ಸುದ್ದಿ ಸಂಕ್ಷೇಪ
ವಿದ್ಯಾರ್ಥಿನಿಲಯಕ್ಕೆ ಸಚಿವರ ಭೇಟಿ
ಬಾಗೇಪಲ್ಲಿ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಪಟ್ಟಣದ ಅಂಬೇಡ್ಕರ್ ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ ನೀಡಿದ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಅಲ್ಲಿನ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿ, ತಾಲೂಕಿನಾದ್ಯಂತ ಇರುವ ಬಹುತೇಕ ಸಾರ್ವಜನಿಕ ವಿದ್ಯಾರ್ಥಿನಿಲಯಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಇದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ವಿದ್ಯಾರ್ಥಿಗಳಿಂದ ದೂರು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.
ಸಚಿವರಿಗೆ ಸನ್ಮಾನ: ಶಾಸಕರು ಗೃಹ ಕಚೇರಿಯಲ್ಲಿ ಏರ್ಪಡಿಸಿದ್ದ ಸನ್ಮಾನ ಸಭೆಯಲ್ಲಿ ಮಾತನಾಡಿ, ಈ ಭಾಗದ ಶಾಸಕರು ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಚುನಾವಣೆಯ ಸಂದರ್ಭದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಜನಾದೇಶದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಎಂದ ಅವರು, ಇದೇ ತಿಂಗಳ 20ರಂದು ಚಿಕ್ಕಬಳ್ಳಾಪುರ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ರಾಜ್ಯ ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ಸಚಿವರು ನಾಯಕರು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಸುಬ್ಬಾರೆಡ್ಡಿಯವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಂದು ತಿಳಿಸಿದರು.
ಸುವರ್ಣ ಗ್ರಾಮದ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ ತಾಲೂಕಿನ ಆಚೇಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿದರು.
ಸಚಿವ ಬೈರೇಗೌಡರಿಂದ ಕೃಷಿ ಪ್ರಗತಿ ಪರಿಶೀಲನೆ
ಚಿಕ್ಕಬಳ್ಳಾಪುರ: ಕೃಷಿ ರಾಜ್ಯ ಸಚಿವ ಕೃಷ್ಣಬೈರೇಗೌಡರವರು ಸೆ.18 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ತಾಲೂಕಿನ ವಿವಿಧೆಡೆ ಸಂಚರಿಸಿ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನಿರ್ದೇಶಕರು ಹಾಗೂ ಕೃಷಿ ವಿಶ್ವವಿದ್ಯಾಲಯ ಕುಲಪತಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ.
ನಮೋ ಬೆಂಬಲಿಸಿ ಸಂಭ್ರಮ
ಕೋಲಾರ: ಬಿಜೆಪಿಯ ಮುಂದಿನ ಪ್ರಧಾನಿ ಅಭ್ಯರ್ಥಿಯಾಗಿ ಗುಜರಾತಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಅಧಿಕೃತ ಘೋಷಣೆಯ ಮೊದಲೇ ನಗರದಲ್ಲಿ ಬಿಜೆಪಿಯ ಕಾರ್ಯಕರ್ತರು ವಿಜಯೋತ್ಸವ ಆಚರಿಸುವ ಮೂಲಕ ಸಂಭ್ರಮಿಸಿದರು. ನಗರದ ಸರ್ಕಾರಿ ಬಸ್ ನಿಲ್ದಾಣ ಸಮೀಪ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿಕೆ ಮಾಡಿ, ಮೋದಿಯವರ ಪರ ಜಯಕಾರ ಹಾಕಿ ಕುಣಿದು ಕುಪ್ಪಳಿಸಿದರು. ಮಹಾಸಭಾದ ಮುಖಂಡರಾದ ವೆಂಕಟೇಶ್, ಓಂಶಕ್ತಿ ಚಲಪತಿ ಸೇರಿದಂತೆ ನೂರಾರು ಯುವಕರು ಇದ್ದರು.
ಮೂಲ ಸೌಕರ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕೋಲಾರ: ನಗರದ ಸರ್ಕಾರಿ ಬಾಲಕರ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಯಾವುದೇ ಮೂಲ ಸೌಕರ್ಯಗಳು ಇಲ್ಲದಿದ್ದರೂ ವಿದ್ಯಾರ್ಥಿಗಳಿಂದ 1200 ರು. ಅಭಿವೃದ್ಧಿ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ದ್ವಿತೀಯ ಎಂಎ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು. ಉನ್ನತ ಶಿಕ್ಷಣ ಪಡೆಯಲು ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ, ಗ್ರಂಥಾಲಯದ ಸೌಕರ್ಯ ಕಲ್ಪಿಸಿಲ್ಲ, ತರಗತಿ ಕೊಠಡಿಗಳ ಕೊರತೆ ಹಾಗೂ ವಿದ್ಯುತ್ ಇಲ್ಲದೆ ಕತ್ತಲಿನಲ್ಲಿ ಪಾಠ-ಪ್ರವಚನ ಕೇಳುವಂತಾಗಿದೆ ಎಂದು ವಿದ್ಯಾರ್ಥಿಗಳು ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥರಾದ ಮಧುಲತಾ ಹಾಗೂ ವ್ಯವಸ್ಥಾಪಕ ಲಕ್ಷ್ಮೀಪತಿ ಅವರಿಗೆ ದೂರಿದರು. ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯವಿಲ್ಲದಿದ್ದರೂ ಅಭಿವೃದ್ಧಿ ಶುಲ್ಕ ವಸೂಲಿ ಮಾಡುವುದು ಸರಿಯಲ್ಲ, ಈ ಕೇಂದ್ರದಲ್ಲಿ ಮಾತ್ರದಲ್ಲಿ ಏಕೆ ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದರು. ಮನವಿ ಸ್ವೀಕರಿಸಿದ ಸ್ನಾತಕೋತ್ತರ ಕೇಂದ್ರದ ಮುಖ್ಯಸ್ಥೆ ಮಧುಲತಾ ತಾವು ಹೊಸದಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಬೆಂಗಳೂರು ವಿವಿಯ ಕುಲಪತಿ ಮತ್ತು ಕುಲಸಚಿವರ ಜೊತೆ ಮಾತನಾಡಿ ಸಮಸ್ಯೆ ನಿವಾರಣೆ ಮಾಡುವುದಾಗಿ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಿಲ್ಲಿಸಿದರು. ವಿದ್ಯಾರ್ಥಿ ಮುಖಂಡ ಹೂವಳ್ಳಿ ನಾಗರಾಜ್, ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಾದ ಚಲಪತಿ, ಮಂಜುಳಾ, ಗೋಪಮ್ಮ, ಪ್ರತಿಭಾ, ರಾಜೇಶ್, ಮಂಜುನಾಥ್, ನಾಗರಾಜ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

