ಕೌಶಲ್ಯ ಇಲ್ಲದವರಿಗೂ ಉದ್ಯೋಗ ಕೊಡಿ
ಕೋಲಾರ: ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗಾಗಿ ರೈತರು ಕೃಷಿ ಭೂಮಿಯನ್ನು ನೀಡಿ ಉಪಕಾರ ಮಾಡಿದ್ದಾರೆ. ಇದಕ್ಕೆ ಪ್ರತಿಫಲವಾಗಿ ಕೈಗಾರಿಕೋದ್ಯಮಿಗಳು ಭೂಮಿ ಕೊಟ್ಟವರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಹೊಸದಾಗಿ ಸ್ಥಾಪಿಸಿರುವ ಸ್ಕಾನಿಯಾ ಕಾರ್ಖಾನೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಿ ಉದ್ದಿಮೆಗಳನ್ನು ಸ್ಥಾಪಿಸಲು ಅವಕಾಶ ನೀಡುವುದೇ ಸ್ಥಳೀಯರಿಗೆ ಉದ್ಯೋಗ ಸಿಗಲಿ ಎಂಬ ಕಾರಣಕ್ಕೆ. ಉದ್ದಿಮೆದಾರರು ರಾಜ್ಯ ಸರ್ಕಾರದ ಆಶಯ ಈಡೇರಿಸಬೇಕು, ಕೌಶಲ್ಯ ಇರಲಿ,ಇಲ್ಲದಿರಲಿ ಭೂಮಿ ಕೊಟ್ಟ ರೈತರಿಗೆ ಉದ್ಯೋಗ ನೀಡಲೇಬೇಕೆಂದು ಉದ್ದಿಮೆದಾರರಿಗೆ ಸೂಚನೆ ನೀಡಿದರು.
ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ಜವಾಬ್ದಾರಿ ಸರ್ಕಾರದ ಮೇಲೂ ಇದೆ. ಅಧಿಕಾರಿಗಳು ಈ ವಿಚಾರದಲ್ಲಿ ಮುತುವರ್ಜಿ ವಹಿಸಬೇಕೆಂದು ತಿಳಿಸಿದರು. ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ, ಕೋಲಾರ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಬೇಕಾದ ಎಲ್ಲ ರೀತಿಯ ಮೂಲ ಸೌಕರ್ಯವನ್ನು ಒದಗಿಸುತ್ತೇವೆ, ಇದಕ್ಕೆ ಪ್ರತಿಫಲವಾಗಿ ಸ್ಥಳೀಯರಿಗೆ ಉದ್ಯೋಗ ನೀಡಬೇಕೆಂದು ಹೇಳಿದರು.
ಜಿಲ್ಲೆಯಲ್ಲಿ 3.50 ಲಕ್ಷ ಕುಟುಂಬಗಳಿದ್ದು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಓದಿರುವವರಿಗೆ ಉತ್ತಮ ತರಬೇತಿ ನೀಡಿ ಉದ್ಯೋಗ ಕಲ್ಪಿಸಬೇಕೆಂಬ ಸಚಿವರು, ಜನತೆಗೆ ಕೆಲಸ ಸಿಗುವುದರಿಂದ ಆರ್ಥಿಕಾಭಿವೃದ್ಧಿಯ ಮೂಲಕ ಸ್ವಾವಲಂಭಿಗಳಾಗುವುದಕ್ಕೆ ಸಹಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಶಾಸಕ ವರ್ತೂರ್ ಪ್ರಕಾಶ್ ಮಾತನಾಡಿ, ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ, ನರಸಾಪುರ ಕೈಗಾರಿಕೆ ಪ್ರದೇಶದಲ್ಲಿ ತಲೆ ಎತ್ತಿರುವ ಕೈಗಾರಿಕೆಗಳಲ್ಲಿ ತಮಿಳುನಾಡಿನ ಯುವಕರಿಗೆ ಕೆಲಸ ಸಿಗುತ್ತಿದೆ. ಆದರೆ, ಕೋಲಾರ ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಯವರಿಗೆ ಕೆಲಸ ನೀಡುತ್ತಿಲ್ಲ. ಒಂದು ವೇಳೆ ಕೆಲಸ ಕೊಟ್ಟರೂ ಅದು ಕಸ ಗೂಡಿಸುವ ಕೆಲಸವಾಗಿರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಅರ್ಹರು ಇದ್ದಾರೆ, ಅವರನ್ನು ಗುರುತಿಸುತ್ತಿಲ್ಲ, ಮುಖ್ಯಮಂತ್ರಿಗಳು ಕೂಡಲೇ ಅಧಿಕಾರಿಗಳ ಸಭೆ ಕರೆದು ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ಒತ್ತಾಯಿಸಿದರು.
ಕೋಲಾರ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗಾಗಿ ತಾವು ರೈತರ ಮತ್ತು ಸಂಘಟನೆಗಳ ವಿರೋಧಕ್ಕೆ ಅವಕಾಶವಿಲ್ಲದ ರೀತಿಯಲ್ಲಿ ಕನಿಷ್ಠ 1 ಸಾವಿರ ಎಕರೆ ಭೂಮಿಯನ್ನು ಕೊಡಿಸಲು ಸಿದ್ಧವಿದ್ದು ಸರ್ಕಾರ ಮುಂದೆ ಬಂದರೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

