ತಸ್ಮೆ ೈ ಶ್ರೀ ಗುರುವೇ ನಮಃ
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಸೆ. 5
ಶಿಕ್ಷಕರು ಸ್ವಯಂ ಅರ್ಜಿಗಳನ್ನು ಹಾಕಿ ಪ್ರಶಸ್ತಿ ನೀಡಿ ಎಂದು ಕೇಳಿಕೊಳ್ಳುವಂತಹ ವ್ಯವಸ್ಥೆಯನ್ನು ಮೊದಲು ತೆಗೆದುಬಿಡಬೇಕು. ಶಿಕ್ಷಣ ಇಲಾಖೆಯಿಂದಲೇ ಒಂದು ಸಮಿತಿ ರಚಿಸಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುವ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿಯನ್ನು ನೀಡುವಂತಾಗಬೇಕೆಂದು ವಿಧಾನಪರಿಷತ್ ಸದಸ್ಯ ವೈ.ಎ .ನಾರಾಯಣಸ್ವಾಮಿ ಒತ್ತಾಯಿಸಿದರು.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿ.ಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡುತ್ತಿದ್ದರು.
ತಾವು ಮಾಡುತ್ತಿರುವ ಕೆಲಸದ ಬಗ್ಗೆ ಶಿಕ್ಷಕರು ಸ್ವಯಂ ಹೇಳಿಕೊಳ್ಳಬೇಕೇ ಪ್ರಾಮಾಣಿಕವಾಗಿ ಕೆಲಸ ಮಾಡುವ ಶಿಕ್ಷಕರು ನಮಗೆ ಪ್ರಶಸ್ತಿ ನೀಡಿ ಎಂದು ಕೇಳಿಕೊಳ್ಳಬೇಕೇ ಇಂತಹ ದುರ್ಗತಿ ಶಿಕ್ಷಕರಿಗೆ ಬೇಕಾ ಅರ್ಜಿ ಹಾಕಿದಾಗ ಮಾತ್ರ ಪ್ರಶಸ್ತಿ ನೀಡುವುದಾ ಎಂದೆಲ್ಲಾ ಪ್ರಶ್ನಿಸಿದ ಅವರು, ಪ್ರಶಸ್ತಿ ನೀಡುವವರೆಗೂ ಯಾರಿಗೆ ಪ್ರಶಸ್ತಿ ನೀಡಲಾಗುತ್ತದೆ ಎನ್ನುವುದು ತಿಳಿಯಬಾರದು. ಸಮಿತಿ ಪರಿಶೀಲನೆ ನಡೆಸಿ ಪ್ರಾಮಾಣಿಕವಾಗಿ ಉತ್ತಮ ಸೇವೆ ಸಲ್ಲಿಸುವ ಶಿಕ್ಷಕರನ್ನು ಗುರುತಿಸುವಂತಾಗಬೇಕು. ಅದು ಬಿಟ್ಟು ಅರ್ಜಿ ಹಾಕಿದವರಿಗೆ ಮಾತ್ರ ಸನ್ಮಾನ ಮಾಡಿದರೆ ಸರಿ ಹೋಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಶಿಕ್ಷಕರು ಸದಾ ಅಧ್ಯಯನ ಶೀಲರು, ಚಿಂತಕರು, ವಿರ್ಮಶಕರಾಗಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಜತೆಗೆ ಮಕ್ಕಳಲ್ಲಿ ಸ್ವಯಂ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವಂತಹ ಚೈತನ್ಯವನ್ನು ತರಬೇಕೆಂದು ಸಲಹೆ ನೀಡಿದರು.
ಶಿಕ್ಷಕರಾಗಿದ್ದ ರಾಧಾಕೃಷ್ಣನ್ ಅವರು ಮೇಧಾವಿ, ಶಿಕ್ಷಣ ತಜ್ಞ, ಚಿಂತನಾಶೀಲರು ಆಗಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ಸ್ಥಾನವನ್ನು ಪಡೆದುಕೊಂಡು ಶಿಕ್ಷಕ ವರ್ಗದ ಗೌರವವನ್ನು ಮತ್ತಷ್ಟು ಹೆಚ್ಚಿಸಿದರು. ಇದರಿಂದ ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಇವರನ್ನು ಪ್ರತಿಯೊಬ್ಬರು ಆದರ್ಶವಾಗಿ ತೆಗೆದುಕೊಳ್ಳಬೇಕೆಂದ ಅವರು, ಒಬ್ಬ ವ್ಯಕ್ತಿ ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು. ಇದನ್ನರಿತು ಶಿಕ್ಷಕರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಮಕ್ಕಳನ್ನು ತಿದ್ದಿತೀಡಬೇಕು. ಉತ್ತಮ ಸಮಾಜವನ್ನು ನಿರ್ಮಾಣ ಮಾಡುವ ಕರ್ತೃಗಳಾಗಬೇಕೆಂದರು. ಶೈಕ್ಷಣಿಕ ಪ್ರಗತಿಯನ್ನು ಸಾಧಿಸುವ ಸಲುವಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಸಕಾಲಕ್ಕೆ ಜಾರಿಗೆ ತರುತ್ತಿದ್ದರೂ ರಾಜ್ಯ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಹಿಂದುಳಿದಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಶಿಕ್ಷಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿದೆ. ಆದರೂ ಶಿಕ್ಷಕರು ಎಷ್ಟೇ ಅಡ್ಡಿ ಆತಂಕಗಳು ಎದುರಾದರೂ ಸಹ ತಮ್ಮ ಕರ್ತವ್ಯ ನಿಷ್ಠೆಯಲ್ಲಿ ಲೋಪ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ. ಕೆ.ಸುಧಾಕರ್, ಜೀವತೆತ್ತು ದೇಶವನ್ನು ಕಾಪಾಡುವ ಸೈನಿಕರ ಸೇವೆ ಮತ್ತು ದೇಶದಲ್ಲಿ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಕ್ಷಕ ವೃತ್ತಿ ಹೊಟ್ಟೆಪಾಡಿಗೆ ಮಾಡುವ ಕೆಲಸವಲ್ಲ. ಅವು ಮಹತ್ತರವಾದ ಸ್ಥಾನವನ್ನು ಹೊಂದಿರುವಂತಹುದು ಎಂದರು.
ನಿವೃತ್ತ ಉಪನ್ಯಾಸಕ ಪ್ರದ್ಮನಾಭ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜಿತ್ ಪ್ರಸಾದ್, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಕೆ.ಎಲ್. ಶ್ರೀನಿವಾಸ್ ಮಾತನಾಡಿದರು. ರಕ್ತದಾನ ಶಿಬಿರ ಕೈಗೊಂಡು ಅನೇಕ ಶಿಕ್ಷಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು, ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಶಿಕ್ಷಕರಿಗೆ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಪ್ರಶಸ್ತಿ ನೀಡಿದರು. ಶಿಕ್ಷಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.
ಜಿ.ಪಂ. ಅಧ್ಯಕ್ಷ ಎಸ್.ಎಸ್. ಚಿನ್ನಪ್ಪ, ಜಿಲ್ಲಾಧಿಕಾರಿ ಡಾ.ಆರ್. ವಿಶಾಲ್, ಸಿಇಓ ನೀಲಾ ಮಂಜುನಾಥ್, ಜಿ.ಪಂ. ಮಾಜಿ ಅಧ್ಯಕ್ಷ ಕೃಷ್ಣಪ್ಪ, ಡಿವೈಎಸ್ಪಿ ದೇವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

