ಕೋಲಾರ

ರಸ್ತೆಯಲ್ಲೇ ಗಿಡ ನೆಟ್ಟು ಪ್ರತಿಭಟನೆ

Published On :

ಕ.ಪ್ರ. ವಾರ್ತೆ, ಕೆಜಿಎಫ್, ಸೆ.16
ನಗರ ಪ್ರದೇಶದ ರಸ್ತೆಗಳು ತೀರಾ ಹದಗೆಟ್ಟಿದ್ದು, ಕ್ಷೇತ್ರದ ಸಾರ್ವಜನಿಕರು ಹಾಗೂ ವಾಹನ ಚಾಲಕರು ಪರದಾಡುವಂತಾಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆಯವರು ಕೂಡಲೇ ರಸ್ತೆ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸಮತಾ ಸೈನಿಕದಳದ ನೂರಾರು ಕಾರ್ಯಕರ್ತರು ಹಾಗೂ ಆಟೋ ಚಾಲಕರು ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಪ್ರತಿಭಟನೆ ನಡೆಸಿದರು.
ನಗರದ ಉರಿಗಾಂ ರೇಲ್ವೆ ರಸ್ತೆ, ಅಶೋಕ್‌ನಗರ ಸ್ವಾಮಿನಾಥಪುರಂ ರಸ್ತೆಗಳು ಸೇರಿದಂತೆ ಇತರೆ ಪ್ರಮುಖ ರಸ್ತೆಗಳು ತೀರಾ ಹದಗೆಟ್ಟಿವೆ. ಹಳ್ಳ- ಕೊಳ್ಳಗಳಿಂದ ಕೂಡಿರುವ ರಸ್ತೆಗಳಲ್ಲಿ ಪ್ರತಿದಿನ ಸಾರ್ವಜನಿಕರು, ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಹಾಗೂ ವಾಹನ ಚಾಲಕರು ಈ ರಸ್ತೆಗಳಲ್ಲಿ ಓಡಾಡಲು ಪರದಾಡುವಂತಾಗಿದೆ. ಅಲ್ಲದೆ, ಮಳೆ ಬಿದ್ದಾಗ ರಸ್ತೆಯಲ್ಲಿ ನೀರು ತುಂಬಿಕೊಂಡು ಕೆಸರುಗದ್ದೆಯಾಗುತ್ತದೆ ಎಂದು ಆರೋಪಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.  ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಕ್ಷೇತ್ರದ ಪ್ರತಿನಿಧಿಗಳು ಕೂಡಲೇ ಎಚ್ಚೆತ್ತು ರಸ್ತೆ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಮನವಿಪತ್ರವನ್ನು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಹನುಮಂತಪ್ಪ ಅವರಿಗೆ ಸಲ್ಲಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಹೆಜ್ಜೆಗೆಜ್ಜೆ ಶ್ರೀನಿವಾಸ್, ನಗರ ಘಟಕ ಅಧ್ಯಕ್ಷ ಎಂ.ಕುಮಾರ್, ಉಪಾಧ್ಯಕ್ಷ ಎಸ್. ರವಿ, ಪಿಚ್ಚಹಳ್ಳಿ ಮಂಜುನಾಥ್, ರವಿಕುಮಾರ್ ಸೇರಿದಂತೆ ನೂರಾರು ಆಟೋ ಚಾಲಕರು, ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.