಿ.ಪೊನ್ನಪ್ಪ ಪ್ರಾಸ್ತಾವಿಕ ನುಡಿಗಳಾಡುತ್ತಾ ಪತ್ರಕರ್ತರಿಗೆ ಬದ್ಧತೆ ಇರಬೇಕು. ಕೆಲವೊಂದು ಸಂದರ್ಭಗಳಲ್ಲಿ ಮೇಲ್ನೋಟಕ್ಕೆ ಕಂಡು ಬರುವ ವರದಿಗಳು ಸತ್ಯಕ್ಕೆ ದೂರವಾಗಿರುತ್ತದೆ ಎಂದು ನುಡಿದರು. ನೋಡಿದ್ದು ಸುಳ್ಳಾಗ ಬಹುದು, ಕೇಳಿದ್ದು ಸುಳ್ಳಾಗ ಬಹುದು, ಪ್ರಮಾಣಿಸಿ ನೋಡಿದಾಗ ನಿಜಾಂಶ ತಿಳಿಯುವುದು ಎಂಬ ನಾಣ್ನುಡಿಯಂತೆ ನಾವುಗಳು ಕಾರ್ಯ ನಿರ್ವಹಿಸಬೇಕೆಂದು ಪೊನ್ನಪ್ಪ ಪತ್ರಕರ್ತರಿಗೆ ಕರೆ ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬದನೂರು, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿ.ಎಂ. ರಂಗಾರೆಡ್ಡಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಇದ್ದರು. ಅಕಾಡೆಮಿ ಕಾರ್ಯದರ್ಶಿ ಶಂಕರಪ್ಪ ಹಾಗೂ ಸಂಘದ ಕಾರ್ಯದರ್ಶಿ ಕೆ.ಎಸ್.ಗಣೇಶ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

